ತಾಲೂಕು ಸರ್ಕಾರಿ ನೌಕರರ ಸಂಘದಿಂದ ಮುಖ್ಯಮಂತ್ರಿಗಳಿಗೆ ಮನವಿ
ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ತಹಸೀಲ್ದಾರ್ ಮೇಲೆ ನಡೆದಿರುವ ಹಲ್ಲೆ ಘಟನೆಯನ್ನು ಖಂಡಿಸಿ ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶನಿವಾರ ಭದ್ರಾವತಿಯಲ್ಲಿ ತಾಲೂಕು ಕಚೇರಿ ಮಿನಿ ವಿಧಾನಸೌಧ ಮುಂಭಾಗ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ: ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ನಿರ್ಭಿತಿಯಿಂದ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದಂತಹ ವಾತಾವರಣ ನಿರ್ಮಾಣವಾಗಿದ್ದು, ಸರ್ಕಾರ ತಕ್ಷಣ ನೌಕರರಿಗೆ ರಕ್ಷಣೆ ನೀಡುವ ಮೂಲಕ ಅವರ ಹಿತಕಾಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಪ್ಪ ಎಚ್ಚರಿಸಿದರು.
ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ತಹಸೀಲ್ದಾರ್ ಮೇಲೆ ನಡೆದಿರುವ ಹಲ್ಲೆ ಘಟನೆಯನ್ನು ಖಂಡಿಸಿ ಶನಿವಾರ ತಾಲೂಕು ಕಚೇರಿ ಮಿನಿ ವಿಧಾನಸೌಧ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ನೇತೃತ್ವ ವಹಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಕಂದಾಯ, ಆರೋಗ್ಯ, ಭೂಮಾಪನ, ಪಂಚಾಯತ್ ರಾಜ್ ಸೇರಿದಂತೆ ಸರ್ಕಾರದ ಪ್ರಮುಖ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ ಘಟನೆಗಳು ಹೆಚ್ಚಾಗುತ್ತಿವೆ. ನಿರ್ಭಿತಿಯಿಂದ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದಂತಹ ವಾತಾವರಣ ಇಂದು ರಾಜ್ಯದೆಲ್ಲೆಡೆ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣ ತಹಸೀಲ್ದಾರ್ ಮೇಲಿನ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಸರ್ಕಾರ ನೌಕರರಿಗೆ ರಕ್ಷಣೆ ಒದಗಿಸಬೇಕು. ಈ ನಿಟ್ಟಿನಲ್ಲಿ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು. ತಹಸೀಲ್ದಾರ್ ಮೇಲಿನ ಹಲ್ಲೆ ಪ್ರಕರಣಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಮನವಿ ಮಾಡಿದರು.
ತಹಸೀಲ್ದಾರ್ ಪ್ರದೀಪ್ ಆರ್ ನಿಕ್ಕಮ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಸಂಘದ ಗೌರವಾಧ್ಯಕ್ಷ ಎ.ಜೆ ರಂಗನಾಥಪ್ರಸಾದ್, ಉಪಾಧ್ಯಕ್ಷ ಎಂ.ಎಸ್ ಬಸವರಾಜ್, ರಾಜ್ಯ ಪರಿಷತ್ ಸದಸ್ಯ ಎಸ್. ಪ್ರಕಾಶ್, ಖಜಾಂಚಿ ಎಸ್.ಕೆ ಮೋಹನ್, ಕಾರ್ಯದರ್ಶಿ ಡಿ.ಎಸ್ ರಾಜಪ್ಪ, ಬಿ.ಆರ್ ದಿನೇಶ್‌ಕುಮಾರ್, ಬಸವಂತರಾವ್ ದಾಳೆ, ಮಂಜಾನಾಯ್ಕ, ಅರಸು, ಪ್ರಶಾಂತ್ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.
No comments:
Post a Comment