Monday, July 12, 2021

ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೃತಪಟ್ಟ ಇಬ್ಬರು ಕಟ್ಟಡ ಕಾರ್ಮಿಕರ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಣೆ

ಕಟ್ಟಡ ಮಾಲೀಕರೊಂದಿಗೆ ಮಾತುಕತೆ ನಡೆಸಿ ತಲಾ ೫ ಲಕ್ಷ ರು. ಪರಿಹಾರ ಕೊಡಿಸಿದ ಶಾಸಕ ಬಿ.ಕೆ ಸಂಗಮೇಶ್ವರ್


ಶಿವಮೊಗ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೃತಪಟ್ಟ ಭದ್ರಾವತಿ ಅಶ್ವಥ್‌ನಗರದ ಇಬ್ಬರು ಕಟ್ಟಡ ಕಾರ್ಮಿಕರ ಕುಟುಂಬಗಳಿಗೆ ತಲಾ ೫ ಲಕ್ಷ ರು. ಪರಿಹಾರದ ಚೆಕ್ ಶಾಸಕ ಬಿ.ಕೆ ಸಂಗಮೇಶ್ವರ್ ಸೋಮವಾರ ವಿತರಿಸಿದರು.
    ಭದ್ರಾವತಿ, ಜು. ೧೨: ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೃತಪಟ್ಟ ಇಬ್ಬರು ಕಟ್ಟಡ ಕಾರ್ಮಿಕರ ಕುಟುಂಬಗಳಿಗೆ ತಲಾ ೫ ಲಕ್ಷ ರು. ಪರಿಹಾರದ ಚೆಕ್ ಶಾಸಕ ಬಿ.ಕೆ ಸಂಗಮೇಶ್ವರ್ ಸೋಮವಾರ ವಿತರಿಸಿದರು.
    ನಗರದ ಹೊಸಮನೆ ಅಶ್ವಥ್‌ನಗರದ ಇಬ್ಬರು ಕಟ್ಟಡ ಕಾರ್ಮಿಕರು ಇತ್ತೀಚೆಗೆ ಶಿವಮೊಗ್ಗದಲ್ಲಿ ಕಟ್ಟಡ ಕಾಮಗಾರಿಯಲ್ಲಿ ತೊಡಗಿದ್ದಾಗ ಮೃತಪಟ್ಟಿದ್ದರು. ಶಾಸಕ ಬಿ.ಕೆ ಸಂಗಮೇಶ್ವರ್ ಮೃತಪಟ್ಟ ಬಡ ಕಾರ್ಮಿಕರ ಕುಟುಂಬಗಳಿಗೆ ಕಟ್ಟಡ ಮಾಲೀಕರೊಂದಿಗೆ ಮಾತುಕತೆ ನಡೆಸಿ ತಲಾ ೫ ಲಕ್ಷ ರು. ಪರಿಹಾರಕ್ಕೆ ಒತ್ತಾಯಿಸಿದ್ದರು.
    ನಗರಸಭಾ ಸದಸ್ಯರಾದ ಜಾರ್ಜ್, ಚನ್ನಪ್ಪ, ಕೆ. ಸುದೀಪ್‌ಕುಮಾರ್, ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಲೂಕು ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷ ನಾಗೇಂದ್ರ ರೆಡ್ಡಿ, ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ನಿಯೋಜಿತ ಅಧ್ಯಕ್ಷ ಚಂದ್ರಶೇಖರ್, ತಾಂತ್ರಿಕ ಸಲಹೆಗಾರ ಮನೋಹರ್, ಸಂಘಟನಾ ಕಾರ್ಯದರ್ಶಿ ಅಭಿಲಾಷ್, ಮಂಜು, ಸಲಹೆಗಾರ ಸಂಪತ್ ಕುಮಾರ್, ಪೈಂಟರ್ ಸಂಘದ ಗೌರವಾಧ್ಯಕ್ಷ ಶಿವಣ್ಣ, ಅಧ್ಯಕ್ಷ ಶ್ರೀನಿವಾಸ್ ಹಾಗು ಪದಾಧಿಕಾರಿಗಳು, ಇಂಜಿನಿಯರ್ ಲಕ್ಷಣ್, ರವಿಕುಮಾರ್, ಸರವಣ ಮೇಸ್ತ್ರಿ ಮತ್ತು ಟೈಲ್ಸ್ ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ನಿರೀಕ್ಷಕರ ಕಛೇರಿ ಮುಂಭಾಗ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಭದ್ರಾವತಿ ತಾಲೂಕು ಶಾಖೆ ವತಿಯಿಂದ ಸೋಮವಾರ ನಗರದ ಸಿ.ಎನ್ ರಸ್ತೆಯಲ್ಲಿರುವ ಕಾರ್ಮಿಕ ನಿರೀಕ್ಷಕರ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಜು. ೧೨: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ತಾಲೂಕು ಶಾಖೆ ವತಿಯಿಂದ ಸೋಮವಾರ ನಗರದ ಸಿ.ಎನ್ ರಸ್ತೆಯಲ್ಲಿರುವ ಕಾರ್ಮಿಕ ನಿರೀಕ್ಷಕರ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಕೋವಿಡ್-೧೯ರ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಬಡ ಕಾರ್ಮಿಕರಿಗೆ ಸರ್ಕಾರ ಘೋಷಿಸಿರುವ ೩ ಸಾವಿರ ರು. ಆರ್ಥಿಕ ನೆರವನ್ನು ೧೦ ಸಾವಿರ ರು.ಗಳಿಗೆ ಹೆಚ್ಚಿಸಬೇಕು. ದಿನಸಿ ಸಾಮಗ್ರಿ ವಿತರಣೆಯಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗಿದ್ದು, ಅಲ್ಲದೆ ಹಗರಣಗಳು ನಡೆದಿರುವುದು ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಸರ್ಕಾರ ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.
    ನಗರಸಭಾ ಸದಸ್ಯ ಜಾರ್ಜ್, ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಲೂಕು ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷ ನಾಗೇಂದ್ರ ರೆಡ್ಡಿ, ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ನಿಯೋಜಿತ ಅಧ್ಯಕ್ಷ ಚಂದ್ರಶೇಖರ್, ತಾಂತ್ರಿಕ ಸಲಹೆಗಾರ ಮನೋಹರ್, ಸಂಘಟನಾ ಕಾರ್ಯದರ್ಶಿ ಅಭಿಲಾಷ್, ಮಂಜು, ಸಲಹೆಗಾರ ಸಂಪತ್ ಕುಮಾರ್, ಪೈಂಟರ್ ಸಂಘದ ಗೌರವಾಧ್ಯಕ್ಷ ಶಿವಣ್ಣ, ಅಧ್ಯಕ್ಷ ಶ್ರೀನಿವಾಸ್ ಹಾಗು ಪದಾಧಿಕಾರಿಗಳು, ಇಂಜಿನಿಯರ್ ಲಕ್ಷಣ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಕೆರೆಗಳ ಸಂರಕ್ಷಣೆ ಕಾರ್ಯಕ್ಕೆ ಹಿನ್ನಡೆ : ತುರ್ತು ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸಿ

ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಮನವಿ


ಭದ್ರಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆರೆಗಳ ಅಭಿವೃದ್ಧಿಗೆ ಸಂಬಂಧಪಟ್ಟದಂತೆ ತುರ್ತು ಸಭೆ ಕರೆಯುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಸೋಮವಾರ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಲಾಯಿತು.
   ಭದ್ರಾವತಿ, ಜು. ೧೨: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆರೆಗಳ ಅಭಿವೃದ್ಧಿಗೆ ಸಂಬಂಧಪಟ್ಟದಂತೆ ತುರ್ತು ಸಭೆ ಕರೆಯುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಸೋಮವಾರ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಲಾಯಿತು.
     ವಿಧಾನಸಭಾ ಕ್ಷೇತ್ರದ ನಗರಸಭಾ ವ್ಯಾಪ್ತಿಯಲ್ಲಿ ಹಾಗು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂರಾರು ಕೆರೆಗಳಿದ್ದು, ಈ ಕೆರೆಗಳ ಅಂತರ್ಜಲ ಹೆಚ್ಚಿಸಿ ಪ್ರಾಣಿ, ಪಕ್ಷಿಗಳಿಗೆ, ದನಗಾಹಿಗಳಿಗೆ, ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈಗಾಗಲೇ ಕೆಲವು ಕೆರೆಗಳ ಸಮೀಪದ ರೈತರು ಸರ್ಕಾರದಿಂದ ಯಾವುದೇ ಅನುದಾನ ನಿರೀಕ್ಷೆ ಮಾಡದೆ ಸ್ವ ಇಚ್ಚಿಯಿಂದ ಕೆರೆಗಳ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋ. ರು. ಉಳಿತಾಯವಾಗುತ್ತಿದೆ ಎಂದು ಮನವರಿಕೆ ಮಾಡಲಾಗಿದೆ.
    ಕೆರೆಗಳ ಸಂರಕ್ಷಣೆಯಲ್ಲಿ ತೊಡಗಿರುವ ರೈತರ ಕಾರ್ಯಕ್ಕೆ ಕೆಲವು ಸ್ಥಳೀಯರು ಅಡ್ಡಿ ಉಂಟು ಮಾಡುತ್ತಿದ್ದು, ಇದರಿಂದಾಗಿ ಕೆರೆಗಳ ಸಂರಕ್ಷಣೆ ಕಾರ್ಯಕ್ಕೆ ಹಿನ್ನಡೆಯಾಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ನಗರಸಭೆ ಆಡಳಿತಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಕರ್ನಾಟಕ ನೀರಾವರಿ ನಿಗಮ, ರಕ್ಷಣಾ ಇಲಾಖೆ, ಮೀನುಗಾರಿಕೆ ಇಲಾಖೆ ಮತ್ತು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳನ್ನೊಳಗೊಂಡ ತುರ್ತು ಸಭೆಯನ್ನು ಕರೆದು ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಲಾಗಿದೆ.
ಟ್ರಸ್ಟ್ ಛೇರ್‍ಮನ್ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮೊಹಮ್ಮದ್ ಅನಿಫ್, ಮುರುಗೇಶ್, ನಗರಸಭಾ ಸದಸ್ಯರಾದ ಚನ್ನಪ್ಪ, ಸುದೀಪ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.