ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಹಿಳಾ ದಿನಾಚರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಮಾ. ೨೯: ಕನ್ನಡ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಇಂದು ಹೋರಾಟ ನಡೆಸುವ ಅನಿವಾರ್ಯತೆ ಉಂಟಾಗಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ. ಮಂಜುನಾಥ್ ಹೇಳಿದರು.
ಅವರು ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಹಿಳಾ ದಿನಾಚರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಆದರೂ ಸಹ ನೆಲ-ಜಲ-ಭಾಷೆಗೆ ಸಂಬಂಧಿಸಿದಂತೆ ಬಹುತೇಕ ಸಮಸ್ಯೆಗಳು ಇಂದಿಗೂ ಜೀವಂತವಾಗಿ ಉಳಿದುಕೊಂಡಿವೆ. ಕನ್ನಡ ನಾಡಿನಲ್ಲಿ ಕನ್ನಡಿಗರು ಪ್ರತಿಯೊಂದಕ್ಕೂ ಹೋರಾಟ ನಡೆಸುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ಮಲೆನಾಡಿನ ಭಾಗದಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಕನ್ನಡ ಸರ್ಕಾರಿ ಶಾಲೆಗಳು ಮುಚ್ಚಿರುವುದು ನೋವಿನ ಸಂಗತಿಯಾಗಿದೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಹೋರಾಟ ನಡೆಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಜಾಗೃತರಾಗಬೇಕಾಗಿದೆ ಎಂದರು.
ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತ ಮಾತನಾಡಿ, ಪ್ರಸ್ತುತ ಮಹಿಳೆಯರು ಯಾವುದಕ್ಕೂ ಭಯಪಡುವ ಅಗತ್ಯವಿಲ್ಲ. ಶೋಷಣೆಗೆ ಒಳಗಾದ ಮಹಿಳೆಯರು ತಮಗೆ ಆದ ಅನ್ಯಾಯದ ವಿರುದ್ಧ ಹೋರಾಟ ನಡೆಸಬೇಕು. ಇದಕ್ಕೆ ಪೂರಕವಾದ ರಕ್ಷಣೆ, ಕಾನೂನು ಭದ್ರತೆ ಸೇರಿದಂತೆ ಎಲ್ಲಾ ರೀತಿಯ ನೆರವು ಇಂದು ಲಭ್ಯವಿದ್ದು, ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪೋಷಕರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಬಾರದು. ಪ್ರತಿಯೊಬ್ಬರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಬಳಸುವ ಮೂಲಕ ಅಪಘಾತಗಳ ನಿಯಂತ್ರಣಕ್ಕೆ ಸಹಕರಿಸಬೇಕೆಂದರು.
ಶಿವಮೊಗ್ಗ ಕಸ್ತೂರ್ಬಾ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಬಿ.ಎನ್ ತಂಬೂಳಿ ಉಪನ್ಯಾಸ ನಡೆಸಿಕೊಟ್ಟರು. ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಿದ್ದರು.
ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ಉದ್ಯಮಿ ಬಿ.ಕೆ ಜಗನ್ನಾಥ್, ಸಿದ್ದೋಜಿರಾವ್, ಮಂಜಪ್ಪ, ಸುಮತಿ ಕಾರಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment