ಕೆ.ಸಿ ವೀರಭದ್ರಪ್ಪ
ಭದ್ರಾವತಿ, ನ. ೨೫: ತಾಲೂಕು ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿ ಕಣಕಟ್ಟೆ ನಿವಾಸಿ, ಸಾಧು ವೀರಶೈವ ಸಮಾಜದ ಅಧ್ಯಕ್ಷ ಕೆ.ಸಿ ವೀರಭದ್ರಪ್ಪ(೬೯) ಗುರುವಾರ ಮಧ್ಯಾಹ್ನ ನಿಧನ ಹೊಂದಿದರು.
ಪತ್ನಿ, ಸಹೋದರ, ಸಹೋದರಿಯರನ್ನು ಹೊಂದಿದ್ದರು. ಸದಾಕಾಲ ಕ್ರಿಯಾಶೀಲರಾಗಿದ್ದ ಕೆ.ಸಿ ವೀರಭದ್ರಪ್ಪರವರು ಕಳೆದ ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೂಲತಃ ಜಮೀನ್ದಾರ್ ಕುಟುಂಬದವರಾದ ವೀರಭದ್ರಪ್ಪ, ಪ್ರಸ್ತುತ ಸಾಧು ವೀರಶೈವ ಸಮಾಜದ ತಾಲೂಕು ಅಧ್ಯಕ್ಷರಾಗಿ, ಭದ್ರಾ ಕಾಲೋನಿ ಶ್ರೀ ರಾಮಾಂಜನೇಯ ಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ, ಹಾಲಪ್ಪವೃತ್ತ ಭದ್ರಾ ಪ್ರೌಢಶಾಲೆ ಆಡಳಿತ ಮಂಡಳಿ ನಿರ್ದೇಶಕರಾಗಿ ಹಾಗು ಜನ್ನಾಪುರ ಶ್ರೀ ಬಸವೇಶ್ವರ ವಿದ್ಯಾವರ್ಧಕ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಅಲ್ಲದೆ ೧೯೯೯ ರಿಂದ ೨೦೦೧ರವರೆಗೆ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಅಧ್ಯಕ್ಷರಾಗಿ, ೧೯೮೬ ರಿಂದ ೧೯೯೬ರವರೆಗೆ ವೀರಾಪುರ ರೈತರ ಸಹಕಾರ ಸಂಘ ಬ್ಯಾಂಕ್ ಅಧ್ಯಕ್ಷರಾಗಿ ಮತ್ತು ೨೦೦೫ ರಿಂದ ೨೦೧೭ರವರೆಗೆ ಸೀಗೆಬಾಗಿ ರೈತರ ನೀರು ಬಳಕೆದಾರರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
೧೯೮೭ರಿಂದ ಲಯನ್ಸ್ ಕ್ಲಬ್‌ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ವೀರಭದ್ರಪ್ಪನವರು, ಖಜಾಂಚಿಯಾಗಿ, ಅಧ್ಯಕ್ಷರಾಗಿ, ವಲಯಾಧ್ಯಕ್ಷರಾಗಿ, ವಲಯ ಸಲಹೆಗಾರರಾಗಿ, ವಲಯ ರಾಯಬಾರಿಯಾಗಿ, ಡಿ.ಜಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ, ಸಮುದಾಯ ಸೇವೆ, ಜಿಲ್ಲಾ ಗೌರ್‍ನರ್ ಪ್ರತಿನಿಧಿಯಾಗಿ, ಜಿಎಲ್‌ಟಿ ಮತ್ತು ಜಿಎಂಟಿ ಸಂಯೋಜಕರಾಗಿ, ಜಿಲ್ಲಾ ರಾಯಬಾರಿಯಾಗಿ ಹಾಗು ಪ್ರಸ್ತುತ ಲಯನ್ಸ್ ಕ್ಲಬ್ ೩೧೭-ಸಿ ಮೊದಲನೇ ಜಿಲ್ಲಾ ಉಪಗೌರ್‍ನರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ವೀರಶೈವ ಸಮಾಜದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಲಯನ್ಸ್ ಕ್ಲಬ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಗಣ್ಯರು ವೀರಭದ್ರಪ್ಪ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
No comments:
Post a Comment