Saturday, September 25, 2021

ರಾಜೀವ್‌ಗಾಂಧಿ ಮೆಮೆರಿಯಲ್ ಪ್ರೌಢಶಾಲೆಯಲ್ಲಿ ಪೋಷಣ್ ಅಭಿಯಾನ್

ಭದ್ರಾವತಿ, ಸೆ. ೨೫ : ನಗರಸಭೆ ವ್ಯಾಪ್ತಿಯ ಹಳೇಸೀಗೆಬಾಗಿ ರಾಜೀವ್‌ಗಾಂಧಿ ಮೆಮೊರಿಯಲ್ ಪ್ರೌಢಶಾಲೆಯಲ್ಲಿ ಶನಿವಾರ 'ಪೋಷಣ್  ಅಭಿಯಾನ್' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ 'ಪೋಷಣ್ ಅಭಿಯಾನ್' ಮಹತ್ವ ಕುರಿತು ವಿವರಿಸಲಾಯಿತು. ಪೋಷಕಾಂಶ, ಖನಿಜ ಲವಣಗಳು, ನಾರುಪದಾರ್ಥ ಸೇರಿದಂತೆ ಮನುಷ್ಯನ ಆರೋಗ್ಯಕ್ಕೆ ಪೂರಕವಾದ ಅಂಶಗಳನ್ನು ಹೊಂದಿರುವ ಬಗೆ ಬಗೆಯ ಸೊಪ್ಪು, ತರಕಾರಿ, ಹಣ್ಣುಗಳ ಪ್ರದರ್ಶನ ಏರ್ಪಡಿಸಲಾಗಿತ್ತು.
ಹೊಸಮನೆ ಭಾಗದ ಸಂಪನ್ಮೂಲ ವ್ಯಕ್ತಿ ಕೃಷ್ಣಮೂರ್ತಿ, ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಹನುಮಂತಪ್ಪ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಗಂಗಾಧರಪ್ಪ, ಎಚ್.ಎನ್ ಪವಾರ್,  ಎಸ್. ಶ್ರೀನಿವಾಸಪ್ಪ, ಶಿವಕುಮಾರ್, ಡಾ. ಶಕೀಲ್ ಮಹಮದ್, ಚಂದ್ರಪ್ಪ, ಶಿವಕುಮಾರ್, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಪಿ.ಎಸ್ ನಾಗಲಕ್ಷ್ಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಎಸ್  ನಿರ್ಮಲ, ಗೀತಾಬಾಯಿ, ಅಂಗನವಾಡಿ ಹಾಗು  ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ರಸ್ತೆ ಬದಿ ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ

ಭದ್ರಾವತಿ, ಸೆ. ೨೫:  ತಾಲೂಕಿನ ಕೂಡ್ಲಿಗೆರೆ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಶ್ರೀ ಸುಬ್ರಮಣ್ಯಸ್ವಾಮಿ ದೇವಸ್ಥಾನದ ಬಳಿ ಭದ್ರಾವತಿ ಕಡೆಯಿಂದ ಚನ್ನಗಿರಿ ಮಾರ್ಗವಾಗಿ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದು ಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.  
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನ ಚಾಲಕ ಸೀಟ್‌ಬೆಲ್ಟ್ ಧರಿಸಿದ್ದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ಸ್ಥಳೀಯರು ಜಮಾಸಿದ್ದು, ಘಟನೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಲಿತ ಮುಖಂಡ ಕೆ. ರಂಗನಾಥ್, ಲೋಕೋಪಯೋಗಿ ಇಲಾಖೆಗೆ ಸೇರಿದ ಸ್ಥಳದಲ್ಲಿ ಯಾವುದೇ ಅನುಮತಿ ಇಲ್ಲದೆ ವಿದ್ಯುತ್ ಕಂಬಗಳನ್ನು ಅಳವಡಿಸಿರುವುದು ಅಪಘಾತಕ್ಕೆ ಕಾರಣವಾಗಿದೆ. ತಕ್ಷಣ ಸಂಬಂಧಪಟ್ಟ ಇಲಾಖೆಯವರು ಎಚ್ಚೆತ್ತುಕೊಂಡು ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಿ ಸಾರ್ವಜನಿಕರು, ಶಾಲಾ ಮಕ್ಕಳು ಮತ್ತು ವಾಹನಗಳ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಒತ್ತಾಯಿಸಿದ್ದಾರೆ.  


ಸೆ.೨೭ರಂದು ಭಾರತ್ ಬಂದ್‌ಗೆ ಬಂಬಲ : ಬೃಹತ್ ಪ್ರತಿಭಟನಾ ಮೆರವಣಿಗೆ

    ಭದ್ರಾವತಿ, ಸೆ. ೨೫: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ, ದಲಿತ, ಕಾರ್ಮಿಕ ಹಾಗು ಜನ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಸೆ.೨೭ರಂದು ಕರೆ ನೀಡಲಾಗಿರುವ ಭರತ್ ಬಂದ್‌ಗೆ ಸಂಯುಕ್ತ ಕಿಸಾನ್ ಮೋರ್ಚಾ ತಾಲೂಕು ಬೆಂಬಲ ವ್ಯಕ್ತಪಡಿಸಿದೆ.
    ರೈತ, ದಲಿತ, ಕಾರ್ಮಿಕ, ಮಹಿಳಾ, ಕನ್ನಡಪರ ಹಾಗು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಅಂದು ಬೆಳಿಗೆ ೧೦.೩೦ಕ್ಕೆ ನಗರದ ಬಿ.ಎಚ್ ರಸ್ತೆ ಅಂಡ್‌ಬ್ರಿಡ್ಜ್ ಬಳಿ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ತಾಲೂಕು ಕಛೇರಿ ವರೆಗೂ ಹಮ್ಮಿಕೊಳ್ಳಲಾಗಿದೆ.
ಸಮಸ್ತ ನಾಗರೀಕರು ಪ್ರತಿಭಟನಾ ಮೆರವಣಿಗೆ ಬೆಂಬಲಿಸುವ ಮೂಲಕ ಯಶಸ್ವಿಗೊಳಿಸುವಂತೆ ರೈತ  ಮುಖಂಡರಾದ ಯಶವಂತರಾವ್ ಘೋರ್ಪಡೆ, ಎಚ್.ಪಿ ಹಿರಿಯಣ್ಣಯ್ಯ ಮತ್ತು ಡಿ.ವಿ ವೀರೇಶ್ ಕೋರಿದ್ದಾರೆ.
        ರೈತ ಹೋರಾಟಕ್ಕೆ ಎಎಪಿ ಬೆಂಬಲ:
    ಕೇಂದ್ರ ಸರ್ಕಾರದ ರೈತವಿರೋಧಿ ಮಸೂದೆಗಳನ್ನು ಖಂಡಿಸಿ ವಿವಿಧ ರೈತ ಸಂಘಟನೆಗಳು ಕರೆ ನೀಡಿರುವ ಸೆ. ೨೭ರ ಹೋರಾಟಕ್ಕೆ  ಆಮ್ ಆದ್ಮಿ ಪಾರ್ಟಿ ಬೆಂಬಲ ನೀಡಲಿದೆ ಎಂದು ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ತಿಳಿಸಿದ್ದಾರೆ.
    ಕೇಂದ್ರ ಸರ್ಕಾರ ಕೃಷಿಗೆ ಸಂಬಂಧಿಸಿದ ಮಸೂದೆಗಳಿಗೆ ತಿದ್ದುಪಡಿ ತಂದು ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿರುವುದನ್ನು ಖಂಡಿಸಿ ನಡೆಯುತ್ತಿರುವ ಹೋರಾಟಕ್ಕೆ ಎಎಪಿ ಸಂಪೂರ್ಣ ಬೆಂಬಲ ನೀಡಲಿದ್ದು, ಜಿಲ್ಲಾ ಹಾಗು ತಾಲೂಕು ಮಟ್ಟದಲ್ಲಿ ನಡೆಯುವ ಹೋರಾಟಕ್ಕೆ ಎಎಪಿ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟ ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.

ಡಾ. ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ನಿಧನಕ್ಕೆ ಸಂತಾಪ

ಡಾ. ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ    
ಭದ್ರಾವತಿ, ಸೆ. ೨೫: ಕುಪ್ಪೂರು ಗದ್ದಿಗೆ ಮಠದ ಡಾ. ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿಯವರ ನಿಧನಕ್ಕೆ ತಾಲೂಕಿನ ಜೇಡಿಕಟ್ಟೆ ಶ್ರೀ ಮರುಳ ಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ ಸಂತಾಪ ಸೂಚಿಸಿದ್ದಾರೆ.
    ಶ್ರೀಗಳು ರಾಜ್ಯಾದ್ಯಂತ ಹೆಚ್ಚಿನ ಭಕ್ತರನ್ನು ಹೊಂದಿದ್ದು, ಕುಪ್ಪೂರು ಗದ್ದಿಗೆ ಮಠದ ಅಭಿವೃದ್ಧಿಯಲ್ಲಿ ಹೆಚ್ಚಿನ ಗಮನ ಹರಿಸುವ ಜೊತೆಗೆ ಆಧ್ಯಾತ್ಮಿಕ ಕಾರ್ಯಗಳಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿದ್ದರು. ಶ್ರೀಗಳು ಲಿಂಗೈಕ್ಯರಾಗಿರುವುದು ಭಕ್ತ ಸಮೂಹಕ್ಕೆ ನೋವುಂಟು ಮಾಡಿದೆ ಎಂದು ಸಂತಾಪ ಸೂಚಿಸಿದ್ದಾರೆ.

ಕೊಮಾರನಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ಸಾಂದರ್ಭಿಕ ಚಿತ್ರ
    ಭದ್ರಾವತಿ, ಸೆ. ೨೫: ತಾಲೂಕಿನ ಕೊಮಾರನಹಳ್ಳಿ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಎದುರಾಗಿದೆ.
    ಕೊಮಾರನಹಳ್ಳಿ ಗ್ರಾಮದ ಸುತ್ತಮುತ್ತ ಚಿರತೆ ಬಂದು ಹೋಗಿರುವ ಮಾಹಿತಿಗಳಿದ್ದು, ಗ್ರಾಮದಲ್ಲಿ ನಾಯಿಗಳನ್ನು ಭೇಟೆಯಾಡಿರುವುದು ಗ್ರಾಮಸ್ಥರಿಗೆ ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಆತಂಕ ಎದುರಾಗಿದೆ. ಮಾಹಿತಿ ತಿಳಿದ ತಕ್ಷಣ ಶುಕ್ರವಾರ ರಾತ್ರಿಯೇ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿರುವ ವಲಯ ಅರಣ್ಯಾಧಿಕಾರಿ ಮಂಜುನಾಥ್, ಕಾಡಂಚಿನ ಗ್ರಾಮವಾಗಿರುವ ಹಿನ್ನಲೆಯಲ್ಲಿ ಚಿರತೆ ಸೇರಿದಂತೆ ಕಾಡು ಪ್ರಾಣಿಗಳು ಬಂದು ಹೋಗುವುದು ಸಹಜವಾಗಿದ್ದು, ಈ ಭಾಗದಲ್ಲಿ ಸಿಬ್ಬಂದಿಗಳು ಪ್ರತಿದಿನ ರಾತ್ರಿ ವೇಳೆ ಗಸ್ತು ತಿರುಗುತ್ತಾರೆ. ಮುನ್ನಚ್ಚರಿಕೆ ಕ್ರಮವಾಗಿ ಕೊಮಾರನಹಳ್ಳಿ ಗ್ರಾಮಕ್ಕೆ ಬೆಳಿಗ್ಗೆ ಸಹ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಂದು ವೇಳೆ ಚಿರತೆ ಹಾವಳಿ ಹೆಚ್ಚಾದ್ದಲ್ಲಿ ಹಿಡಿಯಲು ಬೋನ್ ಅಳವಡಿಸಲಾಗುವುದು ಎಂದರು.