ಭದ್ರಾವತಿ ಬೊಮ್ಮನಕಟ್ಟೆ ಸರ್.ಎಂ ವಿಶ್ವೇಶ್ವರಯ್ಯ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ನೂತನ ಕೊಠಡಿ ಉದ್ಘಾಟನಾ ಸಮಾರಂಭವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ನೆರವೇರಿಸಿದರು.
ಭದ್ರಾವತಿ, ಏ. ೯: ಇಂದಿನ ದಿನಗಳಲ್ಲಿ ವಿದ್ಯೆಯೊಂದಿಗೆ ಜ್ಞಾನ ಹೊಂದಿರುವವರನ್ನು ಮಾತ್ರ ಸಮಾಜದಲ್ಲಿ ಗೌರವದಿಂದ ಕಾಣುತ್ತಾರೆ. ಇದನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಂಡು ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು.
ಅವರು ಶನಿವಾರ ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ ಸರ್.ಎಂ ವಿಶ್ವೇಶ್ವರಯ್ಯ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿದರು.
ಇಂದಿನ ಸಮಾಜದಲ್ಲಿ ವಿದ್ಯೆ, ಜ್ಞಾನವಿಲ್ಲದೆ ಬದುಕುವುದು ಅಸಾಧ್ಯ. ಪೋಷಕರು ಸಹ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ಹರಿಸಬೇಕು. ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ಮುನ್ನಡೆಯಬೇಕು. ಸಾಧನೆಯ ಗುರಿ ತಲುಪಬೇಕೆಂದರು.
ಕಾಲೇಜಿನ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧವಿದ್ದು, ಇನ್ನೂ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸಹ ಹೆಚ್ಚಿನ ಗಮನ ಹರಿಸಬೇಕೆಂದರು.
ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಎ ವಿಷ್ಣುಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿ, ಇತ್ತೀಚಿನ ಕೆಲವು ವರ್ಷಗಳಿಂದ ಕಾಲೇಜು ಹಂತ ಹಂತವಾಗಿ ಸಾಕಷ್ಟು ಬೆಳವಣಿಗೆ ಹೊಂದುತ್ತಿದೆ. ನಿರೀಕ್ಷೆಗೂ ಮೀರಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಇದಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಕಾರಣಕರ್ತರಾಗಿದ್ದು, ಈ ಹಿನ್ನಲೆಯಲ್ಲಿ ಕಾಲೇಜಿನ ಪರವಾಗಿ ಅಭಿನಂದಿಸುತ್ತೇನೆ. ಪ್ರಸ್ತುತ ರಾಜ್ಯದಲ್ಲಿರುವ ಪ್ರತಿಷ್ಠಿತ ಸರ್ಕಾರಿ ಕಾಲೇಜುಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಕೃಷ್ಣಮೂರ್ತಿ, ನಂಜುಂಡಯ್ಯ, ವಿಜಯಪ್ರಭು, ವಾಹಿದ್, ಬಾಷಾ, ಶರಣಪ್ಪ, ಹರೀಶ್, ಅಂಜಲಿ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಹಾಗು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
No comments:
Post a Comment