ತಾಲೂಕು ಆಡಳಿತ, ಗ್ರಾಮ ಪಂಚಾಯಿತಿಗಳ ವಿರುದ್ಧ ನಗರಸಭೆ ಸದಸ್ಯ ಬಿ.ಕೆ ಮೋಹನ್ ಆರೋಪ
ಭದ್ರಾವತಿ ತಾಲೂಕು ಪಂಚಾಯಿತಿ ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಗರಸಭೆ ಸದಸ್ಯ ಬಿ.ಕೆ ಮೋಹನ್ ಮಾತನಾಡಿದರು.
ಭದ್ರಾವತಿ, ಫೆ. ೮: ತಾಲೂಕಿನಲ್ಲಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳಡಿ ನಿವೇಶನ ನೀಡಲು ಹಾಗು ೯೪ಸಿ ಮತ್ತು ೯೪ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸುವವರಿಗೆ ಹಕ್ಕು ಪತ್ರ ನೀಡಲು ಸಾಧ್ಯವಾಗುತ್ತಿಲ್ಲ. ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯಿತಿ ಆಡಳಿತಗಳು ನಿರ್ಲಕ್ಷ್ಯವಹಿಸಿವೆ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಆರೋಪಿಸಿದರು.
ಅವರು ಮಂಗಳವಾರ ತಾಲೂಕು ಪಂಚಾಯಿತಿ ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ನಗರಸಭೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗು ಕಾರ್ಯದರ್ಶಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಸರ್ಕಾರ ವಸತಿ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಿ ವಸತಿ ಕಲ್ಪಿಸಿಕೊಡಲು ಅವಕಾಶ ಕಲ್ಪಿಸಿಕೊಟ್ಟಿದೆ. ಅಲ್ಲದೆ ೯೪ಸಿ ಮತ್ತು ೯೪ಸಿಸಿ ಅಡಿಯಲ್ಲಿ ಹಕ್ಕುಪತ್ರ ನೀಡಲು ಸೂಚಿಸಿದೆ. ಆದರೆ ಇನ್ನೂ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಲು, ೯೪ಸಿ ಮತ್ತು ೯೪ಸಿಸಿ ಅಡಿಯಲ್ಲಿ ಹಕ್ಕು ಪತ್ರ ನೀಡಲು ಸಾಧ್ಯವಾಗಿಲ್ಲ. ಈ ಸಂಬಂಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ದೂರು ಕೇಳಿ ಬರುತ್ತಿವೆ. ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯಿತಿ ಆಡಳಿತಗಳು ನಿರ್ಲಕ್ಷ್ಯವಹಿಸಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನ್ಯಾಯವಾದಿ ಟಿ. ಚಂದ್ರೇಗೌಡ ಮಾತನಾಡಿ, ಎದುರಾಗಿರುವ ಭೂ ವಿವಾದಗಳನ್ನು ವಿವರಿಸುವ ಜೊತೆಗೆ ಅವುಗಳಿಗೆ ಕಾನೂನಾತ್ಮಕವಾಗಿ ಕಂಡುಕೊಳ್ಳಬಹುದಾದ ಮಾಗೋಪಾಯಗಳನ್ನು ವಿವರಿಸಿದರು.
ತಹಸೀಲ್ದಾರ್ ಪ್ರದೀಪ್ ಆರ್. ನಿಕ್ಕಮ್ ಮಾತನಾಡಿ, ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡುವ ಸಂಬಂಧ ಹಾಗು ೯೪ಸಿ ಮತ್ತು ೯೪ಸಿಸಿ ಅಡಿಯಲ್ಲಿ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು. ಭೂ ವಿವಾದಗಳಿಗೆ ಸಂಬಂಧಿಸಿದಂತೆ ಕಾನೂನಾತ್ಮಕವಾಗಿ ಎದುರಾಗಿರುವ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದರು.
ಪಡಿತರ ಚೀಟಿ ವಿತರಣೆಯಲ್ಲಿ ಉಂಟಾಗಿರುವ ಸಮಸ್ಯೆಗಳು ಹಾಗು ಗ್ರಾಮಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸಿಕೊಡುವ ಸಂಬಂಧ ಸಹ ಸಭೆಯಲ್ಲಿ ಚರ್ಚಿಸಲಾಯಿತು.
ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಕೆ. ಪರಮೇಶ್, ಕಂದಾಯಾಧಿಕಾರಿ ರಾಜ್‌ಕುಮಾರ್, ಸದಸ್ಯ ಬಿ.ಟಿ ನಾಗರಾಜ್, ತಾಲೂಕು ಬಗರ್ ಹುಕ್ಕುಂ ಸಮಿತಿ ಅಧ್ಯಕ್ಷ ನಾಗೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment