Wednesday, March 23, 2022

ರೆಸ್ಟೋರೆಂಟ್, ಮದ್ಯದಂಗಡಿ ಬೇರೆಡೆಗೆ ಸ್ಥಳಾಂತರಿಸಿ ಶಾಂತಿ ಸುವ್ಯವಸ್ಥೆ ಕಾಪಾಡಿ

ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ವಾಣಿಜ್ಯ ರಸ್ತೆಯಲ್ಲಿ ರೆಸ್ಟೋರೆಂಟ್ ಮತ್ತು ಮದ್ಯದಂಗಡಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಇವುಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ಬುಧವಾರ ಹುತ್ತಾ ಕಾಲೋನಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪದಲ್ಲಿರುವ ಆಟೋ ನಿಲ್ದಾಣ ಬಳಿ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಯಿತು.
    ಭದ್ರಾವತಿ: ನಗರಸಭೆ ವ್ಯಾಪ್ತಿಯ ಜನ್ನಾಪುರ ವಾಣಿಜ್ಯ ರಸ್ತೆಯಲ್ಲಿ ರೆಸ್ಟೋರೆಂಟ್ ಮತ್ತು ಮದ್ಯದಂಗಡಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಇವುಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ಬುಧವಾರ ಹುತ್ತಾ ಕಾಲೋನಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪದಲ್ಲಿರುವ ಆಟೋ ನಿಲ್ದಾಣ ಬಳಿ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಯಿತು.
    ಸ್ಥಳೀಯ ಮುಖಂಡ ಶಶಿಕುಮಾರ್ ಎಸ್. ಗೌಡ ಮಾತನಾಡಿ, ಜನ್ನಾಪುರ ವಾಣಿಜ್ಯ ರಸ್ತೆ ನಗರಸಭೆ ಶಾಖಾ ಕಛೇರಿ, ನಗರ ಆರೋಗ್ಯ ಕೇಂದ್ರ, ಕ್ಲಿನಿಕ್‌ಗಳು, ಶಾಲೆಗಳು, ದೇವಸ್ಥಾನ, ನ್ಯಾಯಬೆಲೆ ಅಂಗಡಿ, ಬ್ಯಾಂಕ್‌ಗಳು, ಔಷಧಿ ಹಾಗು ದಿನಸಿ ಅಂಗಡಿಗಳು ಸೇರಿದಂತೆ ಇನ್ನಿತರ ಅಂಗಡಿ ಮುಂಗಟ್ಟುಗಳಿಂದ ಕೂಡಿದೆ. ಇದರಿಂದಾಗಿ ಫಿಲ್ಟರ್‌ಶೆಡ್, ವೇಲೂರ್‌ಶೆಡ್, ಕೂಲಿಬ್ಲಾಕ್, ಆಂಜನೇಯ ಆಗ್ರಹಾರ, ನ್ಯೂಕಾಲೋನಿ, ವಿದ್ಯಾಮಂದಿರ, ಹಾಲಪ್ಪಶೆಡ್, ಹಾಜಪ್ಪ ಲೇಔಟ್, ಕೆ.ಸಿ ಬ್ಲಾಕ್, ಗಣೇಶ್‌ಕಾಲೋನಿ, ಜಿಂಕ್‌ಲೈನ್, ಭಂಡಾರಹಳ್ಳಿ ಸೇರಿದಂತೆ ಸುತ್ತಮುತ್ತನ ನಿವಾಸಿಗಳು ಪ್ರತಿ ದಿನ ಸುಮಾರು ೧೦ ಸಾವಿರಕ್ಕೂ ಹೆಚ್ಚು ಮಂದಿ ಈ ರಸ್ತೆಯಲ್ಲಿ ಸಂಚರಿಸುತ್ತಾರೆ ಎಂದರು.
    ಈ ರಸ್ತೆಯಲ್ಲಿ ಕಾನೂನು ಬಾಹಿರವಾಗಿ ಸುಮಾರು ೫ ರೆಸ್ಟೋರೆಂಟ್‌ಗಳು ಮತ್ತು ಅಬಕಾರಿ ನಿಯಮಗಳನ್ನು ಪಾಲನೆ ಮಾಡದ ಸಿಎಲ್೨ ಎರಡು ಹಾಗು ಎಂಎಸ್‌ಐಎಲ್ ಒಂದು ಮದ್ಯದಂಗಡಿ ಇದ್ದು, ಈ ಭಾಗದಲ್ಲಿ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಆಶಾಂತಿ ವಾತಾವರಣ ನಿರ್ಮಾಣವಾಗುತ್ತಿದ್ದು,  ಮಹಿಳೆಯರು, ವಯೋವೃದ್ಧರು, ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೆಲವು ದಿನಗಳ ಹಿಂದೆ ಈ ರಸ್ತೆಯಲ್ಲಿ ಅಹಿತಕರ ಘಟನೆಯೊಂದು ನಡೆದಿದ್ದು, ಆದರೂ ಸಹ ಸಂಬಂಧಪಟ್ಟ ಇಲಾಖೆಯವರು ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು.
    ರೆಸ್ಟೋರೆಂಟ್ ಮತ್ತು ಮದ್ಯದಂಗಡಿಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ತಕ್ಷಣ ಬೇರೆಡೆಗೆ ಸ್ಥಳಾಂತರಿಸಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಇಲ್ಲವಾದಲ್ಲಿ ಶಿವಮೊಗ್ಗ ಜಿಲ್ಲೆಗೆ ಏ.೨೪ರಂದು ಆಗಮಿಸಲಿರುವ  ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಪಾದಯಾತ್ರೆ ಮೂಲಕ ಭೇಟಿ ಮಾಡಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ದೂರು ನೀಡುವುದಾಗಿ ಎಚ್ಚರಿಸಿದರು.
    ಕರುನಾಡು ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್, ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಇನ್ನಿತರರು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.


No comments:

Post a Comment