ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ, ಇಲ್ಲವಾದಲ್ಲಿ ನೀವೇ ಹೊಣೆಗಾರರು : ಸಚಿವ ಕೆ.ಎಸ್ ಈಶ್ವರಪ್ಪ
![](https://blogger.googleusercontent.com/img/b/R29vZ2xl/AVvXsEjqm2AngBwcvPAULFewxC-XwuqGgqw3WRHMuKuFr59FTKqbzy_TdB-KNKpXLVntftJjbEmXjTo9YTAoo1vsW2dGclpW0SD7Vtk0ksSFgrP9HTDu9TFFBnMWJnUro0cWi5qGq4JvEv3sHOAu/w400-h215-rw/D19-BDVT1-795911.jpg)
ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಬುಧವಾರ ಸಂಜೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯಿತು.
ಭದ್ರಾವತಿ, ಮೇ. ೧೯: ಯಾವುದೇ ಕಾರಣಕ್ಕೂ ಒಂದೆಡೆ ಜನ ಸೇರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದರು.
ಅವರು ಬುಧವಾರ ಸಂಜೆ ನಗರಸಭೆ ಸಭಾಂಗಣದಲ್ಲಿ ಜರುಗಿದ ತುರ್ತು ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಭದ್ರಾವತಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸೋಂಕು ಹೆಚ್ಚಳವಾಗುವ ಲಕ್ಷಣಗಳು ಕಂಡು ಬರುತ್ತಿವೆ. ಇದಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕೆಂಬ ಉದ್ದೇಶದಿಂದ ಸಭೆ ಕರೆಯಲಾಗಿದೆ ಎಂದರು.
ಭದ್ರಾವತಿಯಲ್ಲಿ ಪೊಲೀಸ್ ಇಲಾಖೆ ಇದೆಯೋ, ಇಲ್ಲವೋ ಎಂಬ ಅನುಮಾನ ಬರುತ್ತಿದೆ. ಪೊಲೀಸರು ಕಟ್ಟುನಿಟ್ಟಿನ ಕ್ರಮ ಕ್ರೈಗೊಳ್ಳುತ್ತಿಲ್ಲ. ಬಹುತೇಕ ರಸ್ತೆಗಳಲ್ಲಿ ಜನಸಂದಣಿ ಕಂಡು ಬರುತ್ತಿದೆ. ಎಷ್ಟು ವಾಹನಗಳನ್ನು ವಶಕ್ಕೆ ಪಡೆದಿದ್ದೀರಾ ಎಂಬುದೇ ಗೊತ್ತಿಲ್ಲ. ಸರ್ಕಾರ ಮದುವೆಗಳನ್ನು ನಡೆಸದಂತೆ ಆದೇಶ ಹೊರಡಿಸಿದೆ. ಬಹುತೇಕ ಕಲ್ಯಾಣ ಮಂಟಪಗಳಲ್ಲಿ, ಸಮುದಾಯ ಭವನಗಳಲ್ಲಿ, ಮನೆಗಳಲ್ಲಿ ಮದುವೆಗಳು ನಡೆಯುತ್ತಿವೆ. ಜೊತೆಗೆ ಇನ್ನಿತರ ಶುಭ ಸಮಾರಂಭಗಳು ಜರುಗುತ್ತಿದ್ದು, ಒಂದೆಡೆ ಜನ ಸೇರುತ್ತಿದ್ದಾರೆ. ಪೊಲೀಸ್ ಇಲಾಖೆ ಯಾವ ರೀತಿ ಕ್ರಮ ಕೈಗೊಳ್ಳುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ. ಲಾಕ್‌ಡೌನ್ ಎಂಬುದರ ಅರ್ಥವೇ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಚಿವರ ಪ್ರಶ್ನೆಗೆ ಉತ್ತರಿಸಿದ ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ, ಇದುವರೆಗೂ ಮಾಸ್ಕ್ ಇಲ್ಲದ ೩೬೯೨ ಮಂದಿಗೆ ದಂಡ ವಿಧಿಸಲಾಗಿದೆ. ಉಳಿದಂತೆ ೭೪೫ ದ್ವಿಚಕ್ರ ವಾಹನ, ೧೧೧ ನಾಲ್ಕು ಚಕ್ರದ ವಾಹನ, ೯೨ ಆಟೋ ರಿಕ್ಷಾ ಸೇರಿದಂತೆ ಒಟ್ಟು ೯೪೮ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.
ಈ ನಡುವೆ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಬೆಳಗಿನ ಸಮಯದಲ್ಲಿ ಜನಸಂದಣಿ ಹೆಚ್ಚಾಗುತ್ತಿದೆ. ನಮ್ಮ ನಿವಾಸದ ಸಮೀಪದಲ್ಲಿರುವ ಮಾರುಕಟ್ಟೆಯಲ್ಲಿಯೇ ನೂರಾರು ಜನರು ಸೇರುತ್ತಿದ್ದಾರೆ. ಎಲ್ಲಿಯವರೆಗೂ ಜನ ಸೇರುವುದಿಲ್ಲ ಅಲ್ಲಿಯ ವರೆಗೂ ಸೋಂಕು ತಡೆಗಟ್ಟಲು ಸಾಧ್ಯವಿಲ್ಲ. ನಗರಸಭೆ ಸದಸ್ಯರೊಂದಿಗೆ ಈಗಾಗಲೇ ಈ ವಿಚಾರ ಚರ್ಚಿಸಲಾಗಿದೆ. ಬಹುತೇಕ ಸದಸ್ಯರು ೪ ದಿನ ಕಟ್ಟುನಿಟ್ಟಾಗಿ ಲಾಕ್‌ಡೌನ್ ಮಾಡುವಂತೆ ಆಗ್ರಹಿಸುತ್ತಿದ್ದಾರೆಂದರು.
ಸಚಿವರು ಮಾತನಾಡಿ, ಯಾವುದೇ ಕಾರಣಕ್ಕೂ ಜನ ಸೇರಬಾರದು. ಪೊಲೀಸ್ ಇಲಾಖೆ ಮುಲ್ಲಾಜಿಲ್ಲದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಬೆಳಿಗ್ಗೆ ೫ ರಿಂದ ೮ ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಬೇಕು. ಆ ನಂತರ ರಸ್ತೆಯಲ್ಲಿ ಯಾವುದೇ ವಾಹನ ಕಾಣಿಸಬಾರದು. ವಾಹನಗಳು ಕಂಡು ಬಂದಲ್ಲಿ ವಶಕ್ಕೆ ಪಡೆಯುವುದು. ಮೇ.೨೪ರ ವರೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಆ ನಂತರ ಜಿಲ್ಲೆಯಲ್ಲಿ ಲಾಕ್‌ಡೌನ್ ಮುಂದುವರೆಸಬೇಕಾ ಅಥವಾ ಬೇಡವಾ ಎಂಬುದರ ಬಗ್ಗೆ ಚರ್ಚೆ ನಡೆಸೋಣ ಎಂದರು.
ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಮಾತನಾಡಿ, ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಕೈಗೊಂಡಿರುವಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಇಲ್ಲಿಯೂ ಕೈಗೊಳ್ಳಬೇಕೆಂಬ ಉದ್ದೇಶವಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್, ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಹಾಗು ನೂತನ ನಗರಸಭಾ ಸದಸ್ಯರು ಮತ್ತು ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.