Monday, August 16, 2021

೭ ಸಾವಿರ ಕಟ್ಟಡ ಕಾರ್ಮಿಕರಿಗೆ ಇನ್ನೂ ದಿನಸಿ ಸಾಮಗ್ರಿ ಬಂದಿಲ್ಲ

ಶಾಸಕ ಬಿ.ಕೆ ಸಂಗಮೇಶ್ವರ್ ಅಸಮಾಧಾನ



ಭದ್ರಾವತಿ ತರೀಕೆರೆ ರಸ್ತೆಯಲ್ಲಿರುವ ಶ್ರೀ ವಳ್ಳುವರ್ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ‍್ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ದಿನಸಿ ಸಾಮಗ್ರಿ ವಿತರಣೆ ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.   ಮಾತನಾಡಿದರು.  
ಭದ್ರಾವತಿ, ಆ. ೧೬:  ಕೋವಿಡ್-೧೯  ಲಾಕ್ ಡೌನ್ ಹಿನ್ನೆಲೆಯಲ್ಲಿ  ಸಂಕಷ್ಟಕ್ಕೆ ಒಳಗಾಗಿರುವ ತಾಲ್ಲೂಕಿನಲ್ಲಿರುವ ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದ ವತಿಯಿಂದ ನೆರವಿನ ಹಸ್ತವಾಗಿ ನೀಡಲಾಗುತ್ತಿರುವ ಆಹಾರ ಸಾಮಗ್ರಿ ಸಮರ್ಪಕವಾಗಿ ತಲುಪಿಲ್ಲ ಎಂದು ಶಾಸಕ ಬಿ ಕೆ ಸಂಗಮೇಶ್ವರ್ ಅಸಮಧಾನ ವ್ಯಕ್ತಪಡಿಸಿದರು.
ಅವರು ಸೋಮವಾರ ನಗರದ ತರೀಕೆರೆ ರಸ್ತೆಯಲ್ಲಿರುವ ಶ್ರೀ ವಳ್ಳುವರ್ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ‍್ಸ್ ಸೆಂಟ್ರಲ್ ಯೂನಿಯನ್ ವತಿಯಿಂದ  ಹಮ್ಮಿಕೊಳ್ಳಲಾಗಿದ್ದ ದಿನಸಿ ಸಾಮಗ್ರಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ  ಮಾತನಾಡಿದರು.  
ತಾಲೂಕಿನಲ್ಲಿ ಸುಮಾರು ೧೪ ಸಾವಿರ ಕಟ್ಟಡ ಕಾರ್ಮಿಕರಿದ್ದು, ಈ ಪೈಕಿ ಕೇವಲ ೫ ಸಾವಿರ ಕಾರ್ಮಿಕರಿಗೆ ಮಾತ್ರ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗಿದೆ. ಉಳಿದ ಕಾರ್ಮಿಕರಿಗೆ ದಿನಸಿ ಸಾಮಗ್ರಿ ವಿತರಿಸುವಂತೆ ಒತ್ತಾಯಿಸಿದ ಪರಿಣಾಮ ಇದೀಗ ಸುಮಾರು ೨ ಸಾವಿರ ಕಾರ್ಮಿಕರಿಗೆ ದಿನಸಿ ಸಾಮಗ್ರಿಗಳನ್ನು ಕಳುಹಿಸಿಕೊಡಲಾಗಿದೆ. ಇನ್ನೂ ಸುಮಾರು ೭ ಸಾವಿರ ಕಾರ್ಮಿಕರಿಗೆ ಇದುವರೆಗೂ ಆಹಾರ ಸಾಮಗ್ರಿ ತಲುಪದಿರುವುದು ವಿಷಾದನೀಯ ಬೆಳವಣಿಗೆ ಯಾಗಿದೆ ಎಂದರು.
ಕಟ್ಟಡ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಕಡ್ಡಾಯವಾಗಿ ಗುರುತಿನ ಚೀಟಿಗಳನ್ನು  ಮಾಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸದೇ ಗುರುತಿನ ಚೀಟಿ ಇಲ್ಲದವರು ತಕ್ಷಣ ಗುರುತಿನ ಚೀಟಿ ಇಲಾಖೆಯಿಂದ ಪಡೆದುಕೊಳ್ಳುವಂತೆ ಮನವಿ ಮಾಡಿದರು.  
ತಹಸೀಲ್ದಾರ್ ಆರ್. ಪ್ರದೀಪ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ನಗರಸಭಾ ಸದಸ್ಯರಾದ ಮಣಿ, ಜಾರ್ಜ್, ಸಂಘದ ಅಧ್ಯಕ್ಷ ಚಂದ್ರಶೇಖರ್, ಕಾರ್ಯದರ್ಶಿ ನಾರಾಯಣಸ್ವಾಮಿ, ಕಾರ್ಯಾಧ್ಯಕ್ಷ ಅಭಿಲಾಷ್, ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್‌ಬಾಬು, ಶಿವಮೊಗ್ಗ ಜಿಲ್ಲಾ ನಗರಾಧ್ಯಕ್ಷ ಮಣಿ, ಅಂತೋಣಿ, ಗೌರವಾಧ್ಯಕ್ಷ ಅಂತೋಣಿ ಕ್ರೂಸ್, ಸಲಹೆಗಾರ ಶಿವಣ್ಣಗೌಡ, ಜಿ. ಸುರೇಶ್, ಮನೋಹರ್, ಕೃಷ್ಣ,  ನಾಗೇಂದ್ರರೆಡ್ಡಿ, ಮಂಜುನಾಥ್, ಶ್ರೀನಿವಾಸ್ ಮತ್ತು ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.




No comments:

Post a Comment