ಆರೋಗ್ಯ ಇಲಾಖೆ ವತಿಯಿಂದ ಶಿಕ್ಷಣ ಇಲಾಖೆ ಸಹಕಾರದೊಂದಿಗೆ ಭದ್ರಾವತಿ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ೧೫ ರಿಂದ ೧೮ ವರ್ಷದೊಳಗಿನ ಮಕ್ಕಳಿಗೆ ಕೋವಿಡ್-೧೯ ಲಸಿಕೆ ಕಾರ್ಯಕ್ರಮಕ್ಕೆ ಸೋಮವಾರ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.
ಭದ್ರಾವತಿ, ಜ. ೩: ಕೋವಿಡ್-೧೯ ಲಸಿಕೆಯಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಉಂಟಾಗುವುದಿಲ್ಲ. ಮಕ್ಕಳು ಯಾವುದೇ ಭಯವಿಲ್ಲದೆ ಕಡ್ಡಾಯವಾಗಿ ಲಸಿಕೆಯನ್ನು ಪಡೆಯಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದರು.
ಅವರು ಸೋಮವಾರ ಆರೋಗ್ಯ ಇಲಾಖೆ ವತಿಯಿಂದ ಶಿಕ್ಷಣ ಇಲಾಖೆ ಸಹಕಾರದೊಂದಿಗೆ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ೧೫ ರಿಂದ ೧೮ ವರ್ಷದೊಳಗಿನ ಮಕ್ಕಳಿಗೆ ಕೋವಿಡ್-೧೯ ಲಸಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರಿಗೂ ಆರೋಗ್ಯವೇ ಮುಖ್ಯ. ಎಲ್ಲರೂ ತಮ್ಮ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕೆಲವರು ಕೋವಿಡ್ ಲಸಿಕೆ ಕುರಿತು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದು, ಇವುಗಳಿಗೆ ಮಕ್ಕಳು ಕಿವಿ ಕೊಡಬಾರದು. ದೇಶದಲ್ಲಿ ಕೋಟ್ಯಾಂತರ ಜನರು ಲಸಿಕೆ ಪಡೆದುಕೊಂಡಿದ್ದಾರೆ. ಬಹುತೇಕ ಜನರು ಲಸಿಕೆ ಪಡೆದುಕೊಂಡಿರುವ ಪರಿಣಾಮ ಸೋಂಕಿನ ಪರಿಣಾಮ ಇಳಿಮುಖವಾಗಿದೆ. ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡು ಮಕ್ಕಳು ಲಸಿಕೆ ಪಡೆದುಕೊಳ್ಳಬೇಕೆಂದರು.
ತಹಸೀಲ್ದಾರ್ ಆರ್. ಪ್ರದೀಪ್, ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಸದಸ್ಯೆ ಶಶಿಕಲಾ ನಾರಾಯಣಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವೆಂಕಟರಮಣಶೇಟ್, ಪ್ರಾಂಶುಪಾಲ ಸಿದ್ದಲಿಂಗಮೂರ್ತಿ, ಉಪ ಪ್ರಾಂಶುಪಾಲರಾದ ಶಾಂತಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ ಹಾಗು ಆರೋಗ್ಯ ಇಲಾಖೆಯ ಆರೋಗ್ಯ ಶಿಕ್ಷಣಾಧಿಕಾರಿ ರಾಜೇಗೌಡ, ಹಿರಿಯ ಆರೋಗ್ಯ ಸಹಾಯಕರಾದ ರೇವತಿ, ಆನಂದಮೂರ್ತಿ, ಸಿಬ್ಬಂದಿಗಳಾದ ವಸಂತ, ಗ್ರೇಸಿಯಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನೆಹರುನಗರ ಆರೋಗ್ಯ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಡಾ. ಹರ್ಷಿತ್ ನೇತೃತ್ವದಲ್ಲಿ ಶೃತಿ ಮತ್ತು ಚೈತ್ರ ಮಕ್ಕಳಿಗೆ ಲಸಿಕೆ ನೀಡಿದರು. ಶಿಕ್ಷಕ ದಿವಾಕರ್ ಕಾರ್ಯಕ್ರಮ ನಿರೂಪಿಸಿದರು.
ತಾಲೂಕಿನಲ್ಲಿ ಒಟ್ಟು ೧೦೯ ಶಾಲಾ-ಕಾಲೇಜುಗಳಲ್ಲಿ ೧೫ ರಿಂದ ೧೮ ವರ್ಷದೊಳಗಿನ ಒಟ್ಟು ೧೪,೫೯೧ ಮಕ್ಕಳಿದ್ದು, ಈ ಪೈಕಿ ಸೋಮವಾರ ೨೧೧೧ ಮಕ್ಕಳಿಗೆ ಲಸಿಕೆ ನೀಡಲಾಯಿತು. ಶಾಲಾ-ಕಾಲೇಜುಗಳ ಮಕ್ಕಳಿಗೆ ಲಸಿಕೆ ನೀಡಿಕೆ ನಂತರ ಶಾಲೆಯಿಂದ ಹೊರಗುಳಿದಿರುವ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯ ನಡೆಯಲಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
No comments:
Post a Comment