ಭದ್ರಾವತಿ, ನ. ೧೧: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ಸುಮಾರು ೨೦೨ ಕಾರ್ಮಿಕರಿಗೆ ಸೇವಾ ಭದ್ರತೆ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು, ಈ ಹಿನ್ನಲೆಯಲ್ಲಿ ಶ್ರೀ ಮೈಸೂರು ಕಾಗದ ಕಾರ್ಖಾನೆ ನೌಕರರ ಸಂಘ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದೆ.
ನ.೯ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ 'ಕೃಷ್ಣ'ದಲ್ಲಿ ನಡೆದ ಉನ್ನತಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾರ್ಖಾನೆಯಲ್ಲಿ ಉಳಿದುಕೊಂಡಿರುವ ೨೦೨ ಕಾರ್ಮಿಕರಿಗೆ ಸೇವಾ ಭದ್ರತೆ ನೀಡುವ ಸಂಬಂಧ ಹಿರಿಯ ಅಧಿಕಾರಿಗಳಿಗೆ ವರದಿ ನೀಡಲು ಆದೇಶಿಸಿದ್ದಾರೆ.
ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳು ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚಲು ಆದೇಶ ಹೊರಡಿಸಿದ ನಂತರ ಕಾರ್ಮಿಕರಲ್ಲಿ ಆತಂಕ ಎದುರಾಗಿದ್ದು, ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದರು. ಕಾರ್ಮಿಕರು ಹಾಗು ಕುಟುಂಬ ವರ್ಗದವರು ಶಿವಮೊಗ್ಗದಲ್ಲಿ ಸಂಸದ ಬಿ.ವೈ ರಾಘವೇಂದ್ರ ಅವರನ್ನು ಸಂಪರ್ಕಿಸಿ ಅಳಲು ತೋರ್ಪಡಿಸಿಕೊಂಡ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರು ಸೇವಾ ಭದ್ರತೆ ನೀಡುವ ಸಂಬಂಧ ಮುಖ್ಯಮಂತ್ರಿಗಳ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಿ. ಧರ್ಮಪ್ರಸಾದ್, ಬಿ.ಕೆ ಶ್ರೀನಾಥ್ ಮತ್ತು ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಅವರಿಗೆ ಕಾರ್ಮಿಕರು ಹಾಗು ಕುಟುಂಬ ವರ್ಗದವರ ಪರವಾಗಿ ಶ್ರೀ ಮೈಸೂರು ಕಾಗದ ಕಾರ್ಖಾನೆ ನೌಕರರ ಸಂಘ ಕೃತಜ್ಞತೆ ಸಲ್ಲಿಸಿದೆ ಎಂದು ಸಂಘದ ಸಹ ಕಾರ್ಯದರ್ಶಿ ಶ್ರೀಶೈಲ ತಿಳಿಸಿದ್ದಾರೆ.
No comments:
Post a Comment