Saturday, August 7, 2021

ಭದ್ರಾ ಜಲಾಶಯದಿಂದ ನದಿಗೆ ನೀರು : ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆ

ಭದ್ರಾ ಜಲಾಶಯದಿಂದ ಕಳೆದ ೨ ದಿನಗಳಿಂದ ನದಿಗೆ ನೀರು ಹರಿಸಲಾಗುತ್ತಿದ್ದು, ಇದರಿಂದಾಗಿ ಭದ್ರಾವತಿ ನಗರದಲ್ಲಿ ಹೃದಯ ಭಾಗದಲ್ಲಿ ಭದ್ರಾ ನದಿಯಲ್ಲಿರುವ ಶ್ರೀ ಸಂಗಮೇಶ್ವರ ದೇವಸ್ಥಾನ ನೀರಿನಲ್ಲಿ ಮುಳುಗಡೆಗೊಳ್ಳುವ ಹಂತಕ್ಕೆ ತಲುಪಿರುವುದು.
    ಭದ್ರಾವತಿ, ಆ. ೭: ಭದ್ರಾ ಜಲಾಶಯದಿಂದ ಕಳೆದ ೨ ದಿನಗಳಿಂದ ನದಿಗೆ ನೀರು ಹರಿಸಲಾಗುತ್ತಿದ್ದು, ಇದರಿಂದಾಗಿ ನಗರದಲ್ಲಿ ನದಿ ತೀರದ ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ.
    ನಗರದ ಹೃದಯ ಭಾಗದಲ್ಲಿರುವ ಹೊಸ ಸೇತುವೆ ಮುಳುಗುವ ಹಂತಕ್ಕೆ ಬಂದು ತಲುಪಿದ್ದು, ನದಿಯಲ್ಲಿರುವ ಶ್ರೀ ಸಂಗಮೇಶ್ವರ ದೇವಾಲಯ ಸಹ ಈಗಾಗಲೇ ಮುಳುಗಡೆ ಹಂತ ತಲುಪಿದೆ. ತಾಲೂಕಿನಾದ್ಯಂತ ಮಳೆ ಹೆಚ್ಚಾಗಿದ್ದು, ಶನಿವಾರ ಬೆಳಿಗ್ಗೆಯಿಂದ ಮಳೆಯಾಗುತ್ತಿದೆ. ಯಾವುದೇ ಹೆಚ್ಚಿನ ಹಾನಿ ಸಂಭವಿಸಿಲ್ಲ.
    ಅಲ್ಲದೆ ಜಲಾಶಯದ ವ್ಯಾಪ್ತಿಯಲ್ಲೂ ಮಳೆ ಹೆಚ್ಚಾಗುತ್ತಿದ್ದು, ಇದರಿಂದಾಗಿ ನದಿಗೆ ಹರಿಸಲಾಗುತ್ತಿರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆ ಕಂಡು ಬರುತ್ತಿದೆ. ಈ ಹಿನ್ನಲೆಯಲ್ಲಿ ಈ ಬಾರಿ ಸಹ ತಗ್ಗು ಪ್ರದೇಶದ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸುವುದು ಅನಿವಾರ್ಯವಾಗಿದೆ. ಅಲ್ಲದೆ ಹೊಸ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗುವುದು ಸಹ ಬಹುತೇಕ ಖಚಿತವಾಗಿದ್ದು, ಹಳೇ ಸೇತುವೆ ಮೇಲೆ ಸಂಚಾರ ದಟ್ಟಣೆ ಅಧಿಕವಾಗಲಿದ್ದು, ಈ ಸೇತುವೆ ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಬದಲಿ ಸೇತುವೆ ನಿರ್ಮಿಸಲಾಗುತ್ತಿದೆ. ಆದರೆ ಈ ಸೇತುವೆ ಇನ್ನೂ ಪೂರ್ಣಗೊಂಡಿಲ್ಲ.

No comments:

Post a Comment