Monday, November 1, 2021

ಸಂಘಟನೆಯಲ್ಲಿ ಒಗ್ಗಟ್ಟು ಮುಖ್ಯ : ಡಾ. ಅನುರಾಧ ಪಟೇಲ್

ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಭದ್ರಾವತಿ ಅಪ್ಪರ್ ಹುತ್ತಾದಲ್ಲಿರುವ ಶ್ರೀ ಕೆಂಪೇಗೌಡ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರ್ವ ಸದಸ್ಯೆಯರ ಮಹಾಸಭೆ ಹಾಗು ೬೬ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಘದ ಗೌರವಾಧ್ಯಕ್ಷೆ ಡಾ. ಅನುರಾಧ ಪಟೇಲ್ ಉದ್ಘಾಟಿಸಿದರು.
    ಭದ್ರಾವತಿ, ನ. ೧: ಸಂಘಟನೆಯಲ್ಲಿ ಒಗ್ಗಟ್ಟು ಬಹಳ ಮುಖ್ಯವಾಗಿದ್ದು, ಯಾವುದೇ ಸಮಸ್ಯೆ ಇದ್ದರೂ ಸಹ ಪರಸ್ಪರ ನೇರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕೆಂದು ಚುಂಚಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಅನುರಾಧ ಪಟೇಲ್ ಹೇಳಿದರು.  
    ಅವರು ಸೋಮವಾರ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ನಗರದ ಅಪ್ಪರ್ ಹುತ್ತಾದಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರ್ವ ಸದಸ್ಯೆಯರ ಮಹಾಸಭೆ ಹಾಗು ೬೬ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಸಂಘಟನೆಯಲ್ಲಿನ ಲೋಪದೋಷಗಳ ಬಗ್ಗೆ ಹೊರಗೆ ಮಾತನಾಡುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಇದರಿಂದ ಸಮಾಜಕ್ಕೆ ಬೇರೆ ರೀತಿಯ ಸಂದೇಶ ತಲುಪುತ್ತದೆ. ಎಲ್ಲಾ ಸಂಘಟನೆಗಳು ಒಳ್ಳೆಯ ಉದ್ದೇಶಗಳನ್ನು ಹೊಂದಿರುತ್ತವೆ. ಇದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಯಾವುದೇ ಸಮಸ್ಯೆಗಳಿದ್ದರೂ ಸಹ ನೇರವಾಗಿ ಚರ್ಚಿಸಿ ಬಗೆಹರಿಸಿಕೊಳ್ಳುವುದು ಸೂಕ್ತ ಎಂದರು.
  ವೇದಿಕೆ ವತಿಯಿಂದ ನವಂಬರ್ ೧ರಂದು ಕನ್ನಡ ರಾಜ್ಯೋತ್ಸವ ಆಚರಿಸುವ ಜೊತೆಗೆ ಸರ್ವ ಸದಸ್ಯರ ಸಭೆಯನ್ನು ಸಹ ನಡೆಸಿಕೊಂಡು ಬರುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಕನ್ನಡ ಭಾಷೆಗೆ ವಿಶಿಷ್ಟವಾದ ಶಕ್ತಿ, ಭವ್ಯ ಪರಂಪರೆ ಇದೆ. ಇದನ್ನು ಎಲ್ಲರು ಅರಿತುಕೊಂಡು ನೆಲ, ಜಲ, ಭಾಷೆಯ ಮೇಲಿನ ಅಭಿಮಾನಿ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.  
    ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಮಾತನಾಡಿ, ಸಂಘಟನೆಯೊಳಗಿನ ಭಿನ್ನಾಭಿಪ್ರಾಯಗಳು ಯಾವುದೇ ಕಾರಣಕ್ಕೂ ಹೊರಗೆ ಬರಬಾರದು. ಯಾವುದೇ ಸಮಸ್ಯೆಗಳಿದ್ದರೂ ಸಹ ಒಗ್ಗಟ್ಟಾಗಿ ಮುನ್ನಡೆಯಬೇಕು. ಸಂಘಟನೆಗೆ ಅಗತ್ಯವಿರುವ ಎಲ್ಲಾ ಸಹಕಾರ ನೀಡಲು ಬದ್ದವಾಗಿದ್ದೇನೆ ಎಂದರು.
    ಸಂಘದ ಉಪಾಧ್ಯಕ್ಷೆ ಎಂ.ಬಿ ಸುಮ ಚಂದ್ರಶೇಖರ್ ವರದಿ ಮಂಡಿಸಿದರು.  ಕಾರ್ಯದರ್ಶಿ ಲತಾ ಪ್ರಭಾಕರ್, ಸಹ ಕಾರ್ಯದರ್ಶಿ ನಳಿನ ಶ್ರೀನಿವಾಸ್ ಮತ್ತು ಖಜಾಂಚಿ ಶಶಿಕಲಾ ಸೀತರಾಂ ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಸಂಘದ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ನಟ ಪುನೀತ್‌ರಾಜ್‌ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿ ಮೌನಾಚರಣೆ ನಡೆಸುವ ಗೌರವ ಸಲ್ಲಿಸಲಾಯಿತು.

No comments:

Post a Comment