ಭದ್ರಾವತಿ ಆನೇಕೊಪ್ಪ ಎಂಪಿಎಂ ಬಡಾವಣೆಯಲ್ಲಿ ನಿರ್ಮಾಣ ಹಂತದಲ್ಲಿರುವ ದೇವಸ್ಥಾನ ಬಳಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದು.
ಭದ್ರಾವತಿ, ಡಿ. ೫: ನಗರಸಭೆ ವಾರ್ಡ್ ನಂ.೨೨ರ ವ್ಯಾಪ್ತಿಯ ಎಂಪಿಎಂ ಬಡಾವಣೆಯಲ್ಲಿ ಮೂಲ ಸೌಕರ್ಯಗಳ ಕೊರತೆ ಜೊತೆಗೆ ಸ್ವಚ್ಛತೆ ಇಲ್ಲದಂತಾಗಿದ್ದು, ಇಲ್ಲಿನ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ.
ಬೈಪಾಸ್ ರಸ್ತೆಯ ಆನೇಕೊಪ್ಪದಲ್ಲಿ ಮೈಸೂರು ಕಾಗದ ಕಾರ್ಖಾನೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದಿಂದ ನಿರ್ಮಾಣಗೊಂಡಿರುವ ಎಂಪಿಎಂ ಬಡಾವಣೆ ಕಳೆದ ಕೆಲವು ವರ್ಷಗಳಿಂದ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಸೂಕ್ತ ರಸ್ತೆ, ಚರಂಡಿಗಳಿಲ್ಲ, ಮಳೆಗಾಲದಲ್ಲಿ ನಿವಾಸಿಗಳು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ.
ಬಡಾವಣೆಯಲ್ಲಿ ಸುಮಾರು ೩೦ಕ್ಕೂ ಹೆಚ್ಚು ಮನೆಗಳು ನಿರ್ಮಾಣಗೊಂಡಿದ್ದು, ಆದರೂ ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ಕೈಗೊಂಡಿಲ್ಲ. ಸೂಕ್ತ ಚರಂಡಿ ವ್ಯವಸ್ಥೆ ಕೈಗೊಳ್ಳದ ಕಾರಣ ನೀರು ಮುಂದೆ ಹರಿಯದೆ ನಿಂತುಕೊಂಡು ದುರ್ವಾಸನೆ ಬೀರುತ್ತಿದ್ದು, ಜೊತೆಗೆ ಖಾಲಿ ನಿವೇಶನಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕಾರಣ ಗಿಡಗಂಟಿಗಳು ಆಳೆತ್ತರಕ್ಕೆ ಬೆಳೆದುನಿಂತು ಹಾವು, ಮುಂಗುಸಿ, ಹೆಗ್ಗಣಗಳ ಆವಾಸ ತಾಣಗಳಾಗಿ ಮಾರ್ಪಟ್ಟಿವೆ.
ಈ ನಡುವೆ ಎಂಪಿಎಂ ಕಾರ್ಖಾನೆ ಸ್ಥಗಿತಗೊಂಡು ಸುಮಾರು ೬ ವರ್ಷಗಳು ಕಳೆದಿದ್ದು, ಬಹುತೇಕ ಕಾರ್ಮಿಕ ಕುಟುಂಬಗಳು ಊರು ತೊರೆದು ವಲಸೆ ಹೋಗಿವೆ. ಉಳಿದುಕೊಂಡಿರುವ ಕೆಲವು ಕುಟುಂಬಗಳಿಗೆ ಬಡಾವಣೆಯೇ ಆಧಾರವಾಗಿದೆ. ಈ ಹಿನ್ನಲೆಯಲ್ಲಿ ಬಡಾವಣೆ ಅಭಿವೃದ್ಧಿ ಪಡಿಸುವುದು ಅನಿವಾರ್ಯವಾಗಿದೆ.
ಪ್ರಸ್ತುತ ಗೃಹ ನಿರ್ಮಾಣ ಸಹಕಾರ ಸಂಘ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೆ ತಟಸ್ಥವಾಗಿ ಉಳಿದುಕೊಂಡಿದೆ. ಈ ಹಿನ್ನಲೆಯಲ್ಲಿ ಇಲ್ಲಿನ ನಿವಾಸಿಗಳು ಅನಿವಾರ್ಯವಾಗಿ ನಗರಸಭೆ ಬಾಗಿಲು ತಟ್ಟುವಂತಾಗಿದೆ. ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿಕೊಡುವಂತೆ ನಗರಸಭೆಗೆ ಹಲವು ಬಾರಿ ಮನವಿ ಸಲ್ಲಿಸಿ ಒತ್ತಾಯಿಸಲಾಗಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ.
ಬಡಾವಣೆಯಲ್ಲಿ ಇನ್ನೂ ಉದ್ಯಾನವನ ನಿರ್ಮಾಣಗೊಂಡಿಲ್ಲ. ಪ್ರಸ್ತುತ ನಿವಾಸಿಗಳು ಚೌಡೇಶ್ವರಿ ದೇವಿ ದೇವಸ್ಥಾನ ನಿರ್ಮಾಣ ಕಾರ್ಯ ಕೈಗೊಂಡಿದ್ದಾರೆ. ದೇವಸ್ಥಾನ ತಗ್ಗು ಪ್ರದೇಶದಲ್ಲಿದ್ದು, ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ದೇವಸ್ಥಾನ ಬಳಿ ನೀರು ಮುಂದೆ ಹರಿಯದೆ ನಿಂತುಕೊಳ್ಳುತ್ತಿದೆ. ಈ ಸ್ಥಳದಲ್ಲಾದರೂ ತಕ್ಷಣ ನಗರಸಭೆ ವತಿಯಿಂದ ಸೂಕ್ತ ಚರಂಡಿ ವ್ಯವಸ್ಥೆ ಕೈಗೊಳ್ಳಬೇಕೆಂಬುದು ನಿವಾಸಿಗಳ ಒತ್ತಾಯವಾಗಿದೆ.
ಭದ್ರಾವತಿ ಆನೇಕೊಪ್ಪ ಎಂಪಿಎಂ ಬಡಾವಣೆಯಲ್ಲಿ ಗಿಡಗಂಟಿಗಳು ಆಳೆತ್ತರಕ್ಕೆ ಬೆಳೆದು ಸ್ವಚ್ಛತೆ ಇಲ್ಲದಿರುವುದು.
No comments:
Post a Comment