Monday, July 26, 2021

ಮಾಜಿ ಸೈನಿಕರಿಗೆ ಸೌಲಭ್ಯಗಳು ಸಮರ್ಪಕವಾಗಿ ದೊರೆಯಲಿ : ಟಿ.ವಿ ಪ್ರಕಾಶ್


ಭದ್ರಾವತಿಯಲ್ಲಿ ಸೋಮವಾರ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಹಿರಿಯ ಮಾಜಿ ಸೈನಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜು. ೨೬: ದೇಶ ಸೇವೆಯಲ್ಲಿ ತೊಡಗಿಸಿಕೊಂಡ ಸೈನಿಕರಿಗೆ ಸರ್ಕಾರದ ಸೌಲಭ್ಯಗಳು ಸರಿಯಾಗಿ ಲಭಿಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಗಮನ ಹರಿಸಬೇಕೆಂದು ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಹೇಳಿದರು.
    ಅವರು ಸೋಮವಾರ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಹಲವಾರು ಕಾರಣಗಳಿಂದಾಗಿ ಮಾಜಿ ಸೈನಿಕರಿಗೆ ಸರ್ಕಾರದ ಸೌಲಭ್ಯಗಳು ತಲುಪುವಲ್ಲಿ ವಿಳಂಬವಾಗುತ್ತಿವೆ. ಸರ್ಕಾರದ ಮಟ್ಟದಲ್ಲಿ ಹಲವಾರು ಬದಲಾವಣೆಗಳಾಗಬೇಕಾಗಿದೆ.  ಈ ನಿಟ್ಟಿನಲ್ಲಿ ಸಂಘಟನೆ ಮೂಲಕ ಹೋರಾಟ ನಡೆಸುವುದು ಅನಿವಾರ್ಯ ಎಂದರು.
    ಕಾರ್ಯಕ್ರಮದಲ್ಲಿ ಹಿರಿಯ ಮಾಜಿ ಸೈನಿಕರನ್ನು ಹಾಗು ಕೊರೋನಾ ಸಂದರ್ಭದಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಿರುವ ಮಾಜಿ ಸೈನಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಮಾಜಿ ಸೈನಿಕರ ಸಂಘದ ಅಧ್ಯಕ್ಷ ಎಲ್.ಡಿ ಅಶೋಕ್ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ್ ಆರ್. ಪ್ರದೀಪ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್  ಸೋಮಶೇಖರಯ್ಯ, ನಗರಸಭಾ ಸದಸ್ಯರಾದ ಬಿ.ಕೆ ಮೋಹನ್, ಚನ್ನಪ್ಪ, ಕಾಂತರಾಜ್, ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ ವೆಂಕಟಗಿರಿ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.  
   ಇದಕ್ಕೂ ಮೊದಲು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ ಸಲ್ಲಿಸಲಾಯಿತು. ಮಕ್ಕಳಿಂದ ದೇಶ ಭಕ್ತಿ ಗೀತೆ ಗಾಯನ ನಡೆಯಿತು.

No comments:

Post a Comment