Tuesday, January 4, 2022

ಶಿಕ್ಷಣ ಕ್ಷೇತ್ರಕ್ಕೆ ಸಾವಿತ್ರಿ ಬಾಯಿ ಪುಲೆ, ಜ್ಯೋತಿ ಬಾಪುಲೆ ಕೊಡುಗೆ ಅಪಾರ : ಜಗನ್ನಾಥ ಡಾಂಗೆ

ಕರ್ನಾಟಕ ದಲಿತ ನೌಕರರ ಒಕ್ಕೂಟದ ವತಿಯಿಂದ ಭದ್ರಾವತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಕ್ಷರದವ್ವ ಶ್ರೀಮಾತೆ ಸಾವಿತ್ರಿ ಬಾಯಿ ಪುಲೆ ಅವರ ೧೯೧ನೇ ಜಯಂತಿ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜ. ೪: ಶಿಕ್ಷಣ ಕ್ಷೇತ್ರಕ್ಕೆ ಸಾವಿತ್ರಿ ಬಾಯಿ ಪುಲೆ ಮತ್ತು ಜ್ಯೋತಿ ಬಾಪುಲೆ ಅವರ ಕೊಡುಗೆ ಅಪಾರವಾಗಿದ್ದು, ಈ ದಂಪತಿ ಸಾಧನೆಯನ್ನು ಯಾರು ಮರೆಯುವಂತಿಲ್ಲ ಎಂದು ಕುವೆಂಪು ವಿಶ್ವ ವಿದ್ಯಾನಿಲಯದ ಪ್ರಾಧ್ಯಾಪಕ ಜಗನ್ನಾಥ ಡಾಂಗೆ ಹೇಳಿದರು.
    ಅವರು ಕರ್ನಾಟಕ ದಲಿತ ನೌಕರರ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಕ್ಷರದವ್ವ ಶ್ರೀಮಾತೆ ಸಾವಿತ್ರಿ ಬಾಯಿ ಪುಲೆ ಅವರ ೧೯೧ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮಹಿಳೆಯರು ಮನೆಯಿಂದ ಹೊರಬರದಿರುವಂತಹ ಕಾಲಘಟ್ಟದಲ್ಲಿ ಶಿಕ್ಷಣವನ್ನು ಕಲಿತು ಶಿಕ್ಷಣದೊಂದಿಗೆ ಜ್ಞಾನದ ಮಹತ್ವವನ್ನು ತಿಳಿಸಿಕೊಟ್ಟ ಮೊದಲ ಮಹಿಳೆ ಸಾವಿತ್ರಿ ಬಾಯಿ ಪುಲೆ ಎಂಬುದನ್ನು ಎಲ್ಲರೂ ನೆನಪಿನಲ್ಲಿಟ್ಟುಕೊಳ್ಳಬೇಕು.
    ಸಾವಿತ್ರಿ ಬಾಯಿ ಪುಲೆ ಮತ್ತು ಜ್ಯೋತಿ ಬಾಪುಲೆ ಇಬ್ಬರು ಸಹ ತಮ್ಮ ಬದುಕನ್ನು ಕೇವಲ ಶಿಕ್ಷಣಕ್ಕೆ ಮೀಸಲಿಡದೆ ಜಾತಿ, ಲಿಂಗ ತಾರತಮ್ಯ ಹಾಗು ಅನಿಷ್ಟ ಪದ್ದತಿಗಳ ನಿರ್ಮೂಲನೆ ಸೇರಿದಂತೆ ಸಾಮಾಜಿಕ ಸುಧಾರಣೆಗಾಗಿ ಹೋರಾಟ ನಡೆಸಿರುವುದು ವಿಶೇಷವಾಗಿದೆ. ಪ್ರಸ್ತುತ ಈ ದಂಪತಿಯ ಆದರ್ಶತನವನ್ನು ಸಮಾಜದ ಎಲ್ಲರಿಗೂ ಮೈಗೂಡಿಸಿಕೊಳ್ಳಬೇಕಾಗಿದೆ. ಆಗ ಮಾತ್ರ ಇವರ ಜಯಂತಿ ಆಚರಣೆಗೆ ಅರ್ಥ ಬರುತ್ತದೆ ಎಂದರು.
    ತಹಸೀಲ್ದಾರ್ ಆರ್. ಪ್ರದೀಪ್ ಮಾತನಾಡಿ, ಸಾವಿತ್ರಿ ಬಾಯಿ ಪುಲೆ ಮತ್ತು ಜ್ಯೋತಿ ಬಾಪುಲೆ ಅವರು ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ವಿಶೇಷವಾಗಿ ಸ್ಮರಿಸಿದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಡಿಎಸ್‌ಎಸ್  ರಾಜ್ಯ ಖಜಾಂಚಿ ಸತ್ಯ, ಜಿಲ್ಲಾ ಸಂಚಾಲಕ ಚಿನ್ನಯ್ಯ ಸೇರಿದಂತೆ ಇನ್ನಿತರರು ಮಾತನಾಡಿದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ದಲಿತ ನೌಕರರ ಒಕ್ಕೂಟದ ಕಾರ್ಯಾಧ್ಯಕ್ಷ ಸಿ. ಜಯಪ್ಪ, ಡಿಎಸ್‌ಎಸ್ ತಾಲೂಕು ಸಂಚಾಲಕ ಕೆ. ರಂಗನಾಥ್, ನಗರಸಭಾ ಸದಸ್ಯ ಬಸವರಾಜ ಬಿ. ಆನೇಕೊಪ್ಪ, ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಶಾರದಮ್ಮ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಒಕ್ಕೂಟದ ಅಧ್ಯಕ್ಷೆ ಎಸ್. ಉಮಾ ಅಧ್ಯಕ್ಷತೆ ವಹಿಸಿದ್ದರು. ಈಶ್ವರಪ್ಪ  ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಎ. ತಿಪ್ಪೇಸ್ವಾಮಿ ಸೇರಿದಂತೆ ದಲಿತ ನೌಕರರು, ಮಹಿಳೆಯರು ಪಾಲ್ಗೊಂಡಿದ್ದರು.

No comments:

Post a Comment