ಭದ್ರಾವತಿ ತಾಲೂಕಿನ ಹಡ್ಲಘಟ್ಟ ಗ್ರಾಮದ ದುರ್ಗಾಂಬ ಸಮುದಾಯ ಭವನದ ಆವರಣದಲ್ಲಿ ಕಂದಾಯ ಇಲಾಖೆ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ 'ನಿಮ್ಮ ದಾಖಲೆ ನಿಮ್ಮ ಹಕ್ಕು ಮನೆ ಬಾಗಿಲಿಗೆ ತಲುಪಿಸುವುದು ನಮ್ಮ ಕರ್ತವ್ಯ' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸ್ಥಳದಲ್ಲಿಯೇ ವಿವಿಧ ದಾಖಲೆ ಪತ್ರಗಳನ್ನು ವಿತರಿಸಲಾಯಿತು.
ಭದ್ರಾವತಿ, ಮಾ. ೧೨: ವಿವಿಧ ದಾಖಲೆ ಪತ್ರಗಳಿಗಾಗಿ ಕಂದಾಯ ಇಲಾಖೆಗೆ ಸಲ್ಲಿಸುವ ದಾಖಲಾತಿಗಳು ಸಮರ್ಪಕವಾಗಿದ್ದಲ್ಲಿ ಯಾರು ಸಹ ಯಾವ ಕಛೇರಿಗೂ ಅಲೆದಾಡುವ ಅಗತ್ಯವಿಲ್ಲ. ಇದೀಗ ಮನೆ ಬಾಗಿಲಿಗೆ ದಾಖಲೆ ಪತ್ರಗಳನ್ನು ತಲುಪಿಸಲು ಕಂದಾಯ ಇಲಾಖೆ ಮುಂದಾಗಿದೆ ಎಂದು ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಹೇಳಿದರು.
ಅವರು ಶನಿವಾರ ತಾಲೂಕಿನ ಹಡ್ಲಘಟ್ಟ ಗ್ರಾಮದ ದುರ್ಗಾಂಬ ಸಮುದಾಯ ಭವನದ ಆವರಣದಲ್ಲಿ ಕಂದಾಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ನಿಮ್ಮ ದಾಖಲೆ ನಿಮ್ಮ ಹಕ್ಕು ಮನೆ ಬಾಗಿಲಿಗೆ ತಲುಪಿಸುವುದು ನಮ್ಮ ಕರ್ತವ್ಯ' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರ ಜಾರಿಗೆ ತಂದಿರುವ ಈ ಕಾರ್ಯಕ್ರಮವನ್ನು ಗ್ರಾಮದಲ್ಲಿ ಯಶಸ್ವಿಗೊಳಿಸಲು ಕಂದಾಯ ಇಲಾಖೆ ಹೆಚ್ಚಿನ ಗಮನ ಹರಿಸಿದೆ. ನಗರ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಂತೆ ಗ್ರಾಮ ಮಟ್ಟದಲ್ಲೂ ತ್ವರಿತವಾಗಿ ಕಾರ್ಯಾಚರಣೆ ನಡೆಸಲು ಆಧುನಿಕ ಸೌಲಭ್ಯಗಳನ್ನು ಹೆಚ್ಚಾಗಿ ಸದ್ಭಳಕೆ ಮಾಡಿಕೊಳ್ಳಲಾಗುವುದು. ಕಂದಾಯ ಇಲಾಖೆಯಲ್ಲಿ ಕೆಲವು ನ್ಯೂನ್ಯತೆಗಳಿದ್ದು, ಅವುಗಳನ್ನು ಸರಿಪಡಿಸಿಕೊಂಡು ಪ್ರಾಮಾಣಿಕವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
ತಹಸೀಲ್ದಾರ್ ಆರ್. ಪ್ರದೀಪ್ ಮಾತನಾಡಿ, ಕಂದಾಯ ಇಲಾಖೆ ಮಧ್ಯವರ್ತಿಗಳ ಹಾವಳಿ ಇಲ್ಲದೆ ಎಲ್ಲಾ ಸೌಲಭ್ಯಗಳನ್ನು ನೇರವಾಗಿ ಜನರಿಗೆ ತಲುಪಿಸಲು ಪಾರದರ್ಶಕ ಮತ್ತು ಪ್ರಾಮಾಣಿಕ ಆಡಳಿತಕ್ಕೆ ಹೆಚ್ಚಿನ ಒತ್ತು ನೀಡಿದೆ. ಅಲ್ಲದೆ ಸಾಮಾಜಿಕ ಬದ್ಧತೆಯೊಂದಿಗೆ ಅಸಹಾಯಕರು, ಬಡವರು ಮತ್ತು ಸೌಲಭ್ಯಗಳಿಂದ ವಂಚಿತರಾಗಿರುವ ಅರ್ಹರನ್ನು ಗುರುತಿಸಿ ಅವರಿಗೆ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಿ ಕೊಡಲಾಗುತ್ತಿದೆ. ಒಟ್ಟಾರೆ ತಾಲೂಕಿನಲ್ಲಿ ಕಂದಾಯ ಇಲಾಖೆ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇಲಾಖೆಗೆ ಎಲ್ಲರ ಸಹಕಾರ ಅಗತ್ಯವಿದೆ ಎಂದರು.
ಮಾವಿನಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಧರ ಶೆಟ್ಟರು, ಉಪಾಧ್ಯಕ್ಷೆ ನೇತ್ರಾವತಿ, ಸದಸ್ಯರಾದ ನಿರ್ಮಲ, ಆನಂದಕುಮಾರಿ, ಸುರೇಶ್, ಲೋಕೇಶ್, ಅನಂತ, ಮಾಜಿ ಅಧ್ಯಕ್ಷ ರಂಗಸ್ವಾಮಿ, ಮಾಜಿ ಸದಸ್ಯ ಉಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ರಾಣಿ ಷಣ್ಮುಖಂ, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಉಪತಹಸೀಲ್ದಾರ್‌ಗಳಾದ ನಾರಾಯಣಗೌಡ, ಅರಸು, ಮಂಜನಾಯ್ಕ, ಕಂದಾಯಾಧಿಕಾರಿ ಪ್ರಶಾಂತ್, ಶಿರಸ್ತೇದಾರ್ ರಾಧಕೃಷ್ಣ ಭಟ್, ಜಗನ್ನಾಥ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಗ್ರಾಮಸ್ಥರಿಗೆ ಸ್ಥಳದಲ್ಲಿಯೇ ವಿವಿಧ ದಾಖಲೆ ಪತ್ರಗಳನ್ನು ನೀಡಲಾಯಿತು.
No comments:
Post a Comment