Thursday, September 2, 2021

ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟಕ್ಕೆ ಬೆಂಬಲ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ನಗರಕ್ಕೆ ಆಗಮಿಸಿದ ಶ್ರೀ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರಿಗೆ ಗೌರವ ಸಮರ್ಪಣೆ ಸಲ್ಲಿಸಲಾಯಿತು.  
    ಭದ್ರಾವತಿ, ಸೆ. ೨: ವೀರಶೈವ ಲಿಂಗಾಯಿತ ಪಂಚಮಸಾಲಿ ಸಮಾಜದ ಪರವಾಗಿ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಕೂಡಲ ಸಂಗಮದ ಶ್ರೀ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರಿಗೆ ಬೆಂಬಲ ನೀಡುವುದಾಗಿ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಗುರುವಾರ ನಗರಕ್ಕೆ ಆಗಮಿಸಿದ ಶ್ರೀ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರಿಗೆ ಗೌರವ ಸಮರ್ಪಣೆ ಸಲ್ಲಿಸಿ ಮಾತನಾಡಿದರು.
    ಸ್ವಾಮೀಜಿಯವರು ಯಾವುದೇ ಸ್ವಾರ್ಥಕ್ಕಾಗಿ ಹೋರಾಟ ನಡೆಸುತ್ತಿಲ್ಲ. ಪಂಚಮಸಾಲಿ ಸಮಾಜದ ಏಳಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಸಮಾಜದ ಮುಖ್ಯ ವಾಹಿನಿಯಲ್ಲಿ ಎಲ್ಲರೂ ಸಮಾನವಾಗಿ ಗುರುತಿಸಿಕೊಳ್ಳಬೇಕೆಂಬುದು ಹೋರಾಟದ ಉದ್ದೇಶವಾಗಿದೆ. ಇದನ್ನು ಎಲ್ಲರೂ ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ನ್ಯಾಯಬದ್ಧವಾದ ಹೋರಾಟಕ್ಕೆ ಸದಾ ಕಾಲ ಬೆಂಬಲ ನೀಡುತ್ತೇನೆ. ಸ್ವಾಮೀಜಿಯವರ ಹೋರಾಟಕ್ಕೆ ಕೈ ಜೋಡಿಸುತ್ತೇನೆ ಎಂದರು.
    ಶ್ರೀ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ನಮ್ಮ ಹೋರಾಟಕ್ಕೆ ಎಲ್ಲೆಡೆ ವ್ಯಾಪಕವಾಗಿ ಬೆಂಬಲ ಲಭಿಸುತ್ತಿರುವುದು ಸಂತೋಷದ ವಿಚಾರವಾಗಿದೆ. ಶಾಸಕ ಸಂಗಮೇಶ್ವರ್ ಸಹ ಬೆಂಬಲ ಸೂಚಿಸಿರುವುದು ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬಿದಂತಾಗಿದೆ. ಎಲ್ಲರೂ ನಮ್ಮ ಹೋರಾಟಕ್ಕೆ ಕೈಜೋಡಿಸಬೇಕೆಂದರು.
    ಪಂಚಮಸಾಲಿ ಸಮಾಜದ ಚಾಮರಾಜನಗರ ಜಿಲ್ಲಾಧ್ಯಕ್ಷ ಮಲ್ಲೇಶ್, ಹಳೇನಗರದ ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್.
ಮಹೇಶ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಮಾಜದ ತಾಲೂಕು ಅಧ್ಯಕ್ಷ ಎಸ್. ಸತೀಶ್ ಅಧ್ಯಕ್ಷತೆ ವಹಿಸಿದ್ದರು.

No comments:

Post a Comment