ಭದ್ರಾವತಿ ಸಿ.ಎನ್ ರಸ್ತೆಯಲ್ಲಿ ದೇಶ ಪ್ರೇಮಿ ಟಿಪ್ಪು ಸುಲ್ತಾನ್ ಯುವಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆ ಅಂಗವಾಗಿ ಪ್ರತಿವರ್ಷದಂತೆ ಈ ಬಾರಿ ಸಹ ಬಡ ಮಹಿಳೆಯರಿಗೆ ಸೀರೆ ವಿತರಿಸಲಾಯಿತು.
ಭದ್ರಾವತಿ, ನ. ೧೦: ಟಿಪ್ಪು ಸುಲ್ತಾನ್ ತನ್ನ ಸಾಮ್ರಾಜ್ಯದಲ್ಲಿ ಸಮಾನತೆ ಪ್ರತಿಪಾದಿಸುವ ಜೊತೆಗೆ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ಮಹಾನ್ ವ್ಯಕ್ತಿಯಾಗಿದ್ದು, ಸ್ವಾರ್ಥ ರಾಜಕಾರಣಕ್ಕಾಗಿ ಕೆಲವರು ಟಿಪ್ಪು ಸುಲ್ತಾನ್‌ನನ್ನು ದೇಶ ದ್ರೋಹಿ ಎನ್ನುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ನಿವೃತ್ತ ಪ್ರಾಂಶುಪಾಲ ಶಿವಬಸಪ್ಪ ಹೇಳಿದರು.
ಅವರು ಬುಧವಾರ ನಗರದ ಸಿ.ಎನ್ ರಸ್ತೆಯಲ್ಲಿ ದೇಶ ಪ್ರೇಮಿ ಟಿಪ್ಪು ಸುಲ್ತಾನ್ ಯುವಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆ ಅಂಗವಾಗಿ ಪ್ರತಿವರ್ಷದಂತೆ ಈ ಬಾರಿ ಸಹ ಬಡ ಮಹಿಳೆಯರಿಗೆ ಸೀರೆ ಹಾಗು ಸಿದ್ದಾರ್ಥ ಅಂಧರ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಮಾಜದಲ್ಲಿ ದಲಿತರು, ಶೋಷಿತರು ಹಾಗು ಮಹಿಳೆಯರಿಗೂ ಸಮಾನ ಅವಕಾಶ ಕಲ್ಪಿಸಿಕೊಡುವ ಜೊತೆಗೆ ಧರ್ಮ, ಜಾತಿ ರಹಿತ, ಕಂದಚಾರ, ಮೂಡನಂಬಿಕೆಗಳಿಂದ ಮುಕ್ತವಾದ ಆಡಳಿತ ವ್ಯವಸ್ಥೆಯನ್ನು ತನ್ನ ಅವಧಿಯಲ್ಲಿ ರೂಪಿಸಿಕೊಂಡಿದ್ದನು. ಅಲ್ಲದೆ ಹಲವಾರು ನೀರಾವರಿ ಯೋಜನೆಗಳನ್ನು ಜಾರಿಗೆ ತಂದಿದ್ದನು. ಉಳುವವನೇ ಭೂಮಿಯ ಒಡೆಯ ಎಂಬ ಕಾಯ್ದೆಯನ್ನು ಅಂದಿನ ಕಾಲದಲ್ಲಿಯೇ ಜಾರಿಗೊಳಿಸಿದ್ದನು ಎಂದರು.
ಹರಿದು ಹಂಚಿಹೋಗಿದ್ದ ಕನ್ನಡ ನಾಡನ್ನು ಒಂದು ಗೂಡಿಸುವ ಜೊತೆಗೆ ಬ್ರಿಟಿಷರ ವಿರುದ್ಧ ಹೋರಾಟಕ್ಕೆ ಮುನ್ನುಡಿ ಬರೆದಿದ್ದನು. ಟಿಪ್ಪು ಆಡಳಿತ ವ್ಯವಸ್ಥೆಯ ಮಾದರಿಯನ್ನು ಇಂದಿಗೂ ಕಾಣಬಹುದಾಗಿದೆ. ಸ್ವಾರ್ಥ ರಾಜಕಾರಣಕ್ಕಾಗಿ ಇಂತಹ ಮಹಾನ್ ವ್ಯಕ್ತಿಯ ಕುರಿತು ಸಮಾಜಕ್ಕೆ ತಪ್ಪು ಸಂದೇಶಗಳನ್ನು ನೀಡುತ್ತಿರುವುದು ವಿಷಾದನೀಯ ಬೆಳವಣಿಗೆಯಾಗಿದೆ ಎಂದರು.
ನಗರಸಭೆ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ಟಿಪ್ಪು ಸುಲ್ತಾನ್ ಓರ್ವ ಸಮರ್ಥ ಆಡಳಿತಗಾರ, ಈತನ ನಿಸ್ವಾರ್ಥ ಸೇವೆ, ಜಾತಿ ಬೇಧಭಾವವಿಲ್ಲದೆ ನಡೆಸಿದ ಆಡಳಿತವನ್ನು ಸಹಿಸದ ಕೆಲವರು ದೇಶದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ಇದು ಸಮಾಜದಲ್ಲಿ ಒಳ್ಳೆಯ ಬೆಳವಣಿಗೆಯಲ್ಲ ಎಂದರು.
ಪ್ರಮುಖರಾದ ಮುರ್ತುಜಾಖಾನ್, ಸಿ.ಎಂ ಖಾದರ್, ಜಹೀರ್‌ಜಾನ್, ಇಮ್ರಾನ್, ರಿಯಾಜ್, ಅಸುದಲ್ಲಾ ಖಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ ಸಿ.ಎನ್ ರಸ್ತೆಯಲ್ಲಿ ದೇಶ ಪ್ರೇಮಿ ಟಿಪ್ಪು ಸುಲ್ತಾನ್ ಯುವಕರ ಸಂಘದ ವತಿಯಿಂದ ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆ ಅಂಗವಾಗಿ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಿಸಲಾಯಿತು.