Sunday, February 27, 2022

ತಪ್ಪದೇ ೫ ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಿ : ಗೀತಾರಾಜ್‌ಕುಮಾರ್

ಭದ್ರಾವತಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನಾಚರಣೆಗೆ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಪಲ್ಸ್ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.
    ಭದ್ರಾವತಿ, ಫೆ. ೨೭: ಪೋಲಿಯೋ ಬಗ್ಗೆ ನಿರ್ಲಕ್ಷ್ಯ ವಹಿಸದೆ ಪೋಷಕರು ತಮ್ಮ ೫ ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವಂತೆ ನಗರಸಭೆ ಅಧ್ಯಕ್ಷೆ  ಗೀತಾರಾಜ್‌ಕುಮಾರ್ ಕರೆ ನೀಡಿದರು.
    ಅವರು ಭಾನುವಾರ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
    ಮುನ್ನಚ್ಚರಿಕೆ ಕ್ರಮವಾಗಿ ಎಲ್ಲರೂ ತಮ್ಮ ಮಕ್ಕಳಿಗೆ ಸಮೀಪದ ಪಲ್ಸ್ ಪೋಲಿಯೋ ಲಸಿಕಾ ಕೇಂದ್ರಗಳಿಗೆ ತೆರಳಿ ಪೋಲಿಯೋ ಹನಿ ಹಾಕಿಸುವ ಮೂಲಕ ಭವಿಷ್ಯದ ಆರೋಗ್ಯವಂತ ಸಮಾಜಕ್ಕೆ ಕೈಜೋಡಿಸುವಂತೆ ಮನವಿ ಮಾಡಿದರು.
    ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಮಾತನಾಡಿ, ಈ ಬಾರಿ ತಾಲೂಕಿನಲ್ಲಿ ೧೮೦ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ಒಟ್ಟು ೨೬,೨೦೫ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿದ್ದು, ೭೨೦ ಮಂದಿ ಲಸಿಕೆ ಹಾಕುವವರು ಹಾಗು ೩೭ ಮಂದಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸಲಿದ್ದಾರೆ. ಸಾರ್ವಜನಿಕರು ಸಮೀಪದ ಕೇಂದ್ರಗಳಿಗೆ ತೆರಳಿ ಪೋಲಿಯೋ ಹನಿ ಹಾಕಿಸುವ ಮೂಲಕ ಸಹಕರಿಸುವಂತೆ ಮನವಿ ಮಾಡಿದರು.
    ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ವಾರ್ಡ್ ಸದಸ್ಯೆ ಅನುಸುಧಾ ಮೋಹನ್, ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ರಾಮನಾಥ್ ಬರ್ಗೆ, ಪಿ. ಗಣೇಶ್‌ರಾವ್, ರೋಟರಿ ಸಂಸ್ಥೆಯ ಅಡವೀಶಯ್ಯ, ಸುಂದರ್ ಬಾಬು, ಆಸ್ಪತ್ರೆ ಸಿಬ್ಬಂದಿಗಳಾದ ಆನಂದಮೂರ್ತಿ, ರೇವತಿ, ವಸಂತ, ಗ್ರೇಷಿಯಾ, ನೇತ್ರಾ, ದೇವಿಕಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment