Wednesday, June 9, 2021

ಅಕ್ರಮ ಮನೆ ನಿರ್ಮಾಣ : ಸಕ್ರಮಕ್ಕೆ ಅರ್ಜಿ ಸಲ್ಲಿಸಿ

      ಭದ್ರಾವತಿ, ಜೂ. ೯: ತಾಲೂಕಿನ ನಗರ ಪ್ರದೇಶದಲ್ಲಿ ೯೪ ಸಿಸಿ ಹಾಗು ಗ್ರಾಮೀಣ ಪ್ರದೇಶದಲ್ಲಿ ೯೪ ಸಿ ಯೋಜನೆಯಡಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸಿಕೊಂಡಿರುವವರು ಸಕ್ರಮ ಮಾಡಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದ್ದು, ಕ್ಷೇತ್ರದ ನಾಗರೀಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದ್ದಾರೆ.
    ತಾಲೂಕು ಆಡಳಿತ ತಕ್ಷಣ ಸರ್ಕಾರ ಕೈಗೊಂಡಿರುವ ಈ ಯೋಜನೆಯನ್ನು ವ್ಯಾಪಕವಾಗಿ ಪ್ರಚಾರ ನಡೆಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಬೇಕು. ನಾಗರೀಕರು ೯೪ ಸಿಸಿ ಹಾಗು ೯೪ ಸಿ ಯೋಜನೆಯಡಿ ಸಕ್ರಮ ಮಾಡಿಕೊಳ್ಳಲು ಅಗತ್ಯವಿರುವ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಂಡು ತಕ್ಷಣ ಅರ್ಜಿ ಸಲ್ಲಿಸಬೇಕೆಂದು ಕೋರಿದ್ದಾರೆ.  

೨ ದೇವಸ್ಥಾನಗಳ ಅಭಿವೃದ್ಧಿ ಕಾರ್ಯಗಳಿಗೆ ಆರ್ಥಿಕ ನೆರವು


ಭದ್ರಾವತಿ ತಾಲೂಕಿನ ೨ ದೇವಸ್ಥಾನಗಳ ಅಭಿವೃದ್ಧಿ ಕಾರ್ಯಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬುಧವಾರ ಆರ್ಥಿಕ ನೆರವು ನೀಡಲಾಯಿತು.  
    ಭದ್ರಾವತಿ, ಜೂ. ೯: ತಾಲೂಕಿನ ೨ ದೇವಸ್ಥಾನಗಳ ಅಭಿವೃದ್ಧಿ ಕಾರ್ಯಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬುಧವಾರ ಆರ್ಥಿಕ ನೆರವು ನೀಡಲಾಯಿತು.
    ನಗರಸಭೆ ವ್ಯಾಪ್ತಿಯ ಮೂಲೆಕಟ್ಟೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ೧ ಲಕ್ಷ ರು. ಹಾಗು ಬಾಳೆಮಾರನಹಳ್ಳಿ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ೨ ಲಕ್ಷ ರು. ಆರ್ಥಿಕ ನೆರವನ್ನು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಜಿ. ಆನಂದಕುಮಾರ್ ವಿತರಿಸಿದರು.
    ತಾಲೂಕು ಯೋಜನಾಧಿಕಾರಿ ಪ್ರಕಾಶ್, ಮೇಲ್ವಿಚಾರಕ ರುದ್ರೇಶ್, ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸೇವಾಕರ್ತರು ಉಪಸ್ಥಿತರಿದ್ದರು.

ಭದ್ರಾವತಿಯಲ್ಲಿ ೧೧೩ ಸೋಂಕು, ೬ ಮಂದಿ ಬಲಿ

    ಭದ್ರಾವತಿ, ಜೂ. ೯: ತಾಲೂಕಿನಲ್ಲಿ ಮಂಗಳವಾರ ಕೇವಲ ೪೫ ಕೊರೋನಾ ಸೋಂಕು ಪತ್ತೆಯಾಗಿತ್ತು. ಆದರೆ ಬುಧವಾರ ಸೋಂಕು ಪುನಃ ನೂರರ ಗಡಿ ದಾಟಿದ್ದು, ಒಟ್ಟು ೧೧೩ ಸೋಂಕು ದೃಢಪಟ್ಟಿದೆ. ಈ ನಡುವೆ ಸೋಂಕಿಗೆ ಒಂದೇ ದಿನ ೬ ಮಂದಿ ಬಲಿಯಾಗಿದ್ದಾರೆ.
   ಒಟ್ಟು ೧೦೫೪ ಮಂದಿ ಮಾದರಿ ಸಂಗ್ರಹಿಸಲಾಗಿದ್ದು, ೧೧೩ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ೮೨ ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ತಾಲೂಕಿನಲ್ಲಿ ಇದುವರೆಗೂ ಒಟ್ಟು ೬೧೩೪ ಸೋಂಕು ಪ್ರಕರಣಗಳು ದಾಖಲಾಗಿದ್ದು, ೫೧೨೯ ಮಂದಿ ಗುಣಮುಖರಾಗಿದ್ದಾರೆ. ೧೦೦೫ ಸಕ್ರಿಯ ಪ್ರಕರಣಗಳು ಬಾಕಿ ಉಳಿದಿವೆ.
     ಒಂದೇ ದಿನ ೬ ಮಂದಿ ಬಲಿಯಾಗಿದ್ದು, ಇದುವರೆಗೂ ಒಟ್ಟು ೧೬೬ ಮಂದಿ ಮೃತಪಟ್ಟಿದ್ದಾರೆ. ಒಟ್ಟು ೨೬೩ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರ ವ್ಯಾಪ್ತಿಯಲ್ಲಿ ಒಟ್ಟು ೪೨ ಕಂಟೈನ್‌ಮೆಂಟ್ ಜೋನ್‌ಗಳು ಸಕ್ರಿಯಾಗಿದ್ದು, ಇದುವರೆಗೂ ೮೪ ಜೋನ್‌ಗಳನ್ನು ತೆರವುಗೊಳಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಒಟ್ಟು ೨೬ ಜೋನ್‌ಗಳು ಸಕ್ರಿಯಾಗಿದ್ದು, ೧೭ ತೆರವುಗೊಳಿಸಲಾಗಿದೆ.

ಆಶಾ ಕಾರ್ಯಕರ್ತೆಯರು, ಆಂಬ್ಯುಲೆನ್ಸ್ ಚಾಲಕರಿಗೆ ದಿನಸಿ ಸಾಮಗ್ರಿ ವಿತರಣೆ

ಭದ್ರಾವತಿ ನಗರಸಭೆ ವಾರ್ಡ್ ನಂ.೨೬ರ ವ್ಯಾಪ್ತಿಯ ನ್ಯೂ ಕಾಲೋನಿ ಭಾಗದ ಆಶಾ ಕಾರ್ಯಕರ್ತೆಯರು ಹಾಗೂ ಸರ್ಕಾರಿ ಆಂಬ್ಯುಲೆನ್ಸ್ ಚಾಲಕರಿಗೆ ಬುಧವಾರ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. 

   ಭದ್ರಾವತಿ, ಜೂ. ೯: ನಗರಸಭೆ ನಗರಸಭೆ ವಾರ್ಡ್ ನಂ.೨೬ರ ವ್ಯಾಪ್ತಿಯ ನ್ಯೂ ಕಾಲೋನಿ ಭಾಗದ ಆಶಾ ಕಾರ್ಯಕರ್ತೆಯರು ಹಾಗೂ ಸರ್ಕಾರಿ ಆಂಬ್ಯುಲೆನ್ಸ್ ಚಾಲಕರಿಗೆ ಬುಧವಾರ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.
    ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಎಂ.ಜಿ ರಾಮಚಂದ್ರ ತಮ್ಮ ಸ್ವಂತ ಖರ್ಚಿನಲ್ಲಿ ಸುಮಾರು ೨೫ ಮಂದಿಗೆ ದಿನಸಿ ಸಾಮಗ್ರಿ ಹಾಗು ತರಕಾರಿ ವಿತರಿಸುವ ಮೂಲಕ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ.
    ನಗರಸಭಾ ಸದಸ್ಯರಾದ ಸರ್ವಮಂಗಳ, ಎಸ್.ಎಸ್ ಭೈರಪ್ಪ, ಕಾಂತರಾಜ್, ಮಾಜಿ ಸದಸ್ಯರಾದ ಮುಕುಂದಪ್ಪ, ಯುವ ಮುಖಂಡ ಬಿ.ಎಸ್ ಬಸವೇಶ್, ಫ್ರಾನ್ಸಿಸ್, ಕಾಂಗ್ರೆಸ್ ಮುಖಂಡರಾದ ವಿಲ್ಸನ್ ಬಾಬು, ವಿಜಯಗಾಂಧಿ, ಎಲ್ಲೋಜಿರಾವ್, ಹರೀಶ್, ವಿನೋದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪ್ರೊ. ಬಿ. ಕೃಷ್ಣಪ್ಪ ಶೋಷಿತರ ಪರ ಧ್ವನಿಯಾಗಿದ್ದರು : ಪಳನಿರಾಜ್

ಭದ್ರಾವತಿಯಲ್ಲಿ ಸಿ.ಎನ್ ರಸ್ತೆಯಲ್ಲಿರುವ ತಾಲೂಕು ಶಾಖೆ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೊ. ಬಿ. ಕೃಷ್ಣಪ್ಪನವರ ೮೩ನೇ ಜನ್ಮ ದಿನ ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಜಿಲ್ಲಾ ಸಂಘಟನಾ ಸಂಚಾಲಕ ಪಳನಿರಾಜ್ ಪಾಲ್ಗೊಂಡು ಮಾತನಾಡಿದರು.
     ಭದ್ರಾವತಿ, ಜೂ. ೯: ಪ್ರೊ. ಬಿ. ಕೃಷ್ಣಪ್ಪನವರ ಹೋರಾಟದ ದಾರಿಯಲ್ಲಿ ನಾವೆಲ್ಲರೂ ಸಾಗುತ್ತಿದ್ದು, ಮುಂದಿನ ದಿನಗಳಲ್ಲೂ ಇದೆ ದಾರಿಯಲ್ಲಿ ಸಾಗುವ ಮೂಲಕ ಶೋಷಿತರ ಧ್ವನಿಯಾಗಬೇಕೆಂದು  ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಜಿಲ್ಲಾ ಸಂಘಟನಾ ಸಂಚಾಲಕ ಪಳನಿರಾಜ್ ತಿಳಿಸಿದರು.
   ಅವರು ಬುಧವಾರ ನಗರದ ಸಿ.ಎನ್ ರಸ್ತೆಯಲ್ಲಿರುವ ತಾಲೂಕು ಶಾಖೆ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೊ. ಬಿ. ಕೃಷ್ಣಪ್ಪನವರ ೮೩ನೇ ಜನ್ಮ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
     ನಗರದ ಎರಡು ಬೃಹತ್ ಕಾರ್ಖಾನೆಗಳಾದ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳಲ್ಲಿ ಅಂದು ದಲಿತ ಕಾರ್ಮಿಕರ ಮೇಲೆ ಮೇಲ್ವರ್ಗದ ಸಮುದಾಯದ ಜನರಿಂದ ನಡೆಯುತ್ತಿದ್ದ ಶೋಷಣೆಗಳ ವಿರುದ್ಧ ಹೋರಾಟ ನಡೆಸುವ ಉದ್ದೇಶದಿಂದ ಪ್ರೊ. ಬಿ. ಕೃಷ್ಣಪ್ಪನವರು ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹುಟ್ಟು ಹಾಕಿದರು. ನಂತರ ಅವರು ರಾಜ್ಯಾದ್ಯಂತ ಹಲವಾರು ಹೋರಾಟಗಳನ್ನು ನಡೆಸುವ ಮೂಲಕ ಶೋಷಿತರ ಪರ ಧ್ವನಿಯಾಗಿ ನ್ಯಾಯ ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು. ಇವರ ಹೋರಾಟದ ದಾರಿಯಲ್ಲಿ ಇದೀಗ ಸಂಘಟನೆ ರಾಜ್ಯಾಧ್ಯಕ್ಷ ಮಾವಳ್ಳಿ ಶಂಕರ್, ಜಿಲ್ಲಾಧ್ಯಕ್ಷ ಹಾಲೇಶಪ್ಪನವರ ನೇತೃತ್ವದಲ್ಲಿ ಮುನ್ನಡೆಯುತ್ತಿದ್ದು, ನಿರಂತರವಾಗಿ ಶೋಷಿತರ ಪರ ಹೋರಾಟ ನಡೆಯಲಿದೆ ಎಂದರು.
     ತಾಲೂಕು ಪ್ರಧಾನ ಸಂಚಾಲಕ ಎಂ. ಕುಬೇಂದ್ರಪ್ಪ, ಸಂಘಟನಾ ಸಂಚಾಲಕ ಬಸವರಾಜ, ಖಜಾಂಚಿ ನೀಲಕಂಠ,  ಸದಸ್ಯರಾದ ರಾಮನಾಯ್ಕ, ಆನಂದರಾವ್, ಬಾಬಣ್ಣ, ರಾಜು, ಯೋಗೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಇದಕ್ಕೂ ಮೊದಲು ಪ್ರೊ. ಬಿ. ಕೃಷ್ಣಪ್ಪನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು.