ಭದ್ರಾವತಿ ಎಂಪಿಎಂ ಕಾರ್ಖಾನೆ ಸಂಪೂರ್ಣವಾಗಿ ಮುಚ್ಚಲು ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳು ಆದೇಶ ಹೊರಡಿಸಿರುವ ಹಿನ್ನಲೆಯಲ್ಲಿ ಕಾರ್ಖಾನೆಯಲ್ಲಿ ಮಸ್ಟರ್ ರೋಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಶುಕ್ರವಾರದಿಂದ ಕರ್ತವ್ಯ ಹಾಜರಾಗದಂತೆ ಮುಖ್ಯ ಆಡಳಿತಾಧಿಕಾರಿ ಪತ್ರದ ಮೂಲಕ ಸೂಚಿಸಿರುವುದು.
ಭದ್ರಾವತಿ, ಅ. ೨೨: ಪ್ರಸ್ತುತ ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯಲ್ಲಿ ಉಳಿದುಕೊಂಡಿರುವ ಕಾರ್ಮಿಕರು ಕೊನೆಗೂ ಬೀದಿ ಪಾಲಾಗಿದ್ದು, ಶುಕ್ರವಾರದಿಂದ ಕರ್ತವ್ಯಕ್ಕೆ ಹಾಜರಾಗದಂತೆ ಕಾರ್ಖಾನೆಯ ಮುಖ್ಯ ಆಡಳಿತಾಧಿಕಾರಿ ಸೂಚಿಸಿದ್ದಾರೆ.
ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳು ಅ.೭ರಂದು ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚಲು ಆದೇಶ ಹೊರಡಿಸಿದ್ದು, ಈ ಹಿನ್ನಲೆಯಲ್ಲಿ ಕಾರ್ಖಾನೆಯಲ್ಲಿ ಕಾರ್ಯ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಮಸ್ಟರ್ ರೋಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರು ಹಾಜರಾಗದಿರುವಂತೆ ಮುಖ್ಯ ಆಡಳಿತಾಧಿಕಾರಿ ಶ್ರೀನಿವಾಸ್ ಈ ಸಂಬಂಧ ಹೊರಡಿಸಿರುವ ಪತ್ರದಲ್ಲಿ ತಿಳಿಸಿದ್ದಾರೆ. .
ಪ್ರಸ್ತುತ ಕಾರ್ಖಾನೆಯಲ್ಲಿ ಅಸ್ತಿತ್ವದಲ್ಲಿರುವ ಎರಡು ಕಾರ್ಮಿಕ ಸಂಘಟನೆಗಳು ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳು ಅ.೭ರಂದು ಹೊರಡಿಸಿರುವ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಮುಂದಾಗಿವೆ. ಈ ನಡುವೆ ಕಂಪನಿ ಕಾರ್ಯದರ್ಶಿ ಈಗಾಗಲೇ ಕಾರ್ಯದರ್ಶಿಗಳ ಆದೇಶವನ್ನು ಪ್ರಶ್ನಿಸದಂತೆ ತಡೆಯಾಜ್ಞೆ ಸಹ ತಂದಿದ್ದು, ಇದೀಗ ಕಾರ್ಮಿಕರನ್ನು ಕರ್ತವ್ಯಕ್ಕೆ ಹಾಜರಾಗದಂತೆ ಸೂಚಿಸಲಾಗಿದೆ. ಸರ್ಕಾರ ಹಾಗೂ ಕಾರ್ಖಾನೆ ಆಡಳಿತ ಮಂಡಳಿ ಕೈಗೊಳ್ಳುತ್ತಿರುವ ತರಾತುರಿ ನಿರ್ಧಾರಗಳು ಕಾರ್ಮಿಕರು ಹಾಗು ಕುಟುಂಬ ವರ್ಗದವರನ್ನು ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ಇದೀಗ ಕಾರ್ಮಿಕ ಸಂಘಟನೆಗಳಿಗೆ ಹೋರಾಟ ಮಾತ್ರ ಬಾಕಿ ಉಳಿದಿದ್ದು, ಈ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ.
No comments:
Post a Comment