ಭದ್ರಾವತಿ, ಮಾ. ೯: ಕಳೆದ ಸುಮಾರು ೨ ವರ್ಷಗಳಿಂದ ಮಹಾಮಾರಿ ಕೊರೋನಾ ಪರಿಣಾಮ ಶಾಲಾ ಮಕ್ಕಳು ಸಾಕಷ್ಟು ತೊಂದರೆ ಅನುಭವಿಸುವಂತಾಯಿತು. ಅದರಲ್ಲೂ ಎಸ್‌ಎಸ್‌ಎಲ್‌ಸಿ ಮಕ್ಕಳು ತಮ್ಮ ಮುಂದಿನ ಭವಿಷ್ಯದ ಬಗ್ಗೆ ಆತಂಕಕ್ಕೆ ಒಳಗಾಗುವಂತಾಯಿತು. ಈ ನಡುವೆ ಸರ್ಕಾರ ಪರೀಕ್ಷೆ ಸಹ ಯಶಸ್ವಿಯಾಗಿ ನಡೆಸಿತು. ಇದೀಗ ಕೊರೋನಾ ಭೀತಿ ದೂರವಾಗಿದ್ದು, ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಯಾವುದೇ ಆತಂಕ, ಭಯವಿಲ್ಲದೆ ಯಶಸ್ವಿಯಾಗಿ ಎದುರಿಸಬೇಕೆಂಬ ಆಶಯ ಬಹುತೇಕ ವಿದ್ಯಾರ್ಥಿಗಳು ಹೊಂದಿದ್ದಾರೆ. ಇದಕ್ಕೆ ಪೂರಕವೆಂಬಂತೆ ಇದೀಗ ನೂತನವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ನಾಗೇಂದ್ರಪ್ಪರವರು ಅತಿ ಕಡಿಮೆ ಅವಧಿಯಲ್ಲಿ ತಮ್ಮ ಕಾರ್ಯ ಕ್ಷಮತೆ ತೋರ್ಪಡಿಸಬೇಕಾಗಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ, ಈ ಬಾರಿ ತಾಲೂಕಿನಲ್ಲಿ ಉತ್ತಮ ಫಲಿತಾಂಶ ಬರುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ. ಈಗಾಗಲೇ ಬಹುತೇಕ ಶಾಲೆಗಳಲ್ಲಿ ಪಠ್ಯ ಪುಸ್ತಕಗಳ ಬೋಧನೆ ಮುಕ್ತಾಯಗೊಂಡಿದ್ದು, ಇದೀಗ ಕೇವಲ ೧೫ ದಿನ ಬಾಕಿ ಉಳಿದಿದ್ದು, ಶಾಲಾ ಹಂತದಲ್ಲಿಯೇ ಎಲ್ಲಾ ರೀತಿಯ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ಅಗತ್ಯವಿರುವ ಎಲ್ಲಾ ರೀತಿಯ ತಂತ್ರಗಾರಿಕೆಗಳನ್ನು ರೂಪಿಸಿಕೊಳ್ಳುವಂತೆ ಶಿಕ್ಷಕರಿಗೆ ಸೂಚಿಸಲಾಗಿದೆ ಎಂದರು.
ಈಗಾಗಲೇ ಭದ್ರಾವತಿ ಆಕಾಶವಾಣಿ ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಪೋನ್ ಇನ್ ಕಾರ್ಯಕ್ರಮದ ಮೂಲಕ ಕಲಿಕೆಯಲ್ಲಿನ ಅವರ ಸಮಸ್ಯೆಗಳನ್ನು ಸಂಪನ್ಮೂಲ ವ್ಯಕ್ತಿಗಳಿಂದ ಬಗೆಹರಿಸಲಾಗುತ್ತಿದೆ. ಅಲ್ಲದೆ ಈ ಕಾರ್ಯಕ್ರಮವನ್ನು ತಾಲೂಕು ಮಟ್ಟದಲ್ಲಿ ಎಲ್ಲಾ ಶಾಲೆಗಳನ್ನು ಒಟ್ಟುಗೂಡಿಸಿ ಅಯೋಜಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ಹಿಂದಿನ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶದ ಆಧಾರದ ಮೇಲೆ ಹಿಂದುಳಿದಿರುವ ಶಾಲೆಗಳನ್ನು ಗುರುತಿಸಿ ಆ ಶಾಲೆಗಳಿಗೆ ಹೆಚ್ಚಿನ ಗಮನ ಹರಿಸಲಾಗುವುದು. ಈ ಎಲ್ಲಾ ಕಾರ್ಯಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಮುಂದಿನ ೨ ದಿನಗಳಲ್ಲಿ ಸಭೆ ನಡೆಸಲಾಗುವುದು ಎಂದರು.
No comments:
Post a Comment