Tuesday, March 15, 2022

ಭದ್ರಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಆಗ್ರಹಿಸಿ ಮಾ.೨೧ರಂದು ಹೋರಾಟ

ಭದ್ರಾವತಿ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದ ೧ನೇ ತಿರುವಿನಿಂದ ಶ್ರೀ ವಿಶ್ವ ಸ್ವರೂಪಿಣಿ ಮಾರಿಯಮ್ಮ ದೇವಸ್ಥಾನದವರೆಗೂ ಭದ್ರಾ ನದಿಗೆ ತಡೆಗೋಡೆ ನಿರ್ಮಿಸುವ ಸಂಬಂಧ ಹೋರಾಟ ರೂಪಿಸಲು ಮಂಗಳವಾರ ಪದ್ಮ ನಿಲಯ ಹೋಟೆಲ್ ಸುನಂದ ಸಭಾಂಗಣದಲ್ಲಿ ಪ್ರಜಾ ರಾಜ್ಯ ದಲಿತ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಪ್ರಮುಖರು ಮಾತನಾಡಿದರು.
    ಭದ್ರಾವತಿ, ಮಾ. ೧೫: ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದ ೧ನೇ ತಿರುವಿನಿಂದ ಶ್ರೀ ವಿಶ್ವ ಸ್ವರೂಪಿಣಿ ಮಾರಿಯಮ್ಮ ದೇವಸ್ಥಾನದವರೆಗೂ ಭದ್ರಾ ನದಿಗೆ ತಡೆಗೋಡೆ ನಿರ್ಮಿಸುವ ಸಂಬಂಧ ಹೋರಾಟ ರೂಪಿಸಲು ಮಂಗಳವಾರ ಪದ್ಮ ನಿಲಯ ಹೋಟೆಲ್ ಸುನಂದ ಸಭಾಂಗಣದಲ್ಲಿ ಪ್ರಜಾ ರಾಜ್ಯ ದಲಿತ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾ.೨೧ರಂದು ಮೊದಲ ಹಂತದಲ್ಲಿ ಹೋರಾಟ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು.
    ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖರು ಮಾತನಾಡಿ, ಮಳೆಗಾಲದಲ್ಲಿ ಭದ್ರಾ ಜಲಾಶಯದಿಂದ ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ದಲಿತರು ಹೆಚ್ಚಾಗಿ ವಾಸಿಸುತ್ತಿರುವ ಮನೆಗಳಿಗೆ ನೀರು ನುಗ್ಗುತ್ತಿದ್ದು, ಇದನ್ನು ಮನಗಂಡು ಈ ಹಿಂದಿನ ಶಾಸಕರಾಗಿದ್ದ ದಿವಂಗತ ಎಂ.ಜೆ ಅಪ್ಪಾಜಿಯವರು ತಡೆಗೋಡೆ ನಿರ್ಮಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಇದರ ಪರಿಣಾಮ ಕರ್ನಾಟಕ ನೀರಾವರಿ ನಿಗಮಕ್ಕೆ ಕಾಮಗಾರಿ ಕೈಗೆತ್ತಿಗೊಳ್ಳಲು ೯.೫ ಕೋ. ರು. ಹಣ ಬಿಡುಗಡೆಯಾಗಿರುತ್ತದೆ. ೧ನೇ ತಿರುವಿನಿಂದ ವಿಶ್ವ ಸ್ವರೂಪಿಣಿ ಮಾರಿಯಮ್ಮ ದೇವಸ್ಥಾನದವರೆಗೂ ತಡೆಗೋಡೆ ನಿರ್ಮಿಸಬೇಕಾಗಿದೆ.  ಆದರೆ ಇದೀಗ ಈ ಕಾಮಗಾರಿಯನ್ನು ದುರುದ್ದೇಶ ಪೂರ್ವಕವಾಗಿ ಬದಲಿಸಲಾಗಿದ್ದು, ದಲಿತರಿಗೆ ಅನ್ಯಾಯವೆಸಗಲಾಗಿದೆ. ಇದಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಕಾರಣಕರ್ತರಾಗಿದ್ದು, ಮೇಲ್ವರ್ಗದವರ ಒತ್ತಾಯಕ್ಕೆ ಮಣಿದು ಕಾಮಗಾರಿ ಬದಲಿಸಿದ್ದಾರೆಂದು ಆರೋಪಿಸಿದರು.
ಕಾಮಗಾರಿಯನ್ನು ೧ನೇ ತಿರುವಿನಿಂದ ಆರಂಭಿಸಬೇಕೆಂದು ಆಗ್ರಹಿಸಿ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟ ನಡೆಸಲು ತೀರ್ಮಾನಿಸಿ ಮೊದಲ ಹಂತದಲ್ಲಿ ಮಾ.೨೧ರಂದು ನಗರದ ಅಂಡರ್ ಬ್ರಿಡ್ಜ್‌ನಲ್ಲಿ ಪ್ರತಿಭಟನಾ ಹೋರಾಟಕ್ಕೆ ಕರೆ ನೀಡಲಾಯಿತು.
    ಪ್ರಜಾ ರಾಜ್ಯ ದಲಿತ ಸಂಘದ ರಾಜ್ಯಾಧ್ಯಕ್ಷ ಬಿ. ರಮೇಶ್ ಸಭೆ ಅಧ್ಯಕ್ಷತೆ ವಹಿಸಿದ್ದರು.  ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ಸಂಸ್ಥಾಪಕ ಅಧ್ಯಕ್ಷ ಎಸ್.ಕೆ ಸುಧೀಂದ್ರ, ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ನಗರಸಭೆ ಮಾಜಿ ಸದಸ್ಯ ಎಚ್.ಬಿ ರವಿಕುಮಾರ್, ಸ್ಥಳೀಯ ಮುಖಂಡರಾದ ಕುಪ್ಪಸ್ವಾಮಿ, ಗಣೇಶ್, ನ್ಯೂಟೌನ್ ಬಿಪಿಎಲ್ ಸಂಘದ ಜಗದೀಶ್, ರವಿಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

No comments:

Post a Comment