Monday, March 21, 2022

ತಡೆಗೋಡೆ ನಿರ್ಮಿಸಿ ಪ್ರವಾಹದಿಂದ ರಕ್ಷಿಸಿ

ಭದ್ರಾವತಿ ಅಂಬೇಡ್ಕರ್ ವೃತ್ತದ ಬಿ.ಎಚ್ ರಸ್ತೆ ೧ನೇ ತಿರುವಿನಿಂದ ಭದ್ರಾ ನದಿಗೆ ತಡೆಗೋಡೆ ನಿರ್ಮಿಸುವಂತೆ ಆಗ್ರಹಿಸಿ ಸೋಮವಾರ ಸ್ಥಳೀಯರು ಪ್ರಜಾ ರಾಜ್ಯ ದಲಿತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.
    ಭದ್ರಾವತಿ, ಮಾ. ೨೧: ನಗರದ ಅಂಬೇಡ್ಕರ್ ವೃತ್ತದ ಬಿ.ಎಚ್ ರಸ್ತೆ ೧ನೇ ತಿರುವಿನಿಂದ ಭದ್ರಾ ನದಿಗೆ ತಡೆಗೋಡೆ ನಿರ್ಮಿಸುವಂತೆ ಆಗ್ರಹಿಸಿ ಸೋಮವಾರ ಸ್ಥಳೀಯರು ಪ್ರಜಾ ರಾಜ್ಯ ದಲಿತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.
    ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖರು ಮಾತನಾಡಿ, ಈ ಭಾಗದಲ್ಲಿ ದಲಿತರು ಹೆಚ್ಚಾಗಿ ವಾಸಿಸುತ್ತಿದ್ದಾರೆ. ಮಳೆಗಾಲದಲ್ಲಿ ಭದ್ರಾ ನದಿಗೆ ಜಲಾಶಯದಿಂದ ನೀರು ಬಿಟ್ಟಾಗ ಮನೆಗಳು ಮುಳುಗಡೆಯಾಗುತ್ತಿವೆ. ಇದರಿಂದಾಗಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಭದ್ರಾ ನದಿಗೆ ತಡೆಗೋಡೆ ನಿರ್ಮಿಸುವಂತೆ ಹಲವಾರು ಒತ್ತಾಯಿಸಿದ ಹಿನ್ನಲೆಯಲ್ಲಿ ಈ ಹಿಂದಿನ ಶಾಸಕರಾಗಿದ್ದ ದಿವಂಗತ ಎಂ.ಜೆ ಅಪ್ಪಾಜಿಯವರು ಸರ್ಕಾರದಿಂದ ತಡೆಗೋಡೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿಸುವ ಮೂಲಕ ಬೇಡಿಕೆಗೆ ಪೂರಕವಾಗಿ ಸ್ಪಂದಿಸಿದ್ದರು. ಆದರೆ ಇದೀಗ ತಡೆಗೋಡೆ ಕಾಮಗಾರಿಯನ್ನು ಬದಲಾಯಿಸಲಾಗಿದ್ದು, ಇದರಿಂದಾಗಿ ನಿವಾಸಿಗಳಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ತಕ್ಷಣ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ತಡೆಗೋಡೆ ಕಾಮಗಾರಿ ಬದಲಿಸಿ ೧ನೇ ತಿರುವಿನಿಂದ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ತಾಲೂಕು ಆಡಳಿತ ನ್ಯಾಯ ದೊರಕಿಸಿ ಕೊಡಬೇಕೆಂದು ಆಗ್ರಹಿಸಿದರು. ಅಲ್ಲದೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸುವುದಾಗಿ ಎಚ್ಚರಿಸಿದರು.
    ಸ್ಥಳಕ್ಕೆ ಆಗಮಿಸಿದ ಶಿರಸ್ತೇದಾರ್ ರಾಧಾಕೃಷ್ಣಭಟ್ ಮನವಿ ಸ್ವೀಕರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಪ್ರಜಾ ರಾಜ್ಯ ದಲಿತ ಸಂಘದ ರಾಜ್ಯಾಧ್ಯಕ್ಷ ಬಿ. ರಮೇಶ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.
    ಆಮ್ ಆದ್ಮಿ ಪಾರ್ಟಿ ಪ್ರಮುಖರಾದ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ತಾಲೂಕು ಸಂಚಾಲಕ ಅಬ್ದುಲ್ ಖದೀರ್, ಉಪಾಧ್ಯಕ್ಷ ಇಬ್ರಾಹಿಂ ಖಾನ್, ಪರಮೇಶ್ವರಚಾರ್, ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ಸಂಸ್ಥಾಪಕ ಅಧ್ಯಕ್ಷ ಎಸ್.ಕೆ ಸುಧೀಂದ್ರ, ಬಿಎಸ್‌ಪಿ ಪಕ್ಷದ ರಾಜೇಂದ್ರ, ಸ್ನೇಹಜೀವಿ ಬಳಗದ ಮುಳ್ಕೆರೆ ಲೋಕೇಶ್, ಸುಹಾಸ್‌ಗೌಡ, ಸ್ಥಳೀಯರಾದ ಕುಪ್ಪಸ್ವಾಮಿ, ಗಣೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

No comments:

Post a Comment