Saturday, December 11, 2021

ಪ್ರಪಂಚಕ್ಕೆ ಮಾನವ ಹಕ್ಕುಗಳ ಪರಿಕಲ್ಪನೆ ತಿಳಿಸಿಕೊಟ್ಟವರು ಬಾಬಾ ಸಾಹೇಬ್ ಅಂಬೇಡ್ಕರ್ : ಡಾ. ಧನಂಜಯ


ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘ ಮತ್ತು ಹಳೇ ಸೀಗೆಬಾಗಿ ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯ ಮತ್ತು ಶಿವಮೊಗ್ಗ ನೆಹರು ಯುವ ಕೇಂದ್ರ ಇವರ ಸಹಯೋಗದೊಂದಿಗೆ ಜನ್ನಾಪುರ ಎನ್‌ಟಿಬಿ ರಸ್ತೆಯಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಡಾ. ಧನಂಜಯ, ಎಂ. ಶಿವಕುಮಾರ್, ಉಲ್ಲಾಸ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ, ಡಿ. ೧೧: ಪ್ರಪಂಚಕ್ಕೆ ಮಾನವ ಹಕ್ಕುಗಳ ಪರಿಕಲ್ಪನೆ ಪರಿಚಯಿಸಿ ಕೊಟ್ಟವರು ಬಾಬಾ ಸಾಹೇಬ್ ಅಂಬೇಡ್ಕರ್ ಎಂಬುದನ್ನು ಯಾರು ಸಹ ಮರೆಯಬಾರದು. ಮಾನವ ಹಕ್ಕುಗಳು ವಿಶಿಷ್ಟತೆಯಿಂದ ಕೂಡಿದ್ದು, ಪ್ರಸ್ತುತ ಇವುಗಳ ಕುರಿತು ಇಂದಿನ ಯುವ ಪೀಳಿಗೆ ತಿಳಿದುಕೊಳ್ಳುವ ಅಗತ್ಯವಿದೆ ಎಂದು ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಧನಂಜಯ ಹೇಳಿದರು.
    ಅವರು ನಗರದ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘ ಮತ್ತು ಹಳೇ ಸೀಗೆಬಾಗಿ ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯ ಮತ್ತು ಶಿವಮೊಗ್ಗ ನೆಹರು ಯುವ ಕೇಂದ್ರ ಇವರ ಸಹಯೋಗದೊಂದಿಗೆ ಜನ್ನಾಪುರ ಎನ್‌ಟಿಬಿ ರಸ್ತೆಯಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಪ್ರತಿಯೊಂದು ದಿನಾಚರಣೆಗೂ ಒಂದೊಂದು ವಿಶಿಷ್ಟತೆ ಇದೆ. ಇವುಗಳಲ್ಲಿ ಮಾನವ ಹಕ್ಕುಗಳ ದಿನಾಚರಣೆ ಪ್ರಮುಖವಾಗಿದೆ. ಸಮಾನತೆಯೊಂದಿಗೆ ಪ್ರತಿಯೊಬ್ಬರು ತಮ್ಮದೇ ಆದ ಹಕ್ಕು ಹೊಂದಿದ್ದಾರೆ ಎಂಬುದನ್ನು ಅಂಬೇಡ್ಕರ್‌ರವರು ಪ್ರತಿಪಾದಿಸುವ ಮೂಲಕ ಈ ನಿಟ್ಟಿನಲ್ಲಿ ಈ ಹಿಂದೆ ಬಹಳಷ್ಟು ರಾಷ್ಟ್ರಗಳು ಹೊಂದಿದ್ದ ಪರಿಕಲ್ಪನೆಗಳು ಬದಲಾವಣೆಗೊಂಡವು. ಮಾನವ ಹಕ್ಕುಗಳ ಕುರಿತು ತಿಳಿದುಕೊಳ್ಳುವುದು ಬಹಳಷ್ಟಿದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚು ಸಹಕಾರಿಯಾಗಿವೆ ಎಂದರು.
    ನ್ಯಾಯವಾದಿ ಎಂ. ಶಿವಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು. ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ಉಲ್ಲಾಸ್, ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಮಂಜುನಾಥ್ ಉಪಸ್ಥಿತರಿದ್ದರು. ಎಂಪಿಎಂ ನಿವೃತ್ತ ಕಾರ್ಮಿಕ ಎ.ಕೆ ಮಂಜಪ್ಪ ಅಧ್ಯಕ್ಷತೆ ವಹಿಸಿದ್ದರು. ಜಾನಪದ ಕಲಾವಿದ ತಮಟೆ ಜಗದೀಶ್ ಕಾರ್ಯಕ್ರಮ ನಿರೂಪಿಸಿದರು. ಆರಂಭದಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗು ವೀರಮರಣ ಹೊಂದಿದ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.

No comments:

Post a Comment