ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್‌ನಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಭಾರತ ಕಮ್ಯುನಿಸ್ಟ್ ಪಕ್ಷದ ೨೩ನೇ ಜಿಲ್ಲಾ ಸಮ್ಮೇಳನವನ್ನು ರಾಜ್ಯ ಸಮಿತಿ ಸದಸ್ಯ ಡಾ. ಕೆ. ಪ್ರಕಾಶ್ ಉದ್ಘಾಟಿಸಿ ಮಾತನಾಡಿದರು.
ಭದ್ರಾವತಿ, ಅ. ೩೧: ಕೇಂದ್ರ ಸರ್ಕಾರ ದೇಶದಲ್ಲಿ ಬಂಡವಾಳಶಾಹಿಗಳಿಗೆ ಮಣೆ ಹಾಕುವ ಮೂಲಕ ಶ್ರೀಸಾಮಾನ್ಯರ ಬಗೆಗಿನ ಕಾಳಜಿಯಿಂದ ವಿಮುಖವಾಗುತ್ತಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ರಾಜ್ಯ ಸಮಿತಿ ಸದಸ್ಯ ಡಾ. ಕೆ. ಪ್ರಕಾಶ್ ಆರೋಪಿಸಿದರು.
ಅವರು ಭಾನುವಾರ ನಗರದ ನ್ಯೂಟೌನ್ ಲಯನ್ಸ್ ಕ್ಲಬ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತ ಕಮ್ಯುನಿಸ್ಟ್ ಪಕ್ಷದ ೨೩ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಕಳೆದ ೨ ವರ್ಷಗಳಿಂದ ಮಹಾಮಾರಿ ಕೋವಿಡ್-೧೯ರ ಪರಿಣಾಮ ಪ್ರಪಂಚದಾದ್ಯಂತ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಸೇರಿದಂತೆ ಶ್ರೀಸಾಮಾನ್ಯರಿಗೆ ಅಗತ್ಯವಿರುವ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಈಗಲೂ ತೆರಿಗೆ ಪ್ರಮಾಣ ಇಳಿಸಿ ಶ್ರೀಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಚಿಂತಿಸದೆ ಬಂಡವಾಳಶಾಹಿಗಳ ಪರವಾಗಿ ನಡೆದುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಬಂಡವಾಳಶಾಹಿಗಳಿಗೆ ಮಣೆಹಾಕುತ್ತಿರುವ ಪರಿಣಾಮ ಎಲ್ಲಾ ಕ್ಷೇತ್ರಗಳು ಬಂಡವಾಳಶಾಹಿಗಳ ಹಿಡಿತಕ್ಕೆ ಒಳಗಾಗುತ್ತಿವೆ. ಹಂತ ಹಂತವಾಗಿ ಬಂಡವಾಳಶಾಹಿಗಳು ತಮ್ಮ ಪ್ರಾಬಲ್ಯ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ದೇಶದಲ್ಲಿ ಶ್ರೀಸಾಮಾನ್ಯರು ಹಲವು ರೀತಿಯ ಸಂಕಷ್ಟಗಳನ್ನು ಎದುರಿಸುವಂತಾಗಿದೆ ಎಂದರು. ಪ್ರಸ್ತುತ ಕೋವಿಡ್ ಲಸಿಕೆ ನೀಡುವ ವಿಚಾರದಲ್ಲೂ ಕೇಂದ್ರ ಸರ್ಕಾರ ನಿರ್ಲಕ್ಷ್ಯತನ ವಹಿಸುತ್ತಿದೆ. ದೇಶದಲ್ಲಿ ಎಲ್ಲರಿಗೂ ೧ ಮತ್ತು ೨ನೇ ಡೋಸ್ ಲಸಿಕೆ ನೀಡುವುದು ಅನಿವಾರ್ಯವಾಗಿದೆ. ಆದರೆ ಇದೀಗ ನಿಗದಿತ ಸಮಯದಲ್ಲಿ ಅಗತ್ಯವಿರುವಷ್ಟು ಲಸಿಕೆ ಒದಗಿಸಿಟ್ಟುಕೊಳ್ಳುವಲ್ಲಿ ಹಿನ್ನಡೆ ಅನುಭವಿಸುತ್ತಿದೆ ಎಂದು ಆರೋಪಿಸಿದರು.
ಜಿಲ್ಲಾ ಸಮಿತಿ ಸದಸ್ಯ, ನ್ಯಾಯವಾದಿ ಜಿ.ಎಸ್ ನಾಗರಾಜ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಮಿತಿ ಕಾರ್ಯರ್ಶಿ ಎಂ. ನಾರಾಯಣ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಿಲ್ಲಾ ಸಮಿತಿ ಸದಸ್ಯ ಅನಂತರಾಮು ಸ್ವಾಗತಿಸಿದರು.
ಸಿಪಿಐ(ಎಂ) ಜಿಲ್ಲಾ ಸಮಿತಿ ಸದಸ್ಯರಾದ ಕೆ. ಪ್ರಭಾಕರನ್ ಮತ್ತು ಕೆ. ಮಂಜಣ್ಣ, ಬಿಸಿಯೂಟ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಮ್ಮ, ಅಂಗನವಾಡಿ ನೌಕರರ ಸಂಘದ ತಾಲೂಕು ಅಧ್ಯಕ್ಷೆ ತುಳಸಿ ಪ್ರಭಾ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿರಿತರಿದ್ದರು.
No comments:
Post a Comment