Thursday, February 25, 2021

ಮಹಿಳೆಯರಿಗೆ ಮಾನಸಿಕ ಆರೋಗ್ಯ ಸಹ ಬಹಳ ಮುಖ್ಯ : ಡಾ. ಎಂ.ವಿ ಅಶೋಕ್

ಭದ್ರಾವತಿ ಜನ್ನಾಪುರ ಎನ್‌ಟಿಬಿ ಕಛೇರಿ ರಸ್ತೆಯಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ನೆಹರೂ ಯುವಕ ಕೇಂದ್ರದ ಪ್ರತಿನಿಧಿಗಳಿಗೆ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಫೆ. ೨೫: ಮಹಿಳೆಯರಿಗೆ ಕೇವಲ ದೈಹಿಕ ಆರೋಗ್ಯ ಮಾತ್ರವಲ್ಲದೆ ಮಾನಸಿಕ ಆರೋಗ್ಯ ಸಹ ಬಹಳ ಮುಖ್ಯ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ತಿಳಿಸಿದರು.
ಅವರು ಗುರುವಾರ ಜನ್ನಾಪುರ ಎನ್‌ಟಿಬಿ ಕಛೇರಿ ರಸ್ತೆಯಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ನೆಹರೂ ಯುವಕ ಕೇಂದ್ರದ ಪ್ರತಿನಿಧಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮಹಿಳೆಯರು ಕುಟುಂಬದ ಆಧಾರಸ್ತಂಭಗಳಾಗಿದ್ದು, ವೈಯಕ್ತಿಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಹೆಚ್ಚಿನ ಮಹಿಳೆಯರು ಮಾನಸಿಕ ಒತ್ತಡಕ್ಕೆ ಒಳಗಾಗಿ ಹಲವಾರು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಅಗತ್ಯವಾಗಿದೆ ಎಂದರು.
   ಶಿವಮೊಗ್ಗ ನೆಹರೂ ಯುವ ಕೇಂದ್ರದ ಜಲ್ಲಾ ಯುವ ಅಧಿಕಾರಿ ಉಲ್ಲಾಸ್ ಮಾತನಾಡಿ, ಯುವ ಸಮುದಾಯಗಳ ಎಲ್ಲಾ ಚಟುವಟಿಕೆಗಳಿಗೆ ಯುವ ಕೇಂದ್ರ ಪೂರಕವಾಗಿ ಸ್ಪಂದಿಸಲಿದೆ. ಎಲ್ಲಾ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಜೊತೆಗೆ ಸಮುದಾಯದ ಸಂಘಟನೆಯಲ್ಲಿ ಪಾಲ್ಗೊಳ್ಳುವಿಕೆ ಹೆಚ್ಚಿಸಬೇಕೆಂದು ಕರೆ ನೀಡಿದರು.
    ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರಾಜೇಗೌಡ, ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ರೇವತಿ, ಆಶಾ ಮೇಲ್ವಿಚಾರಕಿ ವಸಂತ ಸೇರಿದಂತೆ ಇನ್ನಿತರರು ಮಹಿಳೆಯರ ಆರೋಗ್ಯ ಕಾಳಜಿ ಕುರಿತು ಮಾಹಿತಿ ನೀಡಿದರು.
ಸ್ನೇಹ ಮಿಲನ ಮಹಿಳಾ ತಂಡದ ಅಧ್ಯಕ್ಷೆ ಕವಿತಾ ಸುರೇಶ್, ಪಿರಾಮಿಡ್ ಧ್ಯಾನಮಾಸ್ಟರ್ ಶುಭಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
     ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ಅಧ್ಯಕ್ಷ ತಮಟೆ ಜಗದೀಶ್ ಕಾರ್ಯಕ್ರಮ ನಿರ್ವಹಿಸಿದರು. ಯೋಗ ಶಿಕ್ಷಕಿ ಭಾರತಿ ಜಯರಾಮ್ ನಿರೂಪಿಸಿದರು. ಜನಪದ ಕಲಾವಿದ ದಿವಾಕರ್, ರಂಗಭೂಮಿ ಕಲಾವಿದ ಜಿ. ರವಿಕುಮಾರ್ ತಂಡದಿಂದ ಜಾನಪದ ಗೀತೆ ಗಾಯನ ನಡೆಯಿತು.
    ಹಿರಿಯ ಆರೋಗ್ಯ ಸಹಾಯಕ ಆನಂದಮೂರ್ತಿ, ವಿಪುಲರಾವ್, ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಬಸವರಾಜ ಜಿ. ಆನೆಕೊಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಬಾಂಧ್ಯವ ಸ್ವಸಹಾಯ ಸಂಘದ ಧನಲಕ್ಷ್ಮಿ ಹಾಗು ನೆಹರೂ ಯುವ ಕೇಂದ್ರದ ಪ್ರತಿನಿಧಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಚಿಕ್ಕಬಳ್ಳಾಪುರ ಕಲ್ಲು ಗಣಿಗಾರಿಕೆ ಸ್ಪೋಟ ಪ್ರಕರಣ : ಜಯ ಕರ್ನಾಟಕ ಜನಪರ ವೇದಿಕೆ ಖಂಡನೆ

ಸ್ಪೋಟದಲ್ಲಿ ಮೃತಪಟ್ಟ ಬಡ ಕಾರ್ಮಿಕರ ಕುಟುಂಬಗಳಿಗೆ ತಲಾ ೨೦ ಲಕ್ಷ ರು. ಪರಿಹಾರ ನೀಡಿ

ಜಯ ಕರ್ನಾಟಕ ಜನಪರ ವೇದಿಕೆವತಿಯಿಂದ ಭದ್ರಾವತಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕಲ್ಲು ಗಣಿಗಾರಿಕೆಯೊಂದರಲ್ಲಿ ನಡೆದಿರುವ ಸ್ಪೋಟ ಪ್ರಕರಣವನ್ನು ಖಂಡಿಸುವ ಜೊತೆಗೆ ಮೃತಪಟ್ಟಿರುವ ಬಡ ಕುಟುಂಬಗಳಿಗೆ ತಲಾ ೨೦ ಲಕ್ಷ ರು. ಪರಿಹಾರ ನೀಡುವಂತೆ ಆಗ್ರಹಿಸಿ ಗುರುವಾರ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮೂಲಕ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಫೆ. ೨೫: ಜಯ ಕರ್ನಾಟಕ ಜನಪರ ವೇದಿಕೆವತಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಕಲ್ಲು ಗಣಿಗಾರಿಕೆಯೊಂದರಲ್ಲಿ ನಡೆದಿರುವ ಸ್ಪೋಟ ಪ್ರಕರಣವನ್ನು ಖಂಡಿಸುವ ಜೊತೆಗೆ ಮೃತಪಟ್ಟಿರುವ ಬಡ ಕುಟುಂಬಗಳಿಗೆ ತಲಾ ೨೦ ಲಕ್ಷ ರು. ಪರಿಹಾರ ನೀಡುವಂತೆ ಆಗ್ರಹಿಸಿ ಗುರುವಾರ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮೂಲಕ ಮನವಿ ಸಲ್ಲಿಸಲಾಯಿತು.  
    ಸಂಘಟನೆಯ ಪ್ರಮುಖರು ಮಾತನಾಡಿ, ಇತ್ತೀಚೆಗೆ ಶಿವಮೊಗ್ಗ ಜಿಲ್ಲೆ ಹುಣಸೋಡು ಬಳಿ ಕಲ್ಲು ಗಣಿಗಾರಿಕೆಯಲ್ಲಿ ಜಿಲೆಟಿನ್ ತುಂಬಿದ್ದ ಲಾರಿ ಸ್ಪೋಟಗೊಂಡ ಪರಿಣಾಮ ಒಟ್ಟು ೮ ಜನ ಮೃತಪಟ್ಟರು. ಆದರೂ ಸಹ ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಅಕ್ರಮ ಗಣಿಗಾರಿಕೆಯೇ ಸ್ಪೋಟಕ್ಕೆ ಮುಖ್ಯ ಕಾರಣವಾಗಿದ್ದು, ಅಕ್ರಮ ಗಣಿಗಾರಿಕೆ ತಡೆಯುವಲ್ಲಿ ಸರ್ಕಾರ ಹಾಗು ಅಧಿಕಾರಿಗಳು ವಿಫಲರಾಗಿದ್ದಾರೆಂದು ಆರೋಪಿಸಿದರು.
   ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಬಡ ಕೂಲಿ ಕಾರ್ಮಿಕರು ಬಲಿಯಾಗುತ್ತಿದ್ದು,  ಸ್ಪೋಟ ಪ್ರಕರಣದಲ್ಲಿ ಮೃತಪಟ್ಟಿರುವ ಕುಟುಂಬಗಳಿಗೆ ಸರ್ಕಾರ ಕೇವಲ ತಲಾ ರು. ೫ ಲಕ್ಷ ಪರಿಹಾರ ನೀಡುತ್ತಿರುವುದು ಸರಿಯಲ್ಲ. Pರು. ೫ ಲಕ್ಷ ಪರಿಹಾರದಿಂದ ಬಡಕುಟುಂಬಗಳು ನೆಮ್ಮದಿ ಕಾಣಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ತಲಾ ೨೦ ಲಕ್ಷ ಪರಿಹಾರ ನೀಡುವಂತೆ ಹಾಗು ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಡೆದಿರುವ ಸ್ಪೋಟ ಪ್ರಕರಣಗಳನ್ನು ಉನ್ನತಮಟ್ಟದ ತನಿಖೆಗೆ ಒಳಪಡಿಸಿ ಅಕ್ರಮ ಗಣಿಗಾರಿಕೆ ತಡೆಯುವಲ್ಲಿ ವಿಫಲರಾಗಿರುವ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು.
   ವೇದಿಕೆ ತಾಲೂಕು ಅಧ್ಯಕ್ಷ ಎಸ್.ಎಸ್ ಭೈರಪ್ಪ ನೇತೃತ್ವ ವಹಿಸಿದ್ದರು. ಜಿಲ್ಲಾ ಕಾರ್ಯಾಧ್ಯಕ್ಷ ಕೆ. ಸುದೀಪ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಜಾರ್ಜ್, ತಾಲೂಕು ಪ್ರಧಾನ ಕಾರ್ಯದರ್ಶಿ ಡಿ. ನರಸಿಂಹಮೂರ್ತಿ, ಮಹಿಳಾ ಘಟಕದ ಅಧ್ಯಕ್ಷೆ ರೂಪ, ಪ್ರಮುಖರಾದ ಪ್ರಾನ್ಸಿಸ್, ಎಚ್.ಎಂ ಮಹಾದೇವಯ್ಯ, ಮುಕುಂದಯ್ಯ, ಜೆಬಿಟಿ ಬಾಬು, ಮುಸ್ವೀರ್ ಬಾಷಾ, ಶೋಭಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.