Thursday, July 22, 2021

ಜನರು ನೆನಪಿನಲ್ಲಿಟ್ಟುಕೊಳ್ಳುವಂತೆ ಕರ್ತವ್ಯ ನಿರ್ವಹಿಸಿ : ಮನೋಹರ್

ಭದ್ರಾವತಿ ನಗರಸಭೆ ಪೌರಾಯುಕ್ತರಾಗಿ ಸುಮಾರು ೪ ವರ್ಷ ಸೇವೆ ಸಲ್ಲಿಸಿ ಯೋಜನಾ ನಿರ್ದೇಶಕರಾಗಿ ಮುಂಬಡ್ತಿಹೊಂದಿ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಗುರುವಾರ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಚಿಕ್ಕಮಗಳೂರು ಜಿಲ್ಲಾ ಯೋಜನಾ ನಿರ್ದೇಶಕ ಮನೋಹರ್ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜು. ೨೨: ಜನರು ನಮ್ಮನ್ನು ನೆನಪಿನಲ್ಲಿಟ್ಟುಕೊಳ್ಳುವಂತೆ ಕರ್ತವ್ಯ ನಿರ್ವಹಿಸಬೇಕು. ಆಗ ಮಾತ್ರ ಆ ಹುದ್ದೆಗೆ ಸಾರ್ಥಕತೆ ಬರುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾ ಯೋಜನಾ ನಿರ್ದೇಶಕ ಮನೋಹರ್ ಹೇಳಿದರು.
    ನಗರಸಭೆ ಪೌರಾಯುಕ್ತರಾಗಿ ಸುಮಾರು ೪ ವರ್ಷ ಸೇವೆ ಸಲ್ಲಿಸಿ ಯೋಜನಾ ನಿರ್ದೇಶಕರಾಗಿ ಮುಂಬಡ್ತಿಹೊಂದಿ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಗುರುವಾರ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
     ನಗರಸಭೆ ಪೌರಾಯುಕ್ತರಾಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿರುವ ತೃಪ್ತಿ ನನಗಿದೆ. ನಗರಸಭೆ ೩೫ ವಾರ್ಡ್‌ಗಳಲ್ಲೂ ಜನರು ನನ್ನನ್ನು ಗುರುತಿಸುತ್ತಾರೆ. ಒಬ್ಬ ಅಧಿಕಾರಿಗೆ ಈ ರೀತಿಯ ಜನರ ಮೆಚ್ಚುಗೆ ಇದ್ದರೆ ಅಷ್ಟೆ ಸಾಕು ಬೇರು ಏನು ಬೇಕಾಗಿಲ್ಲ. ಅಧಿಕಾರಿಗಳಿಗೆ ಸಂಕಷ್ಟದಲ್ಲಿರುವವರನ್ನು ಗುರುತಿಸುವ ಹಾಗು ಅವರ ಸಮಸ್ಯೆಗಳನ್ನು ಬಗೆಹರಿಸುವ ಇಚ್ಛಾಶಕ್ತಿ ಇರಬೇಕು. ಅಲ್ಲದೆ ಎಲ್ಲರೊಂದಿಗೆ ಹೊಂದಿಕೊಳ್ಳುವ ಮನಸ್ಥಿತಿ ರೂಢಿಸಿಕೊಳ್ಳಬೇಕೆಂದರು.
     ಸಮಾರಂಭದಲ್ಲಿ ಪಾಲ್ಗೊಂಡಿದ್ದ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ನಗರಸಭೆ ಮಾಜಿ ಸದಸ್ಯರು, ಅಧಿಕಾರಿಗಳು, ಪತ್ರಕರ್ತರು ಮಾತನಾಡಿ, ಮನೋಹರ್ ಅವರು ಕೇವಲ ಒಬ್ಬ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿಲ್ಲ. ಬದಲಾಗಿ ಮನೆ ಮಗನಂತೆ ಕರ್ತವ್ಯ ನಿರ್ವಹಿಸಿದರು. ಈ ಹಿನ್ನಲೆಯಲ್ಲಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಇಂತಹ ಅಧಿಕಾರಿಯನ್ನು ನಗರಸಭೆ ಇತಿಹಾಸದಲ್ಲಿ ಯಾರು ಕಂಡಿಲ್ಲ. ನಗರದ ಜನ ಎಂದಿಗೂ ಮರೆಯದಿರುವಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸಿದ್ದಾರೆ. ಇವರಿಗೆ ಭವಿಷ್ಯದಲ್ಲಿ ಇನ್ನೂ ಉನ್ನತ ಸ್ಥಾನಗಳು ಲಭಿಸುವ ಜೊತೆಗೆ ಜನರ ಸೇವೆ ಮಾಡುವ ಅವಕಾಶ ಲಭಿಸಲಿ ಎಂದು ಹಾರೈಸಿದರು.
     ನಗರಸಭೆ ಲೆಕ್ಕಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಸೈಯದ್ ಮೆಹಬೂಬ್ ಆಲಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಕಂದಾಯಾಧಿಕಾರಿ ರಾಜ್‌ಕುಮಾರ್, ಇಂಜಿನಿಯರ್ ರಂಗರಾಜಪುರೆ, ಪರಿಸರ ಅಭಿಯಂತರ ಪ್ರಭಾಕರ್, ನಗರಸಭೆ ವ್ಯವಸ್ಥಾಪಕಿ ಎಂ. ಸುನಿತಾಕುಮಾರಿ, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಚಿಕ್ಕಮಗಳೂರು ಜಿಲ್ಲಾ ಯೋಜನಾ ನಿರ್ದೇಶಕ ಮನೋಹರ್ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ನಗರಸಭೆ ಮಾಜಿ ಸದಸ್ಯರು, ನಗರಸಭೆ ಸಿಬ್ಬಂದಿಗಳು, ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

No comments:

Post a Comment