ಹಿಜಾಬ್ ಧರಿಸಿಕೊಂಡು ತರಗತಿಗೆ ಹೋಗಲು ಅವಕಾಶ ನೀಡುವಂತೆ ಮನವಿ
ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಮುಂಭಾಗ ಮುಸ್ಲಿಂ ವಿದ್ಯಾರ್ಥಿಗಳು ಸರ್ಕಾರದ ಆದೇಶದ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಿದರು.
ಭದ್ರಾವತಿ, ಫೆ. ೭: ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಿಜಾಬ್ ವಿವಾದ ಇನ್ನೂ ಬಗೆ ಹರಿದಿಲ್ಲ. ವಿದ್ಯಾರ್ಥಿಗಳಿಗೆ ಆಯಾ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ನಿಗದಿಪಡಿಸಿರುವ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿದ್ದರೂ ಸಹ ಮುಸ್ಲಿಂ ವಿದ್ಯಾರ್ಥಿಗಳು ಸೋಮವಾರ ಆದೇಶದ ವಿರುದ್ಧ ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದರು.
ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿಗಳನ್ನು ಕಾಲೇಜಿನ ಒಳಗೆ ಬಿಡದಂತೆ ಕಾಲೇಜಿನ ಮುಂಭಾಗ ಪ್ರಾಂಶುಪಾಲರು ಸರ್ಕಾರದ ಆದೇಶವನ್ನು ಓದಿ ತಿಳಿಸಿದರು. ಆದರೂ ಸಹ ವಿದ್ಯಾರ್ಥಿಗಳು ತರಗತಿಗಳಿಗೆ ಹಿಜಾಬ್ ಧರಿಸಿಕೊಂಡು ಹೋಗುವುದಾಗಿ ಹಠಕ್ಕೆ ಬಿದ್ದು, ಪ್ರತಿಭಟನೆ ಕೈಗೊಂಡಿದ್ದಾರೆ. ಅಲ್ಲದೆ ಹಿಜಾಬ್ ಧರಿಸಿಕೊಂಡು ತರಗತಿಗಳಿಗೆ ಹೋಗಲು ಅವಕಾಶ ನೀಡುವಂತೆ ಒತ್ತಾಯಿಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.
ಕೇಸರಿ ವಸ್ತ್ರದೊಂದಿಗೆ ಆಗಮಿಸಿದ್ದ ವಿದ್ಯಾರ್ಥಿಗಳು ಸರ್ಕಾರದ ಆದೇಶ ಪಾಲನೆ ಮಾಡುವ ಮೂಲಕ ತರಗತಿಗಳಿಗೆ ಹಾಜರಾದರು. ಈ ನಡುವೆ ಪೊಲೀಸರು ಕಾಲೇಜು ಆವರಣದ ಸುತ್ತಮುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.
No comments:
Post a Comment