Saturday, September 25, 2021

ರಸ್ತೆ ಬದಿ ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ

ಭದ್ರಾವತಿ, ಸೆ. ೨೫:  ತಾಲೂಕಿನ ಕೂಡ್ಲಿಗೆರೆ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಶ್ರೀ ಸುಬ್ರಮಣ್ಯಸ್ವಾಮಿ ದೇವಸ್ಥಾನದ ಬಳಿ ಭದ್ರಾವತಿ ಕಡೆಯಿಂದ ಚನ್ನಗಿರಿ ಮಾರ್ಗವಾಗಿ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದು ಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.  
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನ ಚಾಲಕ ಸೀಟ್‌ಬೆಲ್ಟ್ ಧರಿಸಿದ್ದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ಸ್ಥಳೀಯರು ಜಮಾಸಿದ್ದು, ಘಟನೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಲಿತ ಮುಖಂಡ ಕೆ. ರಂಗನಾಥ್, ಲೋಕೋಪಯೋಗಿ ಇಲಾಖೆಗೆ ಸೇರಿದ ಸ್ಥಳದಲ್ಲಿ ಯಾವುದೇ ಅನುಮತಿ ಇಲ್ಲದೆ ವಿದ್ಯುತ್ ಕಂಬಗಳನ್ನು ಅಳವಡಿಸಿರುವುದು ಅಪಘಾತಕ್ಕೆ ಕಾರಣವಾಗಿದೆ. ತಕ್ಷಣ ಸಂಬಂಧಪಟ್ಟ ಇಲಾಖೆಯವರು ಎಚ್ಚೆತ್ತುಕೊಂಡು ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಿ ಸಾರ್ವಜನಿಕರು, ಶಾಲಾ ಮಕ್ಕಳು ಮತ್ತು ವಾಹನಗಳ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಒತ್ತಾಯಿಸಿದ್ದಾರೆ.  


No comments:

Post a Comment