Sunday, April 10, 2022

ಕೇಂದ್ರ, ರಾಜ್ಯದಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಸರ್ಕಾರಗಳು ಅಧಿಕಾರಕ್ಕೆ ಬರಲಿ

ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರ ಮತ್ತು ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಭಾನುವಾರ ಭದ್ರಾವತಿ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಏ. ೧೦: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರ ಮತ್ತು ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಭಾನುವಾರ ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ಪೆಟ್ರೋಲ್, ಡೀಸೆಲ್ ಹಾಗು ಅಡುಗೆ ಅನಿಲ ಬೆಲೆ ಏರಿಕೆಯಿಂದಾಗಿ ದಿನನಿತ್ಯದ ಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದಾಗಿ ಮಧ್ಯಮ ಹಾಗು ಬಡ ವರ್ಗದವರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರೈತ ಹಾಗು ಕಾರ್ಮಿಕ ವಿರೋಧಿ ನೀತಿಗಳಿಂದಾಗಿ ದೇಶದಲ್ಲಿ ರೈತರು, ಕಾರ್ಮಿಕರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದೆ. ನಿರುದ್ಯೋಗ ಹೆಚ್ಚಾಗಿದ್ದು, ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಕೇಂದ್ರ ಹಾಗು ರಾಜ್ಯದಲ್ಲಿ ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವ ಸರ್ಕಾರಗಳು ಅಧಿಕಾರಕ್ಕೆ ಬರಬೇಕು. ಆಗ ಮಾತ್ರ ಈ ದೇಶದಲ್ಲಿ ನೆಮ್ಮದಿ ಬದುಕು ಕಾಣಬಹುದು. ಈ ಹಿನ್ನಲೆಯಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಬೇಕೆಂದರು.
    ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಜಿ. ವಿನೋದ್ ಕುಮಾರ್ ಮತ್ತು ಗ್ರಾಮಾಂತರ ಘಟಕದ ಅಧ್ಯಕ್ಷ ಅಫ್ತಾಬ್ ಅಹಮದ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಅಡುಗೆ ಸಿಲಿಂಡರ್‌ಗಳಿಗೆ ಹೂವಿನ ಹಾರ ಹಾಕಿ ವಿನೂತನವಾಗಿ ಪ್ರತಿಭಟಿಸಲಾಯಿತು.
    ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಮಹಮದ್ ರಫೀಕ್, ಅಮೋಸ್, ಹಿಂದುಳಿದ ಘಟಕದ ಅಧ್ಯಕ್ಷ ಬಿ. ಗಂಗಾಧರ್, ಕೃಷ್ಣರಾಜ್, ತಬ್ರೇಜ್ ಖಾನ್, ನವೀನ್‌ಕುಮಾರ್, ವರಣ್, ಸಜ್ಜದ್, ಸಂತೋಷ್, ಭರತ್, ಸುನಿಲ್, ಆದರ್ಶ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

No comments:

Post a Comment