Wednesday, March 2, 2022

ಮಾದಪ್ಪನ ಸನ್ನಿಧಿಗೆ ಹರಿದ ಬಂದ ಭಕ್ತ ಸಮೂಹ : ವೈಭವದ ಶಿವರಾತ್ರಿ ಆಚರಣೆ

ಬೆಳಿಗ್ಗೆಯಿಂದ ಸಂಜೆವರೆಗೂ ಸಾವಿರಾರು ಭಕ್ತರಿಗೆ ಅನ್ನದಾಸೋಹ

ಭದ್ರಾವತಿ ನಗರಸಭೆ ವಾರ್ಡ್ ೩೧ರ ಜಿಂಕ್‌ಲೈನ್ ವ್ಯಾಪ್ತಿಯ ವೀರಾಪುರ ರಸ್ತೆಯಲ್ಲಿರುವ ಶ್ರೀ ಮಲೆ ಮಾದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ ಹಿನ್ನಲೆಯಲ್ಲಿ ಬುಧವಾರ ಸಹ ಸ್ವಾಮಿಯ ದರ್ಶನ ಪಡೆಯಲು ಸಾಲುಗಟ್ಟಿ ನಿಂತಿರುವ ಭಕ್ತರು.
    ಭದ್ರಾವತಿ, ಫೆ. ೨: ಪ್ರತಿ ವರ್ಷದಂತೆ ಈ ಬಾರಿ ಸಹ ನಗರಸಭೆ ವಾರ್ಡ್ ೩೧ರ ಜಿಂಕ್‌ಲೈನ್ ವ್ಯಾಪ್ತಿಯ ವೀರಾಪುರ ರಸ್ತೆಯಲ್ಲಿರುವ ಶ್ರೀ ಮಲೆ ಮಾದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ ವಿಜೃಂಭಣೆಯಿಂದ ಜರುಗಿತು.
    ಶ್ರೀ ಶಿವಶಂಕರ ಗುರೂಜಿಯವರ ದಿವ್ಯ ಸಾನಿಧ್ಯದಲ್ಲಿ  ಗಂಗಾ ಪೂಜೆ, ರುದ್ರಾಭಿಷೇಕ, ಬಿಲ್ವಾರ್ಚನೆ, ಹೋಮ-ಹವನ, ಹಾಲರವಿ ಉತ್ಸವ, ಕೆಂಡೋತ್ಸವ, ರಾಜಬೀದಿ ಉತ್ಸವ, ಜಾಗರಣೆ, ಭಜನೆ ಪೂರ್ಣಾಹುತಿ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗು ಅನ್ನದಾಸೋಹ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
    ಎರಡು ದಿನಗಳ ಕಾಲ ಜರುಗಿದ ಧಾರ್ಮಿಕ ಆಚರಣೆಗಳಲ್ಲಿ ನಗರ ಹಾಗು ಗ್ರಾಮಾಂತರ ಪ್ರದೇಶಗಳಿಂದ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡಿದ್ದರು. ನಗರದ ಬೈಪಾಸ್ ರಸ್ತೆಯ ಸಮೀಪದಲ್ಲಿ ಅಡಕೆ, ತೆಂಗು ತೋಟ ಹಾಗು ಕಬ್ಬು, ಭತ್ತ ಜಮೀನುಗಳ ನಡುವೆ ಸುಂದರ ಪರಿಸರದಲ್ಲಿ ಈ ದೇವಸ್ಥಾನ ನೆಲೆ ನಿಂತಿದೆ. ಹಬ್ಬ ಹರಿದಿನಗಳಂದು ಸಾವಿರಾರು ಭಕ್ತಾಧಿಗಳು ಈ ದೇವಸ್ಥಾನಕ್ಕೆ ಬಂದು ಹೋಗುತ್ತಿದ್ದಾರೆ. ಅಲ್ಲದೆ ಸಣ್ಣ ಪ್ರಮಾಣದಲ್ಲಿ ಮದುವೆ ಸೇರಿದಂತೆ ಇನ್ನಿತರ ಶುಭ ಸಮಾರಂಭಗಳು ಸಹ ಜರುಗುತ್ತಿವೆ.
    ಮೈಸೂರು ಚಾಮರಾಜನಗರದ ಮಲೆ ಮಹಾದೇಶ್ವರ ಬೆಟ್ಟದಲ್ಲಿರುವ ದೇವಸ್ಥಾನಕ್ಕೆ ಹೋಗುವ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಯೇ ಬಂದು ಹೋಗುವುದು ವಾಡಿಕೆಯಾಗಿದೆ. ಈ ಹಿನ್ನಲೆಯಲ್ಲಿ ಈ ದೇವಸ್ಥಾನಕ್ಕೆ ಇನ್ನೂ ಹೆಚ್ಚಿನ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಅವಶ್ಯಕವಾಗಿದೆ ಎಂಬುದು ಭಕ್ತರ ಬೇಡಿಕೆಯಾಗಿದೆ.


ನಗರಸಭೆ ವಾರ್ಡ್ ೩೧ರ ಜಿಂಕ್‌ಲೈನ್ ವ್ಯಾಪ್ತಿಯ ವೀರಾಪುರ ರಸ್ತೆಯಲ್ಲಿರುವ ಶ್ರೀ ಮಲೆ ಮಾದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ ಹಿನ್ನಲೆಯಲ್ಲಿ ಬುಧವಾರ ಬೆಳಿಗ್ಗೆಯಿಂದ ಸಂಜೆವರೆಗೂ ಸಾವಿರಾರು ಭಕ್ತರಿಗೆ ಅನ್ನದಾಸೋಹ ಏರ್ಪಡಿಸಲಾಗಿದೆ.

No comments:

Post a Comment