Monday, June 28, 2021

ಭದ್ರಾವತಿಯಲ್ಲಿ ಕೊರೋನಾಗೆ ೭ ಬಲಿ

   ಭದ್ರಾವತಿ, ಜೂ. ೨೮: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾದರೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಸೋಮವಾರ ಒಂದೇ ದಿನ ೭ ಜನ ಬಲಿಯಾಗಿದ್ದಾರೆ.
    ನಗರ ಭಾಗದಲ್ಲಿ ಒಟ್ಟು ೧೩ ಸೋಂಕು ದೃಢಪಟ್ಟಿದ್ದು, ಒಟ್ಟು ೬ ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಗ್ರಾಮೀಣ ಭಾಗದಲ್ಲಿ ೧೮ ಸೋಂಕು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಒಟ್ಟು ತಾಲೂಕಿನಲ್ಲಿ ೩೧ ಸೋಂಕು ಪತ್ತೆಯಾಗಿದ್ದು, ೭ ಮಂದಿ ಬಲಿಯಾಗಿದ್ದಾರೆ.



ಕೊರೋನಾ ಗೆದ್ದ ಡಿ.ಸಿ ಮಾಯಣ್ಣ :
    ಕೊರೋನಾ ಸೋಂಕಿಗೆ ಒಳಗಾಗಿ ಸುಮಾರು ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ೮೭ರ ಹರೆಯದ ಹಿರಿಯ ಕಾರ್ಮಿಕ ಮುಖಂಡ ಕಾಮ್ರೇಡ್ ಡಿ.ಸಿ ಮಾಯಣ್ಣ ಗುಣಮುಖರಾಗಿದ್ದಾರೆ.
ನಗರದಲ್ಲಿ ದಲಿತ ಮುಖಂಡ ಎಂ. ಶ್ರೀನಿವಾಸನ್ ಸೇರಿದಂತೆ ಹಲವಾರು ಹೋರಾಟಗಾರರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ನಡುವೆ ಡಿ.ಸಿ ಮಾಯಣ್ಣ ಚೇತರಿಸಿಕೊಂಡು ಮನೆಗೆ ಹಿಂದಿರುಗಿರುವುದು ಹೋರಾಟಗಾರರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಿದೆ. ಆಮ್ ಪಾರ್ಟಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ಡಿ.ಸಿ ಮಾಯಣ್ಣ ಅವರಿಗೆ ಭಗವಂತ ಇನ್ನೂ ಹೆಚ್ಚಿನ ಆರೋಗ್ಯ ಕರುಣಿಸಲೆಂದು ಪ್ರಾರ್ಥಿಸುವ ಜೊತೆಗೆ ಮುಂದಿನ ಹೋರಾಟಗಳಿಗೆ ಡಿ.ಸಿ ಮಾಯಣ್ಣ ಶಕ್ತಿ ತುಂಬಲೆಂದು ಹಾರೈಸಿದ್ದಾರೆ.

ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್-೧೯ ಲಸಿಕೆ

ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪದವಿ ವಿದ್ಯಾರ್ಥಿಗಳಿಗೆ ಕೋವಿಡ್-೧೯ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.
   ಭದ್ರಾವತಿ, ಜೂ. ೨೮: ನಗರದ ವಿವಿಧೆಡೆ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ವತಿಯಿಂದ ಕೋವಿಡ್-೧೯ ಲಸಿಕೆ ಉಚಿತವಾಗಿ ನೀಡಲಾಗುತ್ತಿದ್ದು, ಸೋಮವಾರ ಲಸಿಕಾ ಅಭಿಯಾನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.
    ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು ಮತ್ತು ಬೊಮ್ಮನಕಟ್ಟೆ ಸರ್.ಎಂ.ವಿ ಸರ್ಕಾರಿ ವಿಜ್ಞಾನ ಕಾಲೇಜು ಸೇರಿದಂತೆ ಹಲವೆಡೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
   ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ಹಿರಿಯ ವೈದ್ಯೆ ಡಾ.ಎಂ.ಆರ್ ಗಾಯತ್ರಿ, ನಗರಸಭಾ ಸದಸ್ಯ ಕೆ. ಸುದೀಪ್‌ಕುಮಾರ್ ಮತ್ತು ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಹಾಗು ಪ್ರಾಧ್ಯಾಪಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
   ಬೊಮ್ಮನಕಟ್ಟೆ ಸರ್.ಎಂ.ವಿ ವಿಜ್ಞಾನ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ವಿಷ್ಣುಮೂರ್ತಿ ಹಾಗು ಪ್ರಾಧ್ಯಾಪಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭದ್ರಾವತಿ ಬೊಮ್ಮನಕಟ್ಟೆ ಸರ್‌ಎಂವಿ ಸರ್ಕಾರಿ ವಿಜ್ಞಾನ  ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪದವಿ ವಿದ್ಯಾರ್ಥಿಗಳಿಗೆ ಕೋವಿಡ್-೧೯ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.


ವಿವಿಧ ಬೇಡಿಕೆ ಈಡೇರಿಕೆಗಾಗಿ ಕಾರ್ಮಿಕರಿಂದ ೩ ದಿನ ಹೋರಾಟ

ಮೊದಲ ದಿನ ಕಪ್ಪುಪಟ್ಟಿ ಧರಿಸಿ ಸೈಲ್ ವಿರುದ್ಧ ಆಕ್ರೋಶ


    ಭದ್ರಾವತಿ, ಜೂ. ೨೮: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರದಿಂದ ೩ ದಿನಗಳವರೆಗೆ ಹೋರಾಟ ಆರಂಭಿಸಿದ್ದಾರೆ.
    ಕಾರ್ಖಾನೆ ಮುಂಭಾಗ ಕಪ್ಪು ಬ್ಯಾಡ್ಜ್ ಧರಿಸಿ ಉಕ್ಕು ಪ್ರಾಧಿಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ವೇತನ ಪರಿಷ್ಕರಣೆ ಅವಧಿ ಮುಕ್ತಾಯಗೊಂಡು ಸುಮಾರು ೫ ವರ್ಷಗಳು ಕಳೆದರೂ ಸಹ ಇದುವರೆಗೂ ವೇತನ ಪರಿಷ್ಕರಣೆ ಮಾಡಿರುವುದಿಲ್ಲ.  ತಕ್ಷಣ ಕಾಯಂ ಹಾಗು ಗುತ್ತಿಗೆ ಕಾರ್ಮಿಕರಿಗೆ ವೇತನ ಪರಿಷ್ಕರಣೆ ಮಾಡುವಂತೆ ಒತ್ತಾಯಿಸಲಾಯಿತು.
    ಕಾರ್ಮಿಕರಿಗೆ ನ್ಯಾಯಸಮ್ಮತವಾಗಿ ಸಿಗಬೇಕಾದ ಶೇ.೧೫ ಎಂಜಿಬಿ, ಶೇ.೩೫ ಪರ್ಕ್ಸ್ ಹಾಗು ಶೇ.೯ ಪೆನ್ಸನ್ ವಂತಿಗೆ ನೀಡುವ ಜೊತೆಗೆ ವೆಲೆಫೇರ್ ಅಲೋಯನ್ಸ್ ಹೆಚ್ಚಿಸುವಂತೆ ಹಾಗು ಕೋವಿಡ್-೧೯ ಸೋಂಕಿಗೆ ಒಳಗಾದ ಕಾರ್ಮಿಕರ ಅವಲಂಬಿತರಿಗೆ ಉದ್ಯೋಗ ಕಲ್ಪಿಸಿಕೊಡುವಂತೆ ಆಗ್ರಹಿಸಲಾಯಿತು.
   ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಹೋರಾಟದ ನೇತೃತ್ವ ವಹಿಸಿದ್ದರು. ಪದಾಧಿಕಾರಿಗಳಾದ ಯು.ಎ ಬಸಂತ್‌ಕುಮಾರ್, ಕೆ.ಆರ್ ಮನು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಪಾಲ್ಗೊಂಡಿದ್ದರು.  ಮಂಗಳವಾರ ಕಾರ್ಖಾನೆ ಮುಂಭಾಗ ಸತ್ಯಾಗ್ರಹ ಹಾಗು ಬುಧವಾರ ಒಂದು ದಿನದ ಮುಷ್ಕರ ನಡೆಯಲಿದೆ.