ಭದ್ರಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ, ನ. ೭: ಸಾರ್ವಜನಿಕ ಕ್ಷೇತ್ರದಲ್ಲಿನ ಸಂಘಟನೆಗಳನ್ನು ಮುನ್ನಡೆಸಿಕೊಂಡು ಹೋಗಲು ಸಮಾಜದ ಎಲ್ಲರೂ ಎಚ್ಚರಿಕೆ ಗಂಟೆಯಾಗಿರಬೇಕು. ಆಗ ಮಾತ್ರ ಸಂಘಟನೆಯ ಜವಾಬ್ದಾರಿ ಹೊತ್ತವರು ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಾರೆಂದು ತಾಲೂಕು ವಕೀಲರ ಸಂಘದ ನೂತನ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಹೇಳಿದರು.
ಅವರು ಭಾನುವಾರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಸಂಘದ ವತಿಯಿಂದ ಅಭಿನಂದಿಸುತ್ತಿರುವುದು ಹೃದಯಸ್ಪರ್ಶಿ ವಿಚಾರವಾಗಿದ್ದು, ಈ ನಡುವೆ ವಕೀಲರ ಸಂಘದ ಅಧ್ಯಕ್ಷರಾಗಿರುವುದು ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ. ಎಲ್ಲರ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ಕೆ.ಎನ್ ಶ್ರೀಹರ್ಷರವರು ಪತ್ರಕರ್ತರ ಸಂಘದ ಜೊತೆಗೆ ವಕೀಲರ ಸಂಘದ ಅಧ್ಯಕ್ಷರಾಗುವ ಮೂಲಕ ಇದೀಗ ಮತ್ತಷ್ಟು ಜವಾಬ್ದಾರಿಗಳನ್ನು ಹೆಚ್ಚಿಸಿಕೊಂಡಿದ್ದಾರೆ. ಈಗಾಗಲೇ ಪತ್ರಕರ್ತರ ಸಂಘದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿ ತೋರಿಸಿದ್ದು, ವಕೀಲರ ಸಂಘದಲ್ಲೂ ಇದೆ ರೀತಿ ಕಾರ್ಯನಿರ್ವಹಿಸುವ ವಿಶ್ವಾಸವಿದೆ. ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧವಾಗಿದ್ದೇನೆ ಎಂದರು.
ಪತ್ರಿಕಾಭವನ ಕಟ್ಟಡ ಸಮಿತಿ ಅಧ್ಯಕ್ಷ ಕಣ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಮತ್ತು ಉಪಾಧ್ಯಕ್ಷ ಚನ್ನಪ್ಪ ಮಾತನಾಡಿದರು. ಪತ್ರಕರ್ತ ಎನ್. ಬಾಬು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಬಸವರಾಜ್ ಸ್ವಾಗತಿಸಿದರು. ಪತ್ರಕರ್ತ ಸುಭಾಷ್‌ರಾವ್ ಸಿಂಧ್ಯಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪಾಧ್ಯಕ್ಷ ಕೂಡ್ಲಿಗೆರೆ ಮಂಜುನಾಥ್ ನಿರೂಪಿಸಿದರು. ರವೀಂದ್ರನಾಥ್ ಪ್ರಾರ್ಥಿಸಿದರು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಸದಸ್ಯರು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು. ಸಮಾರಂಭದಲ್ಲಿ ಚಿತ್ರನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಲಾಯಿತು.
ಭದ್ರಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ತಾಲೂಕು ವಕೀಲರ ಸಂಘದ ನೂತನ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಅವರನ್ನು ಸನ್ಮಾನಿಸಲಾಯಿತು.
No comments:
Post a Comment