Saturday, July 17, 2021

ಜು.೧೮ರಂದು ಬಿಜೆಪಿ ಮಂಡಲ ಸಭೆ

     ಭದ್ರಾವತಿ, ಜು. ೧೭: ಭಾರತೀಯ ಜನತಾ ಪಕ್ಷದ ವತಿಯಿಂದ ಜು.೧೮ರಂದು ಬೆಳಿಗ್ಗೆ ೧೦.೩೦ಕ್ಕೆ ಹಳೇನಗರದ ಶ್ರೀ ಕೋಟೆ ಬಸವೇಶ್ವರ ದೇವಸ್ಥಾನದಲ್ಲಿ ಮಂಡಲ ಸಭೆ ಹಮ್ಮಿಕೊಳ್ಳಲಾಗಿದೆ.
    ಸಭೆಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್, ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ವಿಭಾಗದ ಪ್ರಭಾರಿ ಗಿರೀಶ್ ಪಟೇಲ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಅಧ್ಯಕ್ಷತೆ ವಹಿಸಲಿದ್ದಾರೆ.
    ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ಜು.೧೯ರಂದು ವೃಕ್ಷಾರೋಪಣ

    ಭದ್ರಾವತಿ, ಜು. ೧೭: ನಗರಸಭೆ ವ್ಯಾಪ್ತಿ ವಾರ್ಡ್ ನಂ.೨೯ರ ಎನ್‌ಟಿಬಿ ಲೇ ಔಟ್ ಉದ್ಯಾನವನದಲ್ಲಿ ಜು.೧೯ರಂದು ಬೆಳಿಗ್ಗೆ ೮.೪೫ಕ್ಕೆ 'ಜೀವ ವೈವಿಧ್ಯ ಜಾಗೃತಿ ಅಭಿಯಾನ'ದಡಿ ವೃಕ್ಷಾರೋಪಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 
    ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಜೀವವೈವಿಧ್ಯ ಸಮಿತಿ ಅಧ್ಯಕ್ಷರು, ಸದಸ್ಯರು, ತಹಸೀಲ್ದಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಕೋರಿದ್ದಾರೆ.

ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮ

ಭದ್ರಾವತಿಯಲ್ಲಿ ೧೧ ಸೋಂಕು : ೧ ಬಲಿ


ಭದ್ರಾವತಿ ನಗರಸಭೆ ವ್ಯಾಪ್ತಿಯ ಹಳೇ ಸೀಗೇಬಾಗಿ ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ಆರೋಗ್ಯ ಇಲಾಖೆ ವತಿಯಿಂದ ಕೋವಿಡ್ ಮೊದಲ ಡೋಸ್ ಲಸಿಕಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಭದ್ರಾವತಿ, ಜು. ೧೭: ನಗರಸಭೆ ವ್ಯಾಪ್ತಿಯ ಹಳೇ ಸೀಗೇಬಾಗಿ ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ಆರೋಗ್ಯ ಇಲಾಖೆ ವತಿಯಿಂದ ಕೋವಿಡ್ ಮೊದಲ ಡೋಸ್ ಲಸಿಕಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ವಿದ್ಯಾರ್ಥಿಗಳಿಗೆ, ಉಪನ್ಯಾಸಕ ವರ್ಗ ಹಾಗು ಸಿಬ್ಬಂದಿಗಳಿಗೆ ಲಸಿಕೆ ನೀಡಲಾಯಿತು. ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷೆ ಗಂಗಮ್ಮ, ಪ್ರಾಂಶುಪಾಲರು ಹಾಗು ಆರೋಗ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಭದ್ರಾವತಿಯಲ್ಲಿ ೧೧ ಸೋಂಕು, ೧ ಬಲಿ:
    ತಾಲೂಕಿನಲ್ಲಿ ಶನಿವಾರ ಒಟ್ಟು ೧೧ ಕೊರೋನಾ ಸೋಂಕು ಪತ್ತೆಯಾಗಿದ್ದು, ಈ ಪೈಕಿ ಗ್ರಾಮಾಂತರ ಭಾಗದಲ್ಲಿ ೮ ಹಾಗು ನಗರ ಭಾಗದಲ್ಲಿ ೩ ಸೋಂಕು ಒಳಗೊಂಡಿವೆ. ಉಳಿದಂತೆ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ.
ಜು.೧೮ರಂದು ಲಸಿಕಾ ಕಾರ್ಯಕ್ರಮ ನಡೆಯುವುದಿಲ್ಲ:
   ಆರೋಗ್ಯ ಇಲಾಖೆ ವತಿಯಿಂದ ತಾಲೂಕಿನಾದ್ಯಂತ ಹಮ್ಮಿಕೊಳ್ಳಲಾಗಿರುವ ಕೋವಿಡ್-೧೯ ಲಸಿಕಾ ಕಾರ್ಯಕ್ರಮ ಜು.೧೮ರಂದು ನಡೆಯುವುದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಕೋರಿದ್ದಾರೆ.



ನಿವೃತ್ತ ಮುಖ್ಯಪೇದೆ ಟಿ.ಟಿ ನಂಜಪ್ಪ ನಿಧನ

ಟಿ.ಟಿ ನಂಜಪ್ಪ
     ಭದ್ರಾವತಿ : ಹಳೇನಗರದ ದೊಡ್ಡಕುರುಬರ ಬೀದಿ ನಿವಾಸಿ, ನಿವೃತ್ತ ಮುಖ್ಯಪೇದೆ ಟಿ.ಟಿ. ನಂಜಪ್ಪ (ಟಿ.ಟಿ. ನಂಜೋಜಿರಾವ್ ನಲ್ವಡೆ) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.
    ಇಬ್ಬರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗು ಮರಿಮೊಮ್ಮಕ್ಕಳನ್ನು ಹೊಂದಿದ್ದರು. ೮೮ ವರ್ಷದ ವಯೋಮಾನದ ಟಿ.ಟಿ ನಂಜಪ್ಪ ಅವರು ಅನಾರೋಗ್ಯಕ್ಕೆ ಒಳಗಾದ ಹಿನ್ನಲೆಯಲ್ಲಿ ಶುಕ್ರವಾರ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
    ಹೊಳೆಹೊನ್ನೂರು ರಸ್ತೆಯ ಹಿಂದೂ ರುದ್ರಭೂಮಿಯಲ್ಲಿ ಇವರ ಅಂತ್ಯಕ್ರಿಯೆ ನೆರವೇರಿತು. ಕಳೆದ ಎರಡು ತಿಂಗಳ ಹಿಂದೆಯಷ್ಟೇ ಮೃತರ ಪತ್ನಿ ನಿಧನರಾಗಿದ್ದರು.
    ನಂಜಪ್ಪ ಭದ್ರಾವತಿ-ಶಿವಮೊಗ್ಗ ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇವರ ನಿಧನಕ್ಕೆ ನಗರದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕೇಂದ್ರ-ರಾಜ್ಯ ಸರ್ಕಾರಗಳಿಂದ ಜನವಿರೋಧಿ ನೀತಿ : ಕಾಂಗ್ರೆಸ್ ಆಕ್ರೋಶ

ಡೀಸೆಲ್, ಪೆಟ್ರೋಲ್ ಹಾಗು ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ


ಡೀಸೆಲ್, ಪೆಟ್ರೋಲ್ ಹಾಗು ಅಡುಗೆ ಅನಿಲ ಬೆಲೆ ಏರಿಕೆ ಹಾಗು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಶನಿವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
     ಭದ್ರಾವತಿ, ಜು. ೧೭: ಕೇಂದ್ರ ಹಾಗು ರಾಜ್ಯ ಬಿಜೆಪಿ ಸರ್ಕಾರಗಳು ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸದೆ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ. ಪ್ರಸ್ತುತ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆಂದು ಸ್ಥಳೀಯ ಕಾಂಗ್ರೆಸ್ ಮುಖಂಡರು ಆರೋಪಿಸಿದರು.
    ಡೀಸೆಲ್, ಪೆಟ್ರೋಲ್ ಹಾಗು ಅಡುಗೆ ಅನಿಲ ಬೆಲೆ ಏರಿಕೆ ಹಾಗು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಶನಿವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತಾಲೂಕು ಕಛೇರಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮುಖಂಡರು, ಡೀಸೆಲ್, ಪೆಟ್ರೋಲ್ ಹಾಗು ಅಡುಗೆ ಅನಿಲ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿದರು.
    ಕಾಂಗ್ರೆಸ್ ಪಕ್ಷ ಜನಸಾಮಾನ್ಯರ ಪಕ್ಷವಾಗಿದ್ದು, ಕೇಂದ್ರ ಹಾಗು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೈಗೊಂಡಿರುವ ಜನಪರ ಯೋಜನೆಗಳು ಇಂದಿಗೂ ಜನರ ಮನಸ್ಸಿನಲ್ಲಿ ಉಳಿದುಕೊಂಡಿವೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಆರ್ಥಿಕ ವ್ಯವಸ್ಥೆ ಕುಸಿದು ಬಿದ್ದಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೈಗೊಂಡಿರುವ ಜನಪರ ಯೋಜನೆಗಳನ್ನು ಮೊಟಕುಗೊಳಿಸಲಾಗಿದೆ. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ನೆಮ್ಮದಿಯಿಂದ ಬದುಕು ಸಾಗಿಸುವುದು ಅಸಾಧ್ಯವಾಗಿದೆ ಎಂದು ಆರೋಪಿಸಿದರು.
    ತಕ್ಷಣ ಬೆಲೆ ಏರಿಕೆ ನಿಯಂತ್ರಿಸಬೇಕು. ಜನವಿರೋಧಿ ನೀತಿಗಳನ್ನು ಕೈಬಿಡಬೇಕು. ಜನಸಾಮಾನ್ಯರು ನೆಮ್ಮದಿಯಿಂದ ಬದಕಲು ಅವಕಾಶ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಲಾಯಿತು.
    ನಗರಸಭಾ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳ ರಾಮಚಂದ್ರ, ಯುವ ಘಟಕದ ಅಧ್ಯಕ್ಷ ಜಿ. ವಿನೋದ್‌ಕುಮಾರ್, ನಗರಸಭಾ ಸದಸ್ಯರಾದ ಬಿ.ಟಿ ನಾಗರಾಜ್, ಮಣಿ ಎಎನ್‌ಎಸ್, ಕೆ. ಸುದೀಪ್‌ಕುಮಾರ್, ಕಾಂತರಾಜ್, ಜಾರ್ಜ್, ಬಷೀರ್ ಅಹಮದ್, ಚನ್ನಪ್ಪ, ಶೃತಿ ವಸಂತಕುಮಾರ್, ರಿಯಾಜ್ ಅಹಮದ್, ಬಿ.ಎಂ ಮಂಜುನಾಥ್, ಮುಖಂಡರಾದ ಬಾಲಕೃಷ್ಣ, ಗೋವಿಂದಸ್ವಾಮಿ, ಬಿ.ಎಸ್ ಗಣೇಶ್, ಬಿ.ಎಂ ರವಿಕುಮಾರ್, ಪ್ರಕಾಶ್‌ರಾವ್ ದುರೆ, ಎಂ. ಶಿವಕುಮಾರ್, ಎಸ್.ಎಸ್ ಭೈರಪ್ಪ, ಎಸ್. ಮಹಾದೇವ ಕೂಡ್ಲಿಗೆರೆ, ರಮೇಶ್‌ನಾಯ್ಕ, ಆಂಜನಪ್ಪ, ರಾಜ್‌ಕುಮಾರ್, ಕೆ. ಐಸಾಕ್ ಲಿಂಕನ್, ಎಂ. ರವಿಕುಮಾರ್, ಸುಮಿತ್ರಾ ಅಂಬೋರೆ, ಗೀತಾ, ವರಲಕ್ಷ್ಮೀ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.