ಭದ್ರಾವತಿ ಸಿದ್ದರೂಢನಗರದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯನವರ ಅಭಿನಂದನಾ ಗ್ರಂಥ ಬಿಡುಗಡೆಗೊಳಿಸಲಾಯಿತು.
ಭದ್ರಾವತಿ, ಫೆ. ೨೮: ಹಲವಾರು ಒತ್ತಡಗಳ ನಡುವೆಯೂ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯನವರು ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಹೇಳಿದರು.
ಅವರು ಸೋಮವಾರ ಸಿದ್ದರೂಢನಗರದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಗ್ರಂಥ ಬಿಡುಗಡೆಯೊಂದಿಗೆ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭದ್ರಾವತಿ ಸೂಕ್ಷ್ಮ ಸ್ಥಳವಾಗಿದ್ದು, ಇಲ್ಲಿ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಸಿಕೊಂಡು ಕರ್ತವ್ಯ ನಿರ್ವಹಿಸುವುದು ಸವಾಲಿನ ಕೆಲಸವಾಗಿದೆ. ಅದರಲ್ಲೂ ಪ್ರತಿ ದಿನ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸಬೇಕಾದ ಇಂದಿನ ದಿನಗಳಲ್ಲಿ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿ ಯಶಸ್ವಿಯಾಗಿ ಮುನ್ನಡೆಯುವುದು ಬಹಳ ಕಷ್ಟದ ಕೆಲಸವಾಗಿದೆ. ಸೋಮಶೇಖರಯ್ಯನವರು ತಮದೇ ಆದ ವ್ಯಕ್ತಿತ್ವ ಮತ್ತು ವೃತ್ತಿ ಅನುಭವದೊಂದಿಗೆ ಎಲ್ಲವನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಗಳಿಸಿಕೊಂಡಿದ್ದರು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ದಕ್ಷತೆಯಿಂದ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯನವರನ್ನು ಅಭಿನಂದನಾ ಸಮಿತಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಕ್ಷೇತ್ರದಲ್ಲಿ ೩ ಬಾರಿ ಒಟ್ಟು ೬ ವರ್ಷ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿರುವುದು ತೃಪ್ತಿ ತಂದುಕೊಟ್ಟಿದೆ. ವೃತ್ತಿ ಬದುಕಿನಲ್ಲಿ ಸಲಹೆ, ಸಹಕಾರ ನೀಡಿದ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೂ, ತಾಲೂಕಿನ ಶಿಕ್ಷಕ ವೃಂದದವರು, ಸಂಘ-ಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದರು.
ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಆಡಳಿತ ವಿಭಾಗದ ಜಿಲ್ಲಾ ಉಪನಿರ್ದೇಶಕ ಎನ್.ಎಂ ರಮೇಶ್, ಅಭಿವೃದ್ಧಿ ವಿಭಾಗದ ಜಿಲ್ಲಾ ಉಪನಿರ್ದೇಶಕ ಬಿ.ಆರ್ ಬಸವರಾಜಪ್ಪ, ಚಿಕ್ಕಮಗಳೂರು ಜಿಲ್ಲಾ ಉಪನಿರ್ದೇಶಕ ಮಲ್ಲೇಶಪ್ಪ, ಚಿತ್ರದುರ್ಗ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಎಚ್. ಮಂಜುನಾಥ್, ಶಂಕರಪ್ಪ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ಅಭಿನಂದನಾ ಸಮಿತಿ ಗೌರವಾಧ್ಯಕ್ಷ ಡಿ. ಪ್ರಭಾಕರ ಬೀರಯ್ಯ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಭಿನಂದನಾ ಗ್ರಂಥದ ಸಂಪಾದಕ, ಸಾಹಿತಿ ಅರಳೇಹಳ್ಳಿ ಅಣ್ಣಪ್ಪ ಪುಸ್ತಕ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ತಾಲೂಕಿನ ವಿವಿಧ ಶಾಲೆಗಳ ಶಿಕ್ಷಕ ವೃಂದದವರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.
No comments:
Post a Comment