Wednesday, January 5, 2022

ಜೆಎಂಎಫ್‌ಸಿ ನ್ಯಾಯಾಲಯ ಮುಂಭಾಗ ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಪ್ರತಿಭಟನೆ

೧೦ದಿನದಲ್ಲಿ ಸಮಸ್ಯೆ ಇತ್ಯರ್ಥ : ಸಾರ್ವಜನಿಕ ಕುಂದು ಕೊರತೆ ಹೋರಾಟ ಸಮಿತಿಗೆ ಭರವಸೆ


 ಕಳೆದ ಸುಮಾರು ೨-೩ ವರ್ಷಗಳಿಂದ ಭದ್ರಾವತಿ ತಾಲೂಕು ಕಛೇರಿ ರಸ್ತೆಯ ಜೆಎಂಎಫ್‌ಸಿ ನ್ಯಾಯಾಲಯದ ಮುಂಭಾಗದಲ್ಲಿ ರಸ್ತೆ ಅಗಲೀಕರಣ ಮಾಡದೆ ನಿರ್ಲಕ್ಷ್ಯವಹಿಸಲಾಗಿದೆ ಎಂದು ಆರೋಪಿಸಿ ಬುಧವಾರ ಸಾರ್ವಜನಿಕ ಕುಂದು ಕೊರತೆ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಜ. ೫: ಕಳೆದ ಸುಮಾರು ೨-೩ ವರ್ಷಗಳಿಂದ ತಾಲೂಕು ಕಛೇರಿ ರಸ್ತೆಯ ಜೆಎಂಎಫ್‌ಸಿ ನ್ಯಾಯಾಲಯದ ಮುಂಭಾಗದಲ್ಲಿ ರಸ್ತೆ ಅಗಲೀಕರಣ ಮಾಡದೆ ನಿರ್ಲಕ್ಷ್ಯವಹಿಸಲಾಗಿದೆ ಎಂದು ಆರೋಪಿಸಿ ಬುಧವಾರ ಸಾರ್ವಜನಿಕ ಕುಂದು ಕೊರತೆ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
    ರಸ್ತೆ ಅಗಲೀಕರಣ ಕಾರ್ಯ ಅಪೂರ್ಣಗೊಳಿಸಲಾಗಿದ್ದು, ಈಗಾಗಲೇ ತಾಲೂಕು ಕಛೇರಿವರೆಗೂ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ. ಆದರೆ ನ್ಯಾಯಾಲಯದ ಮುಂಭಾಗದಲ್ಲಿ ಅಗಲೀಕರಣ ಕಾರ್ಯ ಕೈಗೊಂಡಿಲ್ಲ. ಇದರಿಂದಾಗಿ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ, ಶಾಲಾ ಮಕ್ಕಳಿಗೆ, ಸಾರ್ವಜನಿಕರಿಗೆ ತೊಂದರೆಯಾಗಿದೆ. ಅಲ್ಲದೆ ಪ್ರತಿದಿನ ಹಲವಾರು ಅಪಘಾತಗಳು ಸಂಭವಿಸುತ್ತಿವೆ. ಈ  ಹಿನ್ನಲೆಯಲ್ಲಿ ತಕ್ಷಣ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.
    ಈ ಸಂಬಂಧ ಈಗಾಗಲೇ ಹಲವಾರು ಬಾರಿ ಹೋರಾಟ ನಡೆಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಸಹ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ರಸ್ತೆ ಅಗಲೀಕರಣ ಕಾರ್ಯದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಅಲ್ಲದೆ ಅಧಿಕಾರಿಗಳು ನಿರ್ಲಕ್ಷ್ಯತನದಿಂದ ವರ್ತಿಸುತ್ತಿದ್ದಾರೆಂದು ಆರೋಪಿಸಲಾಯಿತು.
    ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಜಗದೀಶ್ ಮತ್ತು ಸಹಾಯಕ ಅಭಿಯಂತರರಾದ ಭರ್ಮಪ್ಪ ಮತ್ತು ಸಂಪತ್ ಎದುರಾಗಿರುವ ಸಮಸ್ಯೆಗಳನ್ನು ವಿವರಿಸಿ ಶೀಘ್ರದಲ್ಲಿಯೇ ಕಾಮಗಾರಿ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಆದರೆ ಇದಕ್ಕೆ ಒಪ್ಪದ ಪ್ರತಿಭಟನಾಕಾರರು ಸ್ಥಳಕ್ಕೆ ಉಪವಿಭಾಗಾಧಿಕಾರಿಗಳು ಬಂದು ಸ್ಪಷ್ಟನೆ ನೀಡುವವರೆಗೂ ಪ್ರತಿಭಟನೆ ಮುಂದುವರೆಸುವರೆಸುವುದಾಗಿ ಎಚ್ಚರಿಸಿದರು.
    ಎ.ಸಿ ಪತ್ರ ರವಾನೆ:
    ಪ್ರತಿಭಟನಾ ಸ್ಥಳಕ್ಕೆ ಆಗಮಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಉಪವಿಭಾಗಾಧಿಕಾರಿಗಳು ಲೋಕೋಪಯೋಗಿ ಇಲಾಖೆ ವಿಶೇಷ ವಿಭಾಗದ ಕಾರ್ಯಪಾಲಕ ಅಭಿಯಂತರರು ಸಲ್ಲಿಸಿರುವ ವರದಿಯನ್ನು ಕಳುಹಿಸಿಕೊಟ್ಟಿದ್ದು, ನ್ಯಾಯಾಲಯದ ಮುಂಭಾಗದಲ್ಲಿರುವ ಖಾಸಗಿ ಸ್ವತ್ತುಗಳ ಭೂಸ್ವಾಧೀನ ಪ್ರಕ್ರಿಯೆ ಇನ್ನೂ ಪೂರ್ಣಗೊಳ್ಳದ ಕಾರಣ ಅಗಲೀಕರಣ ಕಾರ್ಯ ಕೈಗೊಂಡಿಲ್ಲ ಎಂದು ಪತ್ರದಲ್ಲಿ ಸ್ಪಷ್ಟಡಿಸಿದ್ದಾರೆ.
    ಈ ನಡುವೆ ಪ್ರತಿಭಟನಾ ಸ್ಥಳದಲ್ಲಿ ಹಾಜರಿದ್ದ ಇಲಾಖೆ ಅಧಿಕಾರಿಗಳು ಮುಂದಿನ ೧೦ ದಿನಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
    ಸಮಿತಿ ಅಧ್ಯಕ್ಷ, ನಗರಸಭೆ ಮಾಜಿ ಸದಸ್ಯ ಬಾಲಕೃಷ್ಣ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಪ್ರಗತಿಪರ ಸಂಘಟನೆಯ ಸುರೇಶ್, ಹಿರಿಯ ಕಾಂಗ್ರೆಸ್ ಮುಖಂಡ ಟಿ.ವಿ ಗೋವಿಂದಸ್ವಾಮಿ, ನಗರಸಭಾ ಸದಸ್ಯ ಕಾಂತರಾಜ್, ಪ್ರಮುಖರಾದ ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಎಸ್. ಮಂಜುನಾಥ್, ಡಿಎಸ್‌ಎಸ್ ಮುಖಂಡರಾದ ಚಿನ್ನಯ್ಯ, ಕೆ. ರಂಗನಾಥ್, ಕೆ. ಮಂಜುನಾಥ್, ವಿಲ್ಸನ್ ಬಾಬು, ಕೃಷ್ಣನಾಯ್ಕ, ಅಂತೋಣಿ ವಿಲ್ಸನ್, ಬಿ. ಗಂಗಾಧರ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

No comments:

Post a Comment