ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಕುಟುಂಬದ ವಾರ್ಷಿಕ ಕ್ರೀಡಾಕೂಟದ ಕಾರ್ಯಕ್ರಮವನ್ನು ತಹಸೀಲ್ದಾರ್ ಆರ್. ಪ್ರದೀಪ್, ಪೊಲೀಸ್ ಉಪ ಅಧೀಕ್ಷಕರಾದ ಜಿತೇಂದ್ರಕುಮಾರ್ ದಯಾಮ, ಗಜಾನನ ಸುತಾರಾ ಸೇರಿದಂತೆ ಇನ್ನಿತರರು ಪಾರಿವಾಳ ಹಾರಿ ಬಿಡುವ ಮೂಲಕ ಉದ್ಘಾಟಿಸಿದರು.
ಭದ್ರಾವತಿ, ಜ. ೨: ಅತಿಸೂಕ್ಷ್ಮ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು ದಿನದ ೨೪ ಗಂಟೆ ಸಹ ಎಚ್ಚರಿಕೆ ವಹಿಸಬೇಕಾಗಿದೆ. ಇದರಿಂದಾಗಿ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ. ಅದರೂ ಸಹ ಅಲ್ಪಸ್ವಲ್ಪ ಬಿಡುವಿನಲ್ಲಿ ಕುಟುಂಬದ ಸದಸ್ಯರ ಬಗ್ಗೆ ಕಾಳಜಿವಹಿಸುವ ಮೂಲಕ ಕುಟುಂಬದಲ್ಲೂ ನೆಮ್ಮದಿ ವಾತಾವರಣ ರೂಪಿಸಿಕೊಳ್ಳಬೇಕಾಗಿದೆ ಎಂದು ತಹಸೀಲ್ದಾರ್ ಆರ್. ಪ್ರದೀಪ್ ಹೇಳಿದರು.
ಅವರು ಭಾನುವಾರ ನಗರದ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಕುಟುಂಬದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ಇತರೆ ಇಲಾಖೆಗಳಿಗೆ ಹೋಲಿಸಿದ್ದಲ್ಲಿ ಪೊಲೀಸ್ ಇಲಾಖೆಯವರು ಹೆಚ್ಚಿನ ಸಮಯ ಕರ್ತವ್ಯಕ್ಕೆ ಮೀಸಲಿಡಬೇಕಾಗಿದೆ. ಅದರಲ್ಲೂ ಭದ್ರಾವತಿ ಕ್ಷೇತ್ರದಂತಹ ಸೂಕ್ಷ್ಮ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು ಹೆಚ್ಚಿನ ಒತ್ತಡಕ್ಕೆ ಒಳಗಾಗುವಂತಾಗಿದೆ. ಇಲ್ಲಿನ ರಾಜಕೀಯ ಹಾಗು ಸಾಮಾಜಿಕ ವ್ಯವಸ್ಥೆಗಳಿಗೆ ಹೊಂದಿಕೊಂಡು ಹೋಗಬೇಕಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕುಟುಂಬ ಸದಸ್ಯರೊಂದಿಗೆ ನೆಮ್ಮದಿಯಿಂದ ಕಾಲ ಕಳೆಯಲು ಸಾಧ್ಯವಾಗದಿರುವುದು ವಿಪರ್ಯಾಸದ ಸಂಗತಿಯಾಗಿದೆ. ಅದರಲ್ಲೂ ಕಳೆದ ೨ ವರ್ಷಗಳಿಂದ ಕೋವಿಡ್-೧೯ ಮಹಾಮಾರಿ ಪರಿಣಾಮ ಕುಟುಂಬ ಸದಸ್ಯರ ಜೊತೆ ಮತ್ತಷ್ಟು ದೂರ ಉಳಿಯುವಂತಾಗಿದೆ. ಇದೀಗ ಕ್ರೀಡಾಕೂಟ ಆಯೋಜನೆ ಮೂಲಕ ಎಲ್ಲರೂ ಒಂದೆಡೆ ಸೇರಿ ಸಂಭ್ರಮಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಕುಟುಂಬ ಸದಸ್ಯರು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದರು.
ಐಪಿಎಸ್ ಅಧಿಕಾರಿ ಉಪವಿಭಾಗದ ಪೊಲೀಸ್ ಉಪ ಅಧೀಕ್ಷಕ ಜಿತೇಂದ್ರಕುಮಾರ್ ದಯಾಮಾ ಅಧ್ಯಕ್ಷತೆ ವಹಿಸಿದ್ದರು. ಪ್ರೊಫೆಷನರಿ ಐಪಿಎಸ್ ಅಧಿಕಾರಿ ಗಜಾನನ ಸುತಾರಾ, ಹೊಳೆಹೊನ್ನೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಲಕ್ಷ್ಮೀಪತಿ, ಗ್ರಾಮಾಂತರ ವೃತ್ತ ನಿರೀಕ್ಷಕ ಚೈತನ್ಯ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಗದ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಇ.ಓ ಮಂಜುನಾಥ್ ಸ್ವಾಗತಿಸಿದರು. ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ವಂದಿಸಿದರು. ದೈಹಿಕ ಶಿಕ್ಷಕ ಶಿವಲಿಂಗೇಗೌಡ ಕಾರ್ಯಕ್ರಮ ನಿರೂಪಿಸಿದರು.
ದೈಹಿಕ ಶಿಕ್ಷಕರಾದ ಕರಣ್‌ಸಿಂಗ್, ರೇವತಿ ಮತ್ತು ಅಂತೋಣಿ ತೀರ್ಪುಗಾರರಾಗಿ ಪಾಲ್ಗೊಂಡಿದ್ದರು. ಕ್ರೀಡಾ ಪ್ರತಿಜ್ಞೆ ಬೋಧಿಸಲಾಯಿತು.
ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಕುಟುಂಬದ ವಾರ್ಷಿಕ ಕ್ರೀಡಾಕೂಟಕ್ಕೆ ತಹಸೀಲ್ದಾರ್ ಆರ್. ಪ್ರದೀಪ್ ಗುಂಡು ಎಸೆಯುವ ಮೂಲಕ ಚಾಲನೆ ನೀಡಿದರು.
No comments:
Post a Comment