ಭದ್ರಾವತಿ, ಅ. ೨೩: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯಲ್ಲಿ ಪ್ರಸ್ತುತ ಮಸ್ಟರ್ ರೋಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕರ್ತವ್ಯಕ್ಕೆ ಹಾಜರಾಗದಿರುವಂತೆ ಮುಖ್ಯ ಆಡಳಿತಾಧಿಕಾರಿ ಸೂಚನೆ ಪತ್ರ ಹೊರಡಿಸಿರುವ ಹಿನ್ನಲೆಯಲ್ಲಿ ಶನಿವಾರ ಕಾರ್ಖಾನೆಯ ಎರಡು ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಸಭೆ ನಡೆಸಿದ್ದು, ಮುಂದಿನ ಹೋರಾಟಕ್ಕೆ ಸಂಬಂಧಿಸಿ ಹಲವು ನಿರ್ಣಯಗಳನ್ನು ಕೈಗೊಂಡಿವೆ.
ದಿ ಮೈಸೂರು ಪೇಪರ್ ಮಿಲ್ಸ್ ಎಂಪ್ಲಾಯಿಸ್ ಅಸೋಸಿಯೇಷನ್ ಮತ್ತು ಶ್ರೀ ಮೈಸೂರು ಕಾಗದ ಕಾರ್ಖಾನೆ ನೌಕರರ ಸಂಘ ಈ ಎರಡು ಕಾರ್ಮಿಕ ಸಂಘಟನೆಗಳು ಸಂಜೆ ತುರ್ತು ಸಭೆ ನಡೆಸಿದ್ದು, ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚುವ ಆದೇಶ ಹಿಂಪಡೆಯುವವರೆಗೂ ಹಾಗು ಕಾರ್ಮಿಕರಿಗೆ ಉದ್ಯೋಗ ಭದ್ರತೆ ಲಭಿಸುವವರೆಗೂ ಜಂಟಿಯಾಗಿ ಹೋರಾಟ ನಡೆಸಲು ಮುಂದಾಗಿವೆ.
ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶದ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡುವುದು, ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ಮಸ್ಟರ್ ರೋಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ೨೧೪ ಕಾರ್ಮಿಕರ ವಿಶೇಷ ತುರ್ತು ಸಭೆ ನಡೆಸುವುದು, ಮಧ್ಯಾಹ್ನ ಶಿವಮೊಗ್ಗದಲ್ಲಿ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಅವರನ್ನು ಭೇಟಿ ಮಾಡಿ ಚರ್ಚಿಸುವುದು ಸೇರಿದಂತೆ ಇತ್ಯಾದಿ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.
No comments:
Post a Comment