ಡಾ. ಎಂ.ವಿ ಅಶೋಕ್ ಮತ್ತು ಡಾ. ಡಿ.ಎಸ್ ಶಿವಪ್ರಕಾಶ್‌ರವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವೋತ್ತಮ ಸೇವಾ ಪ್ರಶಸ್ತಿ ಲಭಿಸಿದ ಹಿನ್ನಲೆಯಲ್ಲಿ ಈ ಇಬ್ಬರು ವೈದ್ಯರನ್ನು ಭದ್ರಾವತಿಯಲ್ಲಿ ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಏ. ೩೦: ಸರ್ಕಾರಿ ಹುದ್ದೆಯಲ್ಲಿರುವವರು ವ್ಯವಸ್ಥೆಯಲ್ಲಿನ ಕೆಲವೊಂದು ಲೋಪದೋಷಗಳನ್ನು ಸರಿಪಡಿಸಿಕೊಂಡು ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಇದೆ ಎಂದು ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ಹಾಗು ಉದರ ದರ್ಶಕ ಹಿರಿಯ ತಜ್ಞ ವೈದ್ಯ ಡಾ. ಡಿ.ಎಸ್ ಶಿವಪ್ರಕಾಶ್ ಹೇಳಿದರು.
ಅವರು ತಾಲೂಕು ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕರ್ತವ್ಯ ಸ್ಥಳದಲ್ಲಿನ ಕೆಲವೊಂದು ವ್ಯವಸ್ಥೆಗಳನ್ನು ಬದಲಾಯಿಸಿಕೊಳ್ಳಬೇಕು. ಇಲ್ಲವಾದಲ್ಲಿ ನಮ್ಮ ಕರ್ತವ್ಯವನ್ನು ಯಶಸ್ವಿಯಾಗಿ ನಿಭಾಯಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರು ಸಾಮಾಜಿಕ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು. ಇಲ್ಲವಾದಲ್ಲಿ ಲೋಪದೋಷಗಳನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಮ್ಮ ಕರ್ತವ್ಯವನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಮಾತನಾಡಿ, ಆಯಾ ಸಂದರ್ಭಗಳಿಗೆ ತಕ್ಕಂತೆ ನಾವು ನಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ಕರ್ತವ್ಯ ನಿರ್ವಹಿಸಿದಾಗ ಮಾತ್ರ ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯ. ನಾನು ನನ್ನ ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ ಹೊರತು ಯಾವುದೇ ಪ್ರಶಸ್ತಿಯನ್ನು ನಿರೀಕ್ಷಿಸಿರಲಿಲ್ಲ. ಆದರೂ ನನ್ನ ಕರ್ತವ್ಯವನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ಸಂತಸವನ್ನುಂಟು ಮಾಡಿದೆ ಎಂದರು.
ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ರಾಜೇಶ್ವರಿ ಮಾತನಾಡಿ, ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಹೆಚ್ಚಿನ ಸಹಕಾರ ಲಭ್ಯವಾಗುತ್ತಿದೆ. ಉತ್ತಮವಾಗಿ ಕರ್ತವ್ಯ ನಿರ್ವಹಿಸುವಂತಹ ವಾತಾವರಣವನ್ನು ಇಲ್ಲಿನ ವೈದ್ಯರು, ಸಿಬ್ಬಂದಿಗಳು ಕಲ್ಪಿಸಿಕೊಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅನುಷಾ, ಎಚ್. ರಘುರಾವ್, ಪಿ. ಕೃಷ್ಣಮೂರ್ತಿ ಸೇರಿದಂತೆ ವೈದ್ಯರು, ಆಶಾ ಕಾರ್ಯಕರ್ತೆಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಆರೋಗ್ಯ ರಕ್ಷಾ ಸಮಿತಿ ಸದಸ್ಯ ಗಣೇಶ್‌ರಾವ್ ನಿರೂಪಿಸಿದರು. ರಾಮ್‌ನಾಥ್ ಬರ್ಗೆ ವಂದಿಸಿದರು.
ಡಾ. ಎಂ.ವಿ ಅಶೋಕ್ ಮತ್ತು ಡಾ. ಡಿ.ಎಸ್ ಶಿವಪ್ರಕಾಶ್‌ರವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವೋತ್ತಮ ಸೇವಾ ಪ್ರಶಸ್ತಿ ಲಭಿಸಿದ ಹಿನ್ನಲೆಯಲ್ಲಿ ಈ ಇಬ್ಬರು ವೈದ್ಯರನ್ನು ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
No comments:
Post a Comment