ಪೆಟ್ರೋಲ್, ಡೀಸೆಲ್ ಹಾಗು ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಭದ್ರಾವತಿಯಲ್ಲಿ ಬುಧವಾರ ಭಾರತ ಕಮ್ಯುನಿಷ್ಟ್ ಪಕ್ಷ(ಮಾರ್ಕ್ಸ್‌ವಾದಿ) ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಪ್ರಧಾನಮಂತ್ರಿಗಳಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಫೆ. ೨೪: ಪೆಟ್ರೋಲ್, ಡೀಸೆಲ್ ಹಾಗು ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬುಧವಾರ ಭಾರತ ಕಮ್ಯುನಿಷ್ಟ್ ಪಕ್ಷ(ಮಾರ್ಕ್ಸ್‌ವಾದಿ) ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಪ್ರಧಾನಮಂತ್ರಿಗಳಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಪೆಟ್ರೋಲ್, ಡೀಸೆಲ್ ಹಾಗು ಅಡುಗೆ ಅನಿಲ ಬೆಲೆ ಏರಿಕೆಯಿಂದಾಗಿ ಇತರೆ ಅಗತ್ಯ ವಸ್ತುಗಳ ಬೆಲೆ ಸಹ ಹೆಚ್ಚಳವಾಗಿದೆ. ಇದರಿಂದಾಗಿ ಬಡ, ಮಧ್ಯಮ ಶ್ರೀಸಾಮಾನ್ಯರ ಬದುಕು ಇನ್ನಷ್ಟು ಸಂಕಷ್ಟಕ್ಕೆ ತಳ್ಳಿದೆ ಎಂದು ಅಳಲು ವ್ಯಕ್ತಪಡಿಸಲಾಯಿತು.
೨೦೧೪ರಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಪೆಟ್ರೋಲ್ ದರ ರು.೭೨ ಅಸುಪಾಸಿನಲ್ಲಿದ್ದು, ಅಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಛಾತೈಲದ ಬೆಲೆ ಒಂದು ಬ್ಯಾರಲ್‌ಗೆ ೧೧೦ ಡಾಲರ್‌ಗಳ ಆಸುಪಾಸಿನಲ್ಲಿತ್ತು. ಪ್ರಸ್ತುತ ಕಚ್ಛಾತೈಲದ ಬೆಲೆ ೫೬ ಡಾಲರ್‌ಗಳಿಗೆ ಇಳಿದಿದೆ. ಶೇ.೫೦ರಷ್ಟು ಬೆಲೆ ಕಡಿಮೆಯಾಗಿದ್ದು, ಈ ಪ್ರಕಾರ ಪ್ರಸ್ತುತ ಪೆಟ್ರೋಲ್ ಬೆಲೆ ರು.೩೬ ಗಳಾಗಬೇಕಿತ್ತು. ಆದರೆ ಹೆಚ್ಚುವರಿಯಾಗಿ ಸುಮಾರು ರು.೫೪ ಪಡೆಯಲಾಗುತ್ತಿದೆ. ಇದರಿಂದಾಗಿ ರು.೧೦೦ರ ಗಡಿ ದಾಡುತ್ತಿರುವುದು ವಿಪರ್ಯಾಸದ ಸಂಗತಿಯಾಗಿದ್ದು, ಹೆಚ್ಚುವರಿಯಾಗಿ ಪಡೆಯುತ್ತಿರುವ ಹಣ ಎಲ್ಲಿಗೆ ಹೋಗುತ್ತಿದೆ ಎಂದು ಪ್ರಶ್ನಿಸಲಾಯಿತು.
ಕೇಂದ್ರ ಸರ್ಕಾರ ಕಾರ್ಪೋರೇಟ್ ಕಂಪನಿಗಳು, ಶ್ರೀಮಂತರು ಹಾಗು ಬೆಂಬಲಿಗರ ಪರವಾಗಿದ್ದು, ಇದರಿಂದಾಗಿ ಬಡ, ಮಧ್ಯಮ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈಗಾಲೇ ಕೊರೋನಾ ಮಹಾಸೋಂಕು ಮತ್ತು ಆರ್ಥಿಕ ಹಿಂಜರಿತದಿಂದಾಗಿ ಬದುಕು ಮೂರಾಬಟ್ಟೆಯಾಗಿದೆ. ಈ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ನರಕಯಾತನೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.
ಕೇಂದ್ರ ಸರ್ಕಾರ ತಕ್ಷಣ ಬಲೆ ಏರಿಕೆಗೆ ಕಡಿವಾಣ ಹಾಕಬೇಕು. ಬಡ, ಮಧ್ಯಮ ಶ್ರೀಸಾಮಾನ್ಯರ ಬದುಕಿನೊಂದಿಗೆ ಚೆಲ್ಲಾಟ ಆಡುವುದನ್ನು ಕೈಬಿಡಬೇಕೆಂದು ಆಗ್ರಹಿಸಲಾಯಿತು.
ಪ್ರಧಾನ ಕಾರ್ಯದರ್ಶಿ ಎಂ. ನಾರಾಯಣ, ಹನುಮಮ್ಮ, ಕೆ. ಮಂಜಣ್ಣ, ಸೋಮಣ್ಣ, ಕೃಷ್ಣೋಜಿರಾವ್ ಸೇರಿದಂತೆ ಇನ್ನಿತರು ಪ್ರತಿಭಟನೆ ನೇತೃತ್ವ ವಹಿಸಿದ್ದರು. ಪಕ್ಷದ ಮಹಿಳಾ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.