Sunday, December 26, 2021

ಅಧಿವೇಶನದಲ್ಲಿ ವಿನಾಕಾರಣ ಕಾಲಹರಣ : ರಾಜ್ಯದ ಜನತೆಗೆ ದ್ರೋಹ

ಸಾರ್ವಜನಿಕರ ಕುಂದುಕೊರತೆ ಹೋರಾಟ ಸಮಿತಿಯ ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಆರೋಪ


ಭದ್ರಾವತಿ ಜಯಶ್ರೀ ವೃತ್ತದ ಸಮೀಪದಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಹೋರಾಟ ಸಮಿತಿಯ ನೂತನ ದಿನದರ್ಶಿಕೆ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ್ ಬಿಡುಗಡೆಗೊಳಿಸಿದರು.

    ಭದ್ರಾವತಿ, ಡಿ. ೨೬: ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ಜನರ ಸಮಸ್ಯೆಗಳಿಗೆ ಚರ್ಚಿಸದೆ ವಿನಾಕಾರಣ ಕಾಲಹರಣ ಮಾಡುವ ಮೂಲಕ ರಾಜ್ಯದ ಜನತೆಗೆ ದ್ರೋಹ ಬಗೆದಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಆರೋಪಿಸಿದರು.
    ಅವರು ನಗರದ ಜಯಶ್ರೀ ವೃತ್ತದ ಸಮೀಪದಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಹೋರಾಟ ಸಮಿತಿಯ ನೂತನ ದಿನದರ್ಶಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
    ರಾಜ್ಯದಲ್ಲಿ ಕೊರೋನಾ ಸೇರಿದಂತೆ ಪ್ರಾಕೃತಿಕ ವಿಕೋಪಗಳಿಂದ ರೈತರು, ಕಾರ್ಮಿಕರು, ವ್ಯಾಪರಸ್ಥರು ಸೇರಿದಂತೆ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಇವುಗಳ ಕುರಿತು ಸದನದಲ್ಲಿ ಚರ್ಚಿಸದೆ ಕಾಲಹರಣ ಮಾಡಲಾಗಿದೆ. ಸರ್ಕಾರ ಮೊದಲು ಜನರ ಸಂಕಷ್ಟದಲ್ಲಿ ಪೂರಕವಾಗಿ ಸ್ಪಂದಿಸಬೇಕೆಂದರು.
ಕ್ಷೇತ್ರದಲ್ಲಿ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳು ಅವನತಿಹೊಂದಿರುವುದರ ಪರಿಣಾಮ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಈ ನಡುವೆಯೂ ೩ ಬಾರಿ ಶಾಸಕರಾಗಿ ಆಯ್ಕೆಮಾಡಿರುವ ಮತದಾರರ ಋಣ ತೀರಿಸುವ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಶಕ್ತಿ ಮೀರಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದೇನೆ. ಮುಂದಿನ ದಿನಗಳಲ್ಲೂ ಇದೆ ರೀತಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.
    ಸಮಿತಿ ಅಧ್ಯಕ್ಷ ಬಾಲಕೃಷ್ಣ ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳಿಗೆ ಸಮಿತಿ ಪೂರಕವಾಗಿ ಸ್ಪಂದಿಸುವ ಮೂಲಕ ಹೋರಾಟಗಳನ್ನು ನಡೆಸಿಕೊಂಡು ಬರುತ್ತಿದೆ. ಶಾಸಕರು ನಮ್ಮ ಬಹಳಷ್ಟು ಹೋರಾಟಗಳಿಗೆ ಪೂರಕವಾಗಿ ಸ್ಪಂದಿಸಿದ್ದಾರೆ. ಮುಂದಿನ ದಿನಗಳಲ್ಲೂ ಹೋರಾಟ ಮುಂದುವರೆಸಿಕೊಂಡು ಹೋಗುವುದಾಗಿ ಭರವಸೆ ನೀಡಿದರು.
    ನಗರಸಭಾ ಸದಸ್ಯ ಕಾಂತರಾಜ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಪ್ರಮುಖರಾದ ಎಸ್.ಎಸ್ ಭೈರಪ್ಪ, ಶ್ರೀನಿವಾಸ್, ಕಟ್ಟಡ ಕಾರ್ಮಿಕರ ಸಂಘದ ತಾಂತ್ರಿಕ ಸಲಹೆಗಾರ ಮನೋಹರ್, ಹಿರಿಯ ನಾಗರೀಕರಾದ ದೊಡ್ಡಯ್ಯ, ವೆಂಕಟೇಶ್, ಲಾರ್ಜರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಟ್ಟಡ ಕಾರ್ಮಿಕರ ಸಂಘದ ಕಾರ್ಯಾಧ್ಯಕ್ಷ ಅಭಿಲಾಷ್ ನಿರೂಪಿಸಿದರು.

No comments:

Post a Comment