Saturday, April 17, 2021

ಏ.೧೮ರಂದು ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ಲಭ್ಯ

ಭದ್ರಾವತಿ, ಏ. ೧೭: ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಏ.೧೮ರಂದು ಬೆಳಿಗ್ಗೆ ೧೦.೩೦ ರಿಂದ ಸಂಜೆ ೪ ಗಂಟೆವರೆಗೆ ಕೊರೋನಾ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
   ೪೫ ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಬಹುದಾಗಿದ್ದು, ಲಸಿಕೆ ಹಾಕಿಸಿಕೊಳ್ಳುವವರು ತಪ್ಪದೇ ಆಧಾರ್ ಕಾರ್ಡ್ ತರುವುದು. ಜೊತೆಗೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗೆ ಹಿರಿಯ ಆರೋಗ್ಯ ಅಧಿಕಾರಿ ಡಾ. ಗಿರಿಧರ್ ಅವರನ್ನು ಸಂಪರ್ಕಿಸಬಹುದಾಗಿದೆ.

ಕೊರೋನಾ ಲಸಿಕೆ ಪಡೆದು ಜಾಗೃತಿ ಮೂಡಿಸಿದ ಶಾಸಕ ಬಿ.ಕೆ ಸಂಗಮೇಶ್ವರ್

ಕೊರೋನಾ ೨ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಶಾಸಕ ಬಿ.ಕೆ ಸಂಗಮೇಶ್ವರ್ ಶನಿವಾರ ಭದ್ರಾವತಿ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಜಾಗೃತಿ ಮೂಡಿಸಿದರು.
   ಭದ್ರಾವತಿ, ಏ. ೧೭: ಕೊರೋನಾ ೨ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಶಾಸಕ ಬಿ.ಕೆ ಸಂಗಮೇಶ್ವರ್ ಶನಿವಾರ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಜಾಗೃತಿ ಮೂಡಿಸಿದರು.
   ಕೊರೋನಾ ೨ನೇ ಅಲೆ ಹಿನ್ನಲೆಯಲ್ಲಿ ಸಾರ್ವಜನಿಕರು ಎಚ್ಚರ ವಹಿಸುವ ಜೊತೆಗೆ ಮಾಸ್ಕ್ ಬಳಕೆಯೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಜರ್ ಬಳಸುವ ಜೊತೆಗೆ ವೈಯಕ್ತಿಕ ಸ್ವಚ್ಛತೆಗೆ ಗಮನ ಹರಿಸಬೇಕು.  ಲಸಿಕೆ ಅಗತ್ಯವಿರುವವರು ತಪ್ಪದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿರುವ ಲಸಿಕೆ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. ಆಸ್ಪತ್ರೆ ಮುಖ್ಯ ವ್ಯದ್ಯಾಧಿಕಾರಿ ಡಾ. ಓ. ಮಲ್ಲಪ್ಪ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಯುಗಾದಿ ಜೂಜೂ ತಪ್ಪಿಸಲು ಗ್ರಾಮಸ್ಥರಿಂದ ಹೊಸ ಪ್ರಯೋಗ

ಯುವ ಸಮುದಾಯ ಸೆಳೆಯಲು ಕ್ರಿಕೆಟ್ ಪಂದ್ಯಾವಳಿ ಆಯೋಜನೆ, ಜಾಗೃತಿ


ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿ ಯುಗಾದಿ ಹಬ್ಬದಂದು ಜೂಜೂ ತಪ್ಪಿಸುವ ನಿಟ್ಟಿನಲ್ಲಿ ಗ್ರಾಮಸ್ಥರೆಲ್ಲರೂ ಸೇರಿ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಾದ ತಂಡಗಳಿಗೆ ಗ್ರಾಮದ ಮುಖಂಡ ತ್ಯಾಗರಾಜ್ ಬಹುಮಾನಗಳನ್ನು ವಿತರಿಸಿದರು
    ಭದ್ರಾವತಿ, ಏ. ೧೭: ಯುಗಾದಿ ಎಂದರೆ ಹಿಂದೂಗಳಿಗೆ ವರ್ಷದ ಮೊದಲ ದಿನ, ಬದುಕಿನ ಸಿಹಿ-ಕಹಿಗಳೊಂದಿಗೆ ಸಂಭ್ರಮಿಸುವ ದಿನ. ಈ ನಡುವೆ ಜೂಜೂಗಾರರು ಮತ್ತಷ್ಟು ಸಂಭ್ರಮಿಸುವ ಹಬ್ಬ ದಿನ ಸಹ ಯುಗಾದಿಯಾಗಿದೆ. ಇಂದಿಗೂ ಯುಗಾದಿ ಹಬ್ಬದಂದು ಜೂಜೂ ಆಡುವವರ ಸಂಖ್ಯೆ ಕಡಿಮೆಯಾಗಿಲ್ಲ. ಇತ್ತೀಚಿನ ವರ್ಷಗಳಲ್ಲಿ ನಗರ ಪ್ರದೇಶಗಳಲ್ಲಿ ಈ ಸಂಸ್ಕೃತಿ ಮರೆಯಾಗಿದೆ. ಆದರೆ ಗ್ರಾಮೀಣ ಭಾಗದಲ್ಲಿ ಇಂದಿಗೂ ಉಳಿದುಕೊಂಡಿದೆ. ಸಮಾಜಕ್ಕೆ ಮಾರಕವಾಗಿರುವ ಜೂಜು ಸಂಪೂರ್ಣವಾಗಿ ನಿರ್ಮೂಲನೆಯಾಗಬೇಕು. ಈ ನಿಟ್ಟಿನಲ್ಲಿ ತಾಲೂಕಿನ ಗೋಣಿಬೀಡು ಗ್ರಾಮಸ್ಥರು ಮಾದರಿಯಾಗಿದ್ದಾರೆ.
   ಈ ಬಾರಿ ಯುಗಾದಿ ಹಬ್ಬದಂದು ಗ್ರಾಮದಲ್ಲಿ ಹೇಗಾದರೂ ಮಾಡಿ ಜೂಜು ಆಡುವವರಿಗೆ ಕಡಿವಾಣ ಹಾಕಬೇಕೆಂಬ ಸಂಕಲ್ಪದೊಂದಿಗೆ ಹೊಸ ಪ್ರಯೋಗಕ್ಕೆ ಮುಂದಾಗಿರುವುದು ಇದೀಗ ತಡವಾಗಿ ಬೆಳಕಿಗೆ ಬಂದಿದೆ.
   ಜೂಜು ಆಟದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುವ ಯುವ ಸಮುದಾಯವನ್ನು ಸೆಳೆಯಲು ಈ ಬಾರಿ ಗ್ರಾಮಸ್ಥರೆಲ್ಲರೂ ಒಂದಾಗಿ ಯುಗಾದಿ ಹಬ್ಬದಂದು ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ  ಮೂಲಕ ಜೂಜು ಆಡುವವರಿಗೆ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ರಿಕೆಟ್ ಪಂದ್ಯಾವಳಿ ಮೂಲಕ ಜೂಜು ನಿರ್ಮೂಲನೆಯಾಗಬೇಕೆಂಬ ಸಂದೇಶವನ್ನು ಸಾರಿದ್ದಾರೆ.
   ಪಂದ್ಯಾವಳಿಗೆ ಹೆಚ್ಚಿನ ಸಹಕಾರ ನೀಡಿರುವ ಗ್ರಾಮದ ಪ್ರಮುಖರು, ಜಯಕರ್ನಾಟಕ ಸಂಘಟನೆ ಮುಖಂಡರಾದ ತ್ಯಾಗರಾಜ್‌ರವರು ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸಿ ಅಭಿನಂದಿಸಿದರು. ಗ್ರಾಮದ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಂಗ್ರೆಸ್ ಯುವ ಘಟಕ ನಗರ ಪ್ರಧಾನ ಕಾರ್ಯದರ್ಶಿಯಾಗಿ ಎಸ್. ಶಂಕರ್ ನೇಮಕ


ಯುವ ಕಾಂಗ್ರೆಸ್ ನಗರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಭದ್ರಾವತಿ ನ್ಯೂಟೌನ್ ಆಂಜನೇಯ ಅಗ್ರಹಾರ ನಿವಾಸಿ ಎಸ್. ಶಂಕರ್‌ಗೆ ಶಾಸಕ ಬಿ.ಕೆ ಸಂಗಮೇಶ್ವರ್ ಆದೇಶ ಪತ್ರ ವಿತರಿಸಿದರು.    
ಭದ್ರಾವತಿ, ಏ. ೧೭: ಯುವ ಕಾಂಗ್ರೆಸ್ ನಗರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನ್ಯೂಟೌನ್ ಆಂಜನೇಯ ಅಗ್ರಹಾರ ನಿವಾಸಿ ಎಸ್. ಶಂಕರ್ ನೇಮಕಗೊಂಡಿದ್ದಾರೆ.
    ಯುವ ಘಟಕದ ನಗರ ಅಧ್ಯಕ್ಷ ಜಿ. ವಿನೋದ್‌ಕುಮಾರ್ ಮನವಿ ಮೇರೆಗೆ ಜಿಲ್ಲಾಧ್ಯಕ್ಷ ಎಚ್.ಪಿ ಗಿರೀಶ್ ನೇಮಕಗೊಳಿಸಿ ಆದೇಶ ಹೊರಡಿಸಿದ್ದು, ಪಕ್ಷದ ತತ್ವ, ಸಿದ್ದಾಂತಗಳಿಗೆ ಬದ್ಧರಾಗಿ ಪಕ್ಷವನ್ನು ಮತ್ತಷ್ಟು ಬಲಪಡಿಸುವಂತೆ ಸೂಚಿಸಲಾಗಿದೆ.
    ಆದೇಶ ಪತ್ರವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಎಸ್. ಶಂಕರ್‌ಗೆ ವಿತರಿಸಿದರು. ಈ ಸಂದರ್ಭದಲ್ಲಿ ಯುವ ಘಟಕದ ನಗರ ಅಧ್ಯಕ್ಷ ಜಿ. ವಿನೋದ್‌ಕುಮಾರ್, ಮುಖಂಡರಾದ ಮುಕುಂದಪ್ಪ,  ಪ್ರಾನ್ಸಿಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.