ಸ್ಯಾನಿಟರಿ ಪ್ಯಾಡ್ ನಿರ್ವಹಣಾ ಯಂತ್ರ ಕೊಡುಗೆ ಕಾರ್ಯಕ್ರಮದಲ್ಲಿ ಸಿದ್ದಬಸಪ್ಪ
ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಭದ್ರಾವತಿ ತಾಲೂಕು ಶಾಖೆ ವತಿಯಿಂದ ಹಳೇನಗರದ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗು ಪ್ರೌಢಶಾಲೆಗೆ ಹೆಣ್ಣು ಮಕ್ಕಳು ವೈಯಕ್ತಿಕ ಶುಚಿತ್ವ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಹಕಾರಿಯಾಗಲು ಸುಮಾರು ೧೮ ಸಾವಿರ ರು. ಮೌಲ್ಯದ ಸ್ಯಾನಿಟರಿ ಪ್ಯಾಡ್ ನಿರ್ವಹಣಾ ಯಂತ್ರ ಕೊಡುಗೆಯಾಗಿ ನೀಡಲಾಯಿತು.
ಭದ್ರಾವತಿ, ನ. ೨೦: ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗು ಪ್ರೌಢಶಾಲೆ ಪ್ರಸ್ತುತ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವ ಮಟ್ಟಕ್ಕೆ ಬೆಳೆದಿದ್ದು, ಈ ಶಾಲೆಯ ಅಭಿವೃದ್ಧಿಯಲ್ಲಿ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳು ನಿರಂತರವಾಗಿ ಕೈಜೋಡಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ದಬಸಪ್ಪ ಹೇಳಿದರು.
ಅವರು ಶನಿವಾರ ಕಾಲೇಜಿನಲ್ಲಿ ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹೆಣ್ಣು ಮಕ್ಕಳು ವೈಯಕ್ತಿಕ ಶುಚಿತ್ವ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಹಕಾರಿಯಾಗಲು ಸುಮಾರು ೧೮ ಸಾವಿರ ರು. ಮೌಲ್ಯದ ಸ್ಯಾನಿಟರಿ ಪ್ಯಾಡ್ ನಿರ್ವಹಣಾ ಯಂತ್ರ ಕೊಡುಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕಾಲೇಜು ಹಾಗು ಪ್ರೌಢಶಾಲಾ ವಿಭಾಗದಲ್ಲಿ ತಾಲೂಕಿನಲ್ಲಿಯೇ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದ್ದು, ಹಲವಾರು ಸೌಲಭ್ಯಗಳನ್ನು ಹೊಂದುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯುವ ವಿಶ್ವಾಸವಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ. ಸಿದ್ದಲಿಂಗಮೂರ್ತಿ ವಿದ್ಯಾರ್ಥಿಗಳಿಗೆ ನಿರ್ವಹಣಾ ಯಂತ್ರ ಕುರಿತು ಮಾಹಿತಿ ನೀಡಿ ಬಳಸಲಾದ ಸ್ಯಾನಿಟರಿ ಪ್ಯಾಡ್‌ಗಳನ್ನು ಎಲ್ಲಿಬೇಕೆಂದರಲ್ಲಿ ಎಸೆಯುವುದರಿಂದ ಸಾಕಷ್ಟು ಸಮಸ್ಯೆ ಎದುರಾಗಲಿದೆ. ಈ ಯಂತ್ರದ ಬಳಕೆಯಿಂದ ಪರಿಸರಕ್ಕೆ ಹಾನಿಯಾಗದಂತೆ ಸ್ಯಾನಿಟರಿ ಪ್ಯಾಡ್‌ಗಳನ್ನು ದಹಿಸಬಹುದಾಗಿದೆ. ಇದನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದರು.
ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ತಾಲೂಕು ಕಾರ್ಯಾಧ್ಯಕ್ಷ ಅಭಿಲಾಷ್ ಮಾತನಾಡಿ, ಯೂನಿಯನ್ ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಹೆಚ್ಚಿನ ಗಮನ ಹರಿಸುತ್ತಿದೆ. ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಿಕೊಡಲಿದೆ ಎಂದರು.
ಸ್ಯಾನಿಟರಿ ಪ್ಯಾಡ್ ನಿರ್ವಹಣಾ ಯಂತ್ರವನ್ನು ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಕಾಲೇಜು ಅಭಿವೃದ್ಧಿ ಸಮಿತಿಗೆ ಹಸ್ತಾಂತರಿಸಿದರು.
ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಗೌರವಾಧ್ಯಕ್ಷ, ಶಾಂತಿ ಸಾಮಿಲ್ ಮಾಲೀಕರಾದ ಜಿ. ಸುರೇಶ್‌ಕುಮಾರ್ ತಮ್ಮ ಸ್ವಂತ ಹಣದಲ್ಲಿ ಸ್ಯಾನಿಟರಿ ಪ್ಯಾಡ್ ನಿರ್ವಹಣಾ ಯಂತ್ರ ಖರೀದಿಸಿ ಯೂನಿಯನ್ ಮೂಲಕ ಕೊಡುಗೆಯಾಗಿ ನೀಡಿದ ಹಿನ್ನಲೆಯಲ್ಲಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಮಿತಿ ಕಾರ್ಯಾಧ್ಯಕ್ಷ ಪಿ. ವೆಂಕಟರಮಣ ಶೇಟ್, ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಧ್ಯಕ್ಷ ಸುಂದರ್‌ಬಾಬು, ತಾಲೂಕು ಅಧ್ಯಕ್ಷ ಚಂದ್ರಶೇಖರ್, ತಾಂತ್ರಿಕ ಸಲಹೆಗಾರ ಮನೋಹರ್, ಕಾಲೇಜಿನ ಬೋಧಕ ಹಾಗು ಬೋಧಕೇತರ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment