Wednesday, August 18, 2021

ಜಾತಿ ವ್ಯವಸ್ಥೆ ವಿರುದ್ಧ ಹೋರಾಟ ನಿರಂತರವಾಗಿರಲಿ : ಎಂ. ಗುರುಮೂರ್ತಿ.

ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ಗ್ರಾಮದ ವಿಶ್ವ ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಗ್ರಾಮ ಶಾಖೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಉದ್ಘಾಟಿಸಿದರು.
     ಭದ್ರಾವತಿ, ಆ.೧೮: ದೇಶದಲ್ಲಿ ನೆಲೆಯೂರಿರುವ ಜಾತಿ ವ್ಯವಸ್ಥೆಯನ್ನು ಸುಲಭವಾಗಿ ಕಿತ್ತು ಹಾಕಲು ಸಾಧ್ಯವಿಲ್ಲ. ಇದರ ವಿರುದ್ಧ ನಿರಂತರ ಹೋರಾಟ ಅನಿವಾರ್ಯವಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಹೇಳಿದರು.
   ಅವರು ತಾಲೂಕಿನ ಅರಬಿಳಚಿ ಕ್ಯಾಂಪ್ ಗ್ರಾಮದ ವಿಶ್ವ ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಗ್ರಾಮ ಶಾಖೆ ಉದ್ಘಾಟಿಸಿ ಮಾತನಾಡಿದರು.
     ಜಾತಿ ವ್ಯವಸ್ಥೆ ಎಂಬುದು ಮಣ್ಣು, ಇಟ್ಟಿಗೆಗಳಿಂದ ಕಟ್ಟಿದ ಗೋಡೆಯಲ್ಲ ಅಥವಾ ಮುಳ್ಳುತಂತಿಗಳಿಂದ ನಿರ್ಮಿಸಿದ ಬೇಲಿಯೂ ಅಲ್ಲ. ಈ ಹಿನ್ನಲೆಯಲ್ಲಿ ಈ ವ್ಯವಸ್ಥೆಯನ್ನು ಕಿತ್ತು ಹಾಕುವುದು ಸುಲಭದ ಕೆಲಸವಲ್ಲ. ಈ ವ್ಯವಸ್ಥೆಯನ್ನು ರೂಪಿಸಿರುವವರ ಮನಸ್ಥಿತಿ ಬದಲಾಗಬೇಕಾಗಿದೆ. ದಲಿತರು ಸಹ ಸಮಾಜದ ಮುಖ್ಯ ವಾಹಿನಿಗೆ ಬರಬೇಕಾಗಿದೆ. ಅಲ್ಲದೆ ಈ ದೇಶದ ಅಧಿಕಾರದ ಚುಕ್ಕಾಣಿ ಹಿಡಿಯಬೇಕಾಗಿದೆ. ಈ ನಿಟ್ಟಿನಲ್ಲಿ ನಿರಂತರ ಹೋರಾಟ ನಡೆಸಬೇಕಾಗಿದೆ ಎಂದರು.  
     ಕಾರ್ಯಕ್ರಮ ಅಧ್ಯಕ್ಷತೆ ಮಧುಸೂಧನ್ ವಹಿಸಿದ್ದರು. ತಾಲೂಕು ಪಂಚಾಯಿತಿ ಸದಸ್ಯ  ಅಣ್ಣಾಮಲೈ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕಿರಣ್, ಸದಸ್ಯ ರಾಜಣ್ಯ, ಸಮಿತಿ ಜಿಲ್ಲಾ ಸಂಚಾಲಕ ಎ. ಅರ್ಜುನ್, ಜಿಲ್ಲಾ ಸಂಘಟನಾ ಸಂಚಾಲಕ ಎಂ. ಏಳುಕೋಟಿ, ಶಿವಬಸಪ್ಪ, ತಾಲೂಕು ಸಂಚಾಲಕ ರವಿನಾಯ್ಕ್, ಮುಖಂಡರಾದ ಬೊಮ್ಮನಕಟ್ಟೆ ಕೃಷ್ಣ, ಹೊಳೆಹೊನ್ನೂರು ಹರೀಶ್, ವೆಂಕಟೇಶ್, ತಮ್ಮಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ತಾಲೂಕು ಆಡಳಿತದಿಂದ ಕಡತ ವಿಲೇವಾರಿ ವಿಳಂಬ : ರೈತರ ಸಂಘದಿಂದ ಪ್ರತಿಭಟನೆ

ಭದ್ರಾವತಿ ತಾಲೂಕು ಕಛೇರಿ ಆಡಳಿತ ಕಡತ ವಿಲೇವಾರಿಯಲ್ಲಿ ವಿಳಂಬ ಮಾಡುತ್ತಿದ್ದು, ಇದರಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ತಕ್ಷಣ ಕ್ರಮ ಕೈಗೊಳ್ಳುವಂತೆ  ಆಗ್ರಹಿಸಿ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಆರ್. ಪ್ರದೀಪ್‌ಗೆ ಮನವಿ ಸಲ್ಲಿಸಲಾಯಿತು.
   ಭದ್ರಾವತಿ, ಆ. ೧೮: ತಾಲೂಕು ಕಛೇರಿ ಆಡಳಿತ ಕಡತ ವಿಲೇವಾರಿಯಲ್ಲಿ ವಿಳಂಬ ಮಾಡುತ್ತಿದ್ದು, ಇದರಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ತಕ್ಷಣ ಕ್ರಮ ಕೈಗೊಳ್ಳುವಂತೆ  ಆಗ್ರಹಿಸಿ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
   ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ ವೀರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಗ್ರಾಮಸ್ಥರು ಕಡತ ವಿಲೇವಾರಿಯಿಂದಾಗಿ ಗ್ರಾಮೀಣಾ ಭಾಗದ ರೈತರು ಹಾಗು ನಿವಾಸಿಗಳು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಅಲ್ಲದೆ ವಿಕಲಚೇತನ, ವೃದ್ಧಾಪ್ಯ ಹಾಗು ವಿಧವಾ ವೇತನ ಸಹ ವಿಳಂಬವಾಗುತ್ತಿದ್ದು, ವಿಕಲಚೇತನರು, ಮಹಿಳೆಯರು ಮತ್ತು ವೃದ್ಧರು ತಾಲೂಕು ಕಛೇರಿ ಅಲೆದಾಡುವಂತಾಗಿದೆ. ಕಛೇರಿಯಲ್ಲಿ ಅಧಿಕಾರಿಗಳನ್ನು ವಿಚಾರಿಸಿದರೆ ಪ್ರತಿ ಬಾರಿ ವಿದ್ಯುತ್ ಸಮಸ್ಯೆ ಇರುವುದಾಗಿ ಉತ್ತರ ನೀಡುತ್ತಾರೆ. ಅಲ್ಲದೆ ಕಛೇರಿಯಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
   ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಆರ್. ಪ್ರದೀಪ್, ಮನವಿ ಸ್ವೀಕರಿಸಿ ಕಡತ ವಿಲೇವಾರಿಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವುದಾಗಿ ಭರವಸೆ ನೀಡಿದರು.
    ಸಂಘದ ತಾಲೂಕು ಅಧ್ಯಕ್ಷ ಹಿರಿಯಣ್ಣಯ್ಯ, ಪ್ರಮುಖರಾದ ಶರತ್ಚಂದ್ರ, ರುದ್ರೇಶ್, ಹನುಮಂತಪ್ಪ, ಮಹಂತೇಶ್ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನ್ಯಾಯಾಲಯದ ಆದೇಶದಂತೆ ಹೆದ್ದಾರಿ ಪಕ್ಕದಲ್ಲಿರುವ ಮದ್ಯದಂಗಡಿಗಳನ್ನು ತೆರವುಗೊಳಿಸಿ

ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಪ್ರತಿಭಟನೆ ನಡೆಸಿ ಮನವಿ

   ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಹೆದ್ದಾರಿ ಪಕ್ಕದಲ್ಲಿರುವ ಮದ್ಯದಂಗಡಿಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಜನತಾದಳ (ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಬುಧವಾರ ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ಅಬಕಾರಿ ಇಲಾಖೆ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಅಬಕಾರಿ ಇನ್ಸ್‌ಪೆಕ್ಟರ್ ಸುನಿಲ್ ಕಲ್ಲಾಪುರ್ ಅವರಿಗೆ ಮನವಿ ಸಲ್ಲಿಸಿದರು.
   ಭದ್ರಾವತಿ, ಆ. ೧೮: ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಹೆದ್ದಾರಿ ಪಕ್ಕದಲ್ಲಿರುವ ಮದ್ಯದಂಗಡಿಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಜನತಾದಳ (ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಬುಧವಾರ ಹೊಸ ಸೇತುವೆ ರಸ್ತೆಯಲ್ಲಿರುವ ಅಬಕಾರಿ ಇಲಾಖೆ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಅಬಕಾರಿ ಇನ್ಸ್‌ಪೆಕ್ಟರ್ ಸುನಿಲ್ ಕಲ್ಲಾಪುರ್ ಅವರಿಗೆ ಮನವಿ ಸಲ್ಲಿಸಿದರು.
   ಸರ್ವೋಚ್ಛ ನ್ಯಾಯಾಲಯ ೨೦೧೬ರಲ್ಲಿ ಹೆದ್ದಾರಿ ಪಕ್ಕದ ೫೦೦ ಮೀಟರ್ ವ್ಯಾಪ್ತಿಯಲ್ಲಿರುವ ಮದ್ಯದಂಗಡಿಗಳನ್ನು ತೆರವುಗೊಳಿಸುವಂತೆ ಆದೇಶ ಹೊರಡಿಸಿದ್ದು, ಇದೀಗ ಪುನಃ ಇದೆ ಆದೇಶವನ್ನು ಹೊರಡಿಸಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ವಿಷಾದನೀಯ ಬೆಳವಣಿಗೆಯಾಗಿದೆ.
    ಹೆದ್ದಾರಿ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ೨೦೧೯ ರಿಂದ ಇಲ್ಲಿಯವರೆಗೂ ಸುಮಾರು ೪.೫ ಲಕ್ಷ ಅಪಘಾತಗಳು ನಡೆದಿದ್ದು,  ಈ ಪೈಕಿ ೧.೫ ಲಕ್ಷ ಜನರು ಮೃತಪಟ್ಟಿದ್ದಾರೆ.  ಮದ್ಯಪಾನ ಮಾಡಿ ವಾಹನ ಚಲಾಯಿಸಿ ಸುಮಾರು ೧ ಲಕ್ಷ ಜನರು ಮೃತಪಟ್ಟಿದ್ದಾರೆ. ಸುಮಾರು ೨ ಲಕ್ಷ ಜನರು ಅಂಗವೈಕಲ್ಯಕ್ಕೆ ಒಳಗಾಗಿದ್ದಾರೆ. ಈ ವಿಚಾರವನ್ನು ಅಬಕಾರಿ ಇಲಾಖೆ ಗಂಭೀರವಾಗಿ ಪರಿಗಣಿಸಿ ತಕ್ಷಣ ತಾಲೂಕಿನಾದ್ಯಂತ ಹೆದ್ದಾರಿ ಪಕ್ಕದಲ್ಲಿ ೫೦೦ ಮೀಟರ್ ವ್ಯಾಪ್ತಿಯಲ್ಲಿರುವ ಮದ್ಯದಂಗಡಿಗಳನ್ನು ತೆರವುಗೊಳಿಸಬೇಕು. ಇಲ್ಲವಾದಲ್ಲಿ ಸೆ.೧ರಿಂದ ನ್ಯಾಯ ಸಿಗುವವರೆಗೂ ಏಕಾಂಗಿಯಾಗಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿದರು.