Sunday, October 31, 2021

ತಾಲೂಕು ಆಡಳಿತದಿಂದ ಕನ್ನಡ ರಾಜ್ಯೋತ್ಸವ


    ಭದ್ರಾವತಿ, ಅ. ೩೧: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನ.೧ರಂದು ಹಳೇನಗರದ ಕನಕಮಂಟಪ ಮೈದಾನದಲ್ಲಿ ೬೬ನೇ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ.
    ಬೆಳಿಗ್ಗೆ ೮ ಗಂಟೆಗೆ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಅಂಬೇಡ್ಕರ್ ವೃತ್ತದಿಂದ ಕನಕ ಮಂಟಪ ಮೈದಾನದವರೆಗೂ ತಾಯಿ ಶ್ರೀ ಭುವನೇಶ್ವರಿ ದೇವಿ ಮೆರವಣಿಗೆ ಹಾಗು ೯ ಗಂಟೆಗೆ ಧ್ವಜಾರೋಹಣ ನಡೆಯಲಿದೆ.
    ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ ಅಶೋಕ್‌ನಾಯ್ಕ್ ಮೆರವಣಿಗೆಗೆ ಚಾಲನೆ ನೀಡಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ವೇದಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
    ಸಚಿವ ಕೆ.ಎಸ್ ಈಶ್ವರಪ್ಪ, ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಸಿ.ಎಂ. ಇಬ್ರಾಹಿಂ, ಆರ್. ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಎಸ್. ರುದ್ರೇಗೌಡ, ಭಾರತಿಶೆಟ್ಟಿ, ಎಪಿಎಂಸಿ ಅಧ್ಯಕ್ಷ ಲವೇಶ್‌ಗೌಡ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅಪೇಕ್ಷ ಮಂಜುನಾಥ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ತಹಸೀಲ್ದಾರ್ ಆರ್. ಪ್ರದೀಪ್, ಪೊಲೀಸ್ ಉಪಾಧೀಕ್ಷಕ ಸಾಹಿಲ್ ಬಾಗ್ಲ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ ಗಾಮನಘಟ್ಟಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚುಂಚಾದ್ರಿ ಮಹಿಳಾ ವೇದಿಕೆ ಸರ್ವ ಸದಸ್ಯರ ಸಭೆ, ಕನ್ನಡ ರಾಜ್ಯೋತ್ಸವ

    ಭದ್ರಾವತಿ, ಅ. ೩೧: ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ನ.೧ರಂದು ಬೆಳಿಗ್ಗೆ ೧೦.೩೦ಕ್ಕೆ ಅಪ್ಪರ್ ಹುತ್ತಾದಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ಸರ್ವ ಸದಸ್ಯೆಯರ ಮಹಾಸಭೆ ಹಾಗು ೬೬ನೇ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ.
    ಸಂಘದ ಗೌರವಾಧ್ಯಕ್ಷೆ ಡಾ. ಅನುರಾಧ ಪಟೇಲ್ ಸಭೆ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಸಂಘದ ಉಪಾಧ್ಯಕ್ಷೆ ಎಂ.ಬಿ ಸುಮ ಚಂದ್ರಶೇಖರ್, ಕಾರ್ಯದರ್ಶಿ ಲತಾ ಪ್ರಭಾಕರ್, ಸಹ ಕಾರ್ಯದರ್ಶಿ ನಳಿನ ಶ್ರೀನಿವಾಸ್ ಮತ್ತು ಖಜಾಂಚಿ ಶಶಿಕಲಾ ಸೀತರಾಂ ಉಪಸ್ಥಿತರಿರುವರು.
    ಸಂಘದ  ಅಧ್ಯಕ್ಷೆ ಎಂ.ಎಸ್ ಸುಧಾಮಣಿ ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದು, ಸದಸ್ಯೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.  

ಬಂಡವಾಳಶಾಹಿಗಳಿಗೆ ಮಣೆ ಹಾಕಿರುವ ಕೇಂದ್ರ ಸರ್ಕಾರ : ಡಾ.ಕೆ ಪ್ರಕಾಶ್ ಆರೋಪ

ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್‌ನಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಭಾರತ ಕಮ್ಯುನಿಸ್ಟ್ ಪಕ್ಷದ ೨೩ನೇ ಜಿಲ್ಲಾ ಸಮ್ಮೇಳನವನ್ನು ರಾಜ್ಯ ಸಮಿತಿ ಸದಸ್ಯ ಡಾ. ಕೆ. ಪ್ರಕಾಶ್ ಉದ್ಘಾಟಿಸಿ ಮಾತನಾಡಿದರು.
    ಭದ್ರಾವತಿ, ಅ. ೩೧: ಕೇಂದ್ರ ಸರ್ಕಾರ ದೇಶದಲ್ಲಿ ಬಂಡವಾಳಶಾಹಿಗಳಿಗೆ ಮಣೆ ಹಾಕುವ ಮೂಲಕ  ಶ್ರೀಸಾಮಾನ್ಯರ ಬಗೆಗಿನ ಕಾಳಜಿಯಿಂದ ವಿಮುಖವಾಗುತ್ತಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ರಾಜ್ಯ ಸಮಿತಿ ಸದಸ್ಯ ಡಾ. ಕೆ. ಪ್ರಕಾಶ್ ಆರೋಪಿಸಿದರು.
    ಅವರು ಭಾನುವಾರ ನಗರದ ನ್ಯೂಟೌನ್ ಲಯನ್ಸ್ ಕ್ಲಬ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತ ಕಮ್ಯುನಿಸ್ಟ್ ಪಕ್ಷದ ೨೩ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
    ಕಳೆದ ೨ ವರ್ಷಗಳಿಂದ ಮಹಾಮಾರಿ ಕೋವಿಡ್-೧೯ರ ಪರಿಣಾಮ ಪ್ರಪಂಚದಾದ್ಯಂತ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಸೇರಿದಂತೆ ಶ್ರೀಸಾಮಾನ್ಯರಿಗೆ ಅಗತ್ಯವಿರುವ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಈಗಲೂ ತೆರಿಗೆ ಪ್ರಮಾಣ ಇಳಿಸಿ ಶ್ರೀಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಚಿಂತಿಸದೆ ಬಂಡವಾಳಶಾಹಿಗಳ ಪರವಾಗಿ ನಡೆದುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ದೇಶದಲ್ಲಿ ಬಂಡವಾಳಶಾಹಿಗಳಿಗೆ ಮಣೆಹಾಕುತ್ತಿರುವ ಪರಿಣಾಮ ಎಲ್ಲಾ ಕ್ಷೇತ್ರಗಳು ಬಂಡವಾಳಶಾಹಿಗಳ ಹಿಡಿತಕ್ಕೆ ಒಳಗಾಗುತ್ತಿವೆ. ಹಂತ ಹಂತವಾಗಿ ಬಂಡವಾಳಶಾಹಿಗಳು ತಮ್ಮ ಪ್ರಾಬಲ್ಯ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ದೇಶದಲ್ಲಿ ಶ್ರೀಸಾಮಾನ್ಯರು ಹಲವು ರೀತಿಯ ಸಂಕಷ್ಟಗಳನ್ನು ಎದುರಿಸುವಂತಾಗಿದೆ ಎಂದರು. ಪ್ರಸ್ತುತ ಕೋವಿಡ್ ಲಸಿಕೆ ನೀಡುವ ವಿಚಾರದಲ್ಲೂ ಕೇಂದ್ರ ಸರ್ಕಾರ ನಿರ್ಲಕ್ಷ್ಯತನ ವಹಿಸುತ್ತಿದೆ. ದೇಶದಲ್ಲಿ ಎಲ್ಲರಿಗೂ ೧ ಮತ್ತು ೨ನೇ ಡೋಸ್ ಲಸಿಕೆ ನೀಡುವುದು ಅನಿವಾರ್ಯವಾಗಿದೆ. ಆದರೆ ಇದೀಗ ನಿಗದಿತ ಸಮಯದಲ್ಲಿ ಅಗತ್ಯವಿರುವಷ್ಟು ಲಸಿಕೆ ಒದಗಿಸಿಟ್ಟುಕೊಳ್ಳುವಲ್ಲಿ ಹಿನ್ನಡೆ ಅನುಭವಿಸುತ್ತಿದೆ ಎಂದು ಆರೋಪಿಸಿದರು.
    ಜಿಲ್ಲಾ ಸಮಿತಿ ಸದಸ್ಯ, ನ್ಯಾಯವಾದಿ ಜಿ.ಎಸ್ ನಾಗರಾಜ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಮಿತಿ ಕಾರ್ಯರ್ಶಿ ಎಂ. ನಾರಾಯಣ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಿಲ್ಲಾ ಸಮಿತಿ ಸದಸ್ಯ ಅನಂತರಾಮು ಸ್ವಾಗತಿಸಿದರು.
    ಸಿಪಿಐ(ಎಂ) ಜಿಲ್ಲಾ ಸಮಿತಿ ಸದಸ್ಯರಾದ ಕೆ. ಪ್ರಭಾಕರನ್ ಮತ್ತು ಕೆ. ಮಂಜಣ್ಣ,  ಬಿಸಿಯೂಟ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಮ್ಮ, ಅಂಗನವಾಡಿ ನೌಕರರ ಸಂಘದ ತಾಲೂಕು ಅಧ್ಯಕ್ಷೆ ತುಳಸಿ ಪ್ರಭಾ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿರಿತರಿದ್ದರು.