ಭದ್ರಾವತಿ ತಾಲೂಕು ಕಚೇರಿ ರಸ್ತೆಯಲ್ಲಿರುವ ಶ್ರೀ ವೀರಶೈವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ಸದಸ್ಯರು ಹಾಗು ಸಿಬ್ಬಂದಿಗಳಿಗೆ ಕೊರೊನಾ ಲಸಿಕೆ ಅಭಿಯಾನಕ್ಕೆ ಮಂಗಳವಾರ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.
ಭದ್ರಾವತಿ, ಜೂ. ೮: ಸದಾ ಕಾಲ ಜನರ ಮಧ್ಯೆ ಬೆರೆಯುವ ಚುನಾಯಿತ ಪ್ರತಿನಿಧಿಗಳಿಗೆ ಕೊರೋನಾ ಲಸಿಕೆ ಅತ್ಯವಶ್ಯಕವಾಗಿದ್ದು, ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿಯೇ ಮೊದಲ ಪ್ರಯತ್ನವಾಗಿ ಚುನಾಯಿತ ಪ್ರತಿನಿಧಿಗಳ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದರು.
ಅವರು ಮಂಗಳವಾರ ತಾಲೂಕು ಕಚೇರಿ ರಸ್ತೆಯಲ್ಲಿರುವ ಶ್ರೀ ವೀರಶೈವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ಸದಸ್ಯರು ಹಾಗು ಸಿಬ್ಬಂದಿಗಳಿಗೆ ಕೊರೊನಾ ಲಸಿಕೆ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಜನರ ಮಧ್ಯೆ ಬೆರೆಯುವ ಚುನಾಯಿತ ಪ್ರತಿನಿಧಿಗಳಿಗೆ ಸೋಂಕು ವೇಗವಾಗಿ ಹಬ್ಬುತ್ತಿದೆ. ಈ ಹಿನ್ನಲೆಯಲ್ಲಿ ಲಸಿಕೆ ಅಗತ್ಯವಾಗಿದ್ದು, ನಗರಸಭೆ ೩೫ ವಾರ್ಡ್‌ಗಳ ಸದಸ್ಯರು, ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ೨೨ ಗ್ರಾಮ ಪಂಚಾಯಿತಿಗಳ ಸದಸ್ಯರು ಹಾಗು ಸಿಬ್ಬಂದಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಶೀಘ್ರದಲ್ಲಿಯೇ ಕ್ಷೇತ್ರದ ಪ್ರತಿಯೊಬ್ಬರಿಗೂ ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment