ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ
ದೇಶ ದ್ರೋಹದ ಹೇಳಿಕೆ ನೀಡಿರುವ ಸಚಿವ ಈಶ್ವರಪ್ಪರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಟ್ಟು, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಫೆ. ೨೧: ದೇಶ ದ್ರೋಹದ ಹೇಳಿಕೆ ನೀಡಿರುವ ಸಚಿವ ಈಶ್ವರಪ್ಪರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಟ್ಟು, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಪಕ್ಷದ ಪ್ರಮುಖರು ಮಾತನಾಡಿ, ಸರ್ಕಾರದಲ್ಲಿ ಸಚಿವರಾಗಿರುವ ಈಶ್ವರಪ್ಪರವರು ರಾಷ್ಟ್ರಧ್ವಜ ಸ್ಥಾನದಲ್ಲಿ ಕೇಸರಿ ಧ್ವಜ(ಭಗವದ್ವಜ) ಹಾರಿಸುವುದಾಗಿ ಹೇಳಿಕೆಯನ್ನು ನೀಡುವ ಮೂಲಕ ದೇಶದ್ರೋಹವೆಸಗಿದ್ದಾರೆ. ಇವರ ಹೇಳಿಕೆ ಅತ್ಯಂತ ಅಪಾಯಕಾರಿಯಾಗಿದ್ದು, ತ್ರಿವರ್ಣ ಧ್ವಜವು ನಮ್ಮ ರಾಷ್ಟ್ರದ ಸ್ವಾತಂತ್ರ್ಯ, ಅಖಂಡತೆ, ಸಾರ್ವಭೌಮತೆ, ಅಸ್ಮಿತೆ ಮತ್ತು ಸಂವಿಧಾನದ ಸಂಕೇತವಾಗಿದೆ. ಈಶ್ವರಪ್ಪನವರ ಹೇಳಿಕೆಯಿಂದ ದೇಶದ ಪ್ರಜೆಗಳಿಗೆ ದಿಗ್ಭ್ರಮೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ತಕ್ಷಣ ಈಶ್ವರಪ್ಪರನ್ನು ಸಚಿವ ಸಂಪುಟದಿಂದ ಕೈಬಿಟ್ಟು ಅವರ ವಿರುದ್ಧ ದೇಹದ್ರೋಹದ ಪ್ರಕರಣ ದಾಖಲಿಸಿ ರಾಷ್ಟ್ರ ಧ್ವಜದ ಗೌರವ ಎತ್ತಿ ಹಿಡಿಯುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಶಾಸಕರು ವಿಧಾನ ಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯತನದಿಂದ ವರ್ತಿಸುತ್ತಿದೆ. ಈ ಹಿನ್ನಲೆಯಲ್ಲಿ ಸಂವಿಧಾನ ರಕ್ಷಣೆಯ ಪವಿತ್ರ ಜವಾಬ್ದಾರಿಯನ್ನು ಹೊಂದಿರುವ ರಾಜ್ಯಪಾಲರು ತಕ್ಷಣ ಸಚಿವ ಸಂಪುಟದಿಂದ ಈಶ್ವರಪ್ಪರನ್ನು ಕೈಬಿಟ್ಟು ಅವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು.
ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರೇಗೌಡ ನೇತೃತ್ವದಲ್ಲಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಲಾಯಿತು. ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಗ್ರಾಮಾಂತರ ಯುವ ಘಟಕದ ಅಧ್ಯಕ್ಷ ಅಫ್ತಾಬ್ ಅಹಮದ್, ಪ್ರಮುಖರಾದ ಸಿ.ಎಂ ಖಾದರ್, ಅಮೀರ್‌ಜಾನ್, ಫೀರ್ ಷರೀಫ್, ಬಿ. ಗಂಗಾಧರ್, ಗೋಪಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment